ಸುದ್ದಿಲೈವ್/ಶಿವಮೊಗ್ಗ
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೊ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದೆ. ಸಮಾಜದಲ್ಲಿ ಈ ಪಿಡುಗನ್ನು ನಿವಾರಿಸಲು ಈಗಾಗಲೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆಂದೋಲನ ಮಾಡುತ್ತಿದೆ. ಅದಕ್ಕೆ ಜಿಲ್ಲಾ ಶಿಕ್ಷಣ ಇಲಾಖೆಯು ಸಹಕಾರ ನೀಡುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಅಪರ್ಣಾ ಎಂ ಕೊಳ್ಳಾ ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದೊಂದಿಗೆ ನಗರದ ಜಿಲ್ಲಾ ಶೈಕ್ಷಣಿಕ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಆರ್‌ಟಿಇ ಕಾಯ್ದೆಯ ಸಮರ್ಪಕ ಅನುಷ್ಠಾನದ ಕುರಿತು ಶಿಕ್ಷಣ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳಲ್ಲಿ ಹಿಂದಿಗಿಂತ 2024-25 ರಲ್ಲಿ ಹೆಚ್ಚಿನ ಪ್ರಕರಣಗಳು ಆಯೋಗದ ಗಮನಕ್ಕೆ ಬಂದಿವೆ. ಅದರಲ್ಲಿ ಸರ್ಕಾರಿ ಶಾಲೆಯ 8, 9 ನೇ ತರಗತಿ ಹಾಗೂ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳೆ ಹೆಚ್ಚಾಗಿದ್ದಾರೆ. ವಿದ್ಯಾರ್ಥಿಗಳು ಮನೆ ಬಿಟ್ಟರೆ ಕಾಲೇಜಿನಲ್ಲಿ ಹೆಚ್ಚಿನ ಸಮಯ ಕಳೆಯುತ್ತಾರೆ. ಅವರೆಲ್ಲಾ ಹೊಣೆ, ರಕ್ಷಣೆ ಶಿಕ್ಷಣ ಇಲಾಖೆಯದ್ದಾಗಿದೆ. ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣವನ್ನು ತಡೆಯುವಲ್ಲಿ ಶಿಕ್ಷಣ ಇಲಾಖೆ ಸಹಕರಿಸಬೇಕು. ಇದನ್ನು ತಡೆಗಟ್ಟುವಲ್ಲಿ ಜಿಲ್ಲಾ ಶಿಕ್ಷಣ ಇಲಾಖೆ ಮುಂದಾಗಬೇಕು. ಶಿಕ್ಷಣ ಇಲಾಖೆಯ ಅಡಿಯಲ್ಲಿ ಎಫ್‌ಐಆರ್ ದಾಖಲಾಗುವಂತೆ ಮಾಡಬೇಕು ಎಂದು ತಿಳಿಸಿದರು.
ಆರ್‌ಟಿಇ ಕಾಯ್ದೆಯ ಬಗ್ಗೆ ಪ್ರತಿ ತಾಲ್ಲೂಕಿನ ಬಿಇಓಗಳು ಗಮನಹರಿಸಬೇಕು. ಪ್ರತಿ ತಾಲ್ಲೂಕಿನಲ್ಲಿ ಎಷ್ಟು ಮಕ್ಕಳು ಆರ್‌ಟಿಇ ಅಡಿಯಲ್ಲಿ ಶಾಲೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ನೀಡಬೇಕು. ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಆರ್‌ಟಿಇ ಶಿಕ್ಷಣ ಸರಿಯಾದ ಕ್ರಮದಲ್ಲಿ ನೀಡುತ್ತಿದ್ದಾರೆಯೇ ಎಂದು ಪರಿಶೀಲನೆ ಮಾಡಬೇಕು. ಇದರಡಿಯಲ್ಲಿನ ಓದುವ ಮಕ್ಕಳಿಗೆ ಸರ್ಕಾರ ನೀಡುವ ಸೌಲಭ್ಯಗಳನ್ನು ಶಿಕ್ಷಣ ಇಲಾಖೆೆ ಸರಿಯಾಗಿ ತಲುಪಿಸಬೇಕು ಎಂದರು.
ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಮತ್ತು ಸಾಮಾನ್ಯ ವಿದ್ಯಾರ್ಥಿಗಳಿಗೆ ಫಲಿತಾಂಶದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ನನ್ನ ಗಮನಕ್ಕೆ ಬಂದಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ. ಸರ್ಕಾರವು ಇಂತಹ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸೌಲಭ್ಯವನ್ನು ನೀಡಿದೆ. ಅದರ ಸರಿಯಾದ ಬಳಕೆ ಆಗುತ್ತಿದೆಯಾ ಎಂದು ಪರಿಶೀಲನೆ ಮಾಡಬೇಕು. ಇದಲ್ಲದೆ ಖಾಸಗಿ ಶಾಲೆಗಳು ಶುಲ್ಕದ ನೆಪದಲ್ಲಿ ಮಕ್ಕಳಿಗೆ ವರ್ಗಾವಣೆ ಪತ್ರ ನೀಡದಿದ್ದರೆ ಕೂಡಲೇ ಕ್ರಮಕೈಗೊಳ್ಳಬೇಕು. 18 ವರ್ಷದೊಳಗಿನ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವುದು ಹೆಚ್ಚಾಗಿದ್ದು, ಈ ಕುರಿತು ಗಮನಹರಿಸಿ, ಎಲ್ಲಾ ಕಾಲೇಜುಗಳಿಗೆ ನೋಟಿಸ್ ನೀಡಬೇಕು ಎಂದರು.
ಸಮಾಜದ ಸರಿಯಾದ ಮಾರ್ಗದಲ್ಲಿ ಸಾಗಬೇಕೆಂದರೆ ಶಿಕ್ಷಣವೇ ಮುಖ್ಯ. ಅದು ನಮ್ಮ ಕರ್ತವ್ಯ. ನಾವದನ್ನು ಮರೆಯಬಾರದು. ಮಕ್ಕಳ ಭವಿಷ್ಯ ನಮ್ಮ ಕೈಯಲ್ಲಿದೆ. ನಮ್ಮಿಂದ ಅವರಲ್ಲ, ಅವರಿಂದ ನಾವು ಎನ್ನುವುದು ಮರೆಯಬಾರದು ಎಂದರು.
ಸಭೆಯಲ್ಲಿ ಡಿಡಿಪಿಐ ಎಸ್.ಆರ್.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಯಾದ ಆರ್.ಮಂಜುನಾಥ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣಪ್ಪ, ಡಯಟ್ ಕಾಲೇಜ್ ಪ್ರಾಶುಂಪಾಲರಾದ ಬಿಂಬ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.