ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯ ಆರೋಪ: ಜೂನ್ 25ರಂದು ಕರವೇಯಿಂದ ‘ಹುಬ್ಬಳ್ಳಿ ಚಲೋ’ ಹೋರಾಟ-Allegations of injustice against Kannadigas in railway exams: 'Hubballi Chalo' protest from Karave on June 25

 SUDDILIVE || SHIVAMOGGA

ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯ ಆರೋಪ: ಜೂನ್ 25ರಂದು ಕರವೇಯಿಂದ ‘ಹುಬ್ಬಳ್ಳಿ ಚಲೋ’ ಹೋರಾಟ-Allegations of injustice against Kannadigas in railway exams: 'Hubballi Chalo' protest from Karave on June 25
Kannada, railway

ಶಿವಮೊಗ್ಗ: ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದೇ ಕನ್ನಡಿಗರಿಗೆ ಉದ್ಯೋಗಾವಕಾಶಗಳಿಂದ ವಂಚಿಸಲಾಗುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎನ್. ನಾರಾಯಣಗೌಡ ಬಣ) ಜೂನ್ 25ರಂದು ‘ಹುಬ್ಬಳ್ಳಿ ಚಲೋ’ ಹೋರಾಟಕ್ಕೆ ಕರೆ ನೀಡಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಆರ್. ಮಂಜು, ನೈಋತ್ಯ ರೈಲ್ವೆ ವಿಭಾಗದ ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿರುವುದು ಕನ್ನಡಿಗ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಇದರಿಂದ ಸ್ಥಳೀಯ ಯುವಕರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗುತ್ತಿದೆ ಎಂದು ಹೇಳಿದರು.

ಕರವೇ ರಾಜ್ಯಾಧ್ಯಕ್ಷರು ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದರೂ, ಇದುವರೆಗೆ ಯಾವುದೇ ಸ್ಪಷ್ಟ ಭರವಸೆ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ಇಲಾಖೆ ಸ್ಥಳೀಯ ಭಾಷೆಗೆ ಆದ್ಯತೆ ನೀಡಬೇಕು ಹಾಗೂ ಕನ್ನಡಿಗರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಜೂನ್ 25ರಂದು ಮೈಸೂರು, ಬೆಂಗಳೂರು ಮತ್ತು ಹುಬ್ಬಳ್ಳಿ ವಿಭಾಗಗಳಲ್ಲಿ ನಡೆಯಲಿರುವ ರೈಲ್ವೆ ಪರೀಕ್ಷೆಗಳ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಶಿವಮೊಗ್ಗ ಜಿಲ್ಲೆಯಿಂದ ಸುಮಾರು 260ಕ್ಕೂ ಹೆಚ್ಚು ಕಾರ್ಯಕರ್ತರು ಹುಬ್ಬಳ್ಳಿಗೆ ತೆರಳಲಿದ್ದಾರೆ ಎಂದರು. ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರ ಮತ್ತು ರೈಲ್ವೆ ಇಲಾಖೆಯ ಗಮನ ಸೆಳೆಯುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಈ ಹಿಂದೆ ನಡೆದ ರೈಲ್ವೆ ಪರೀಕ್ಷೆಗಳ ಸಂದರ್ಭದಲ್ಲೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಕರವೇ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Allegations of injustice against Kannadigas in railway exams: 'Hubballi Chalo' protest from Karave on June 25

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close