SUDDILIVE ||Agumbe
ತಲ್ಲೂರಿನಲ್ಲಿ ಕಾರು ಡಿಕ್ಕಿ: ಕೂಲಿ ಕಾರ್ಮಿಕ ಸಾವು-Car collision in Tallur: Laborer dies while taking him to hosital
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ತಲ್ಲೂರು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ತಲ್ಲೂರು ಗ್ರಾಮದ ಕೊಪ್ಪ ರಸ್ತೆ ನಿವಾಸಿ ಸಂಜಯ್ ಜಿ.ಪಿ. (62) ಮೃತ ದುರ್ದೈವಿ. ಇವರು ಹಿಂದೆ ಬಸ್ ಏಜೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಘಟನೆ ನಡೆದ ದಿನ ಸಂಜಯ್ ಅವರು ತಮ್ಮ ಅಣ್ಣ ರಾಮನಾಥ್ ಅವರೊಂದಿಗೆ ವಾಕಿಂಗ್ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ತಲ್ಲೂರಿನ ಮಹೇಶ್ ಅವರ ಹೋಟೆಲ್‌ಗೆ ತೆರಳಿ ಟೀ ಸೇವಿಸಿದ್ದರು.
ಟೀ ಕುಡಿದು ಮನೆಗೆ ತೆರಳಲು ಶಿವಮೊಗ್ಗ-ಉಡುಪಿ ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ವೇಳೆ ಆಗುಂಬೆ ಬಸ್ ನಿಲ್ದಾಣದ ಕಡೆಯಿಂದ ವೇಗವಾಗಿ ಬಂದ ಕಾರೊಂದು ಸಂಜಯ್ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಅವರು ರಸ್ತೆಯ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ತಲೆ, ಸೊಂಟ ಹಾಗೂ ಕೈಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಆಂಬ್ಯುಲೆನ್ಸ್ ಮೂಲಕ ಹೆಬ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಸಂಜಯ್ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದೇ ವೇಳೆ ಕಾರ್ಯನಿಮಿತ್ತ ಆಗುಂಬೆಗೆ ಭೇಟಿ ನೀಡಿದ್ದ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ಅವರು ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರೊಂದಿಗೆ ಚರ್ಚಿಸಿ, ರಸ್ತೆ ಸುರಕ್ಷತೆ ಹಾಗೂ ಅಪಘಾತ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
Car collision in Tallur: Laborer dies while taking him to hosital
