SUDDILIVE || SHIVAMOGGA
ಬಾಲ್ಯ ವಿವಾಹ, ಪೋಕ್ಸೋ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ- Child marriage, POCSO case: Four accused sentenced to 20 years in prison
ಅಪ್ರಾಪ್ತ ಬಾಲಕಿಯೊಂದಿಗೆ ಬಾಲ್ಯ ವಿವಾಹ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.85 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
ಶಿವಮೊಗ್ಗ ತಾಲ್ಲೂಕಿನ 27 ವರ್ಷದ ಯುವಕನೊಬ್ಬ 2024ರಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪರಿಚಯಿಸಿಕೊಂಡು ಆಕೆಯೊಂದಿಗೆ ಬಾಲ್ಯ ವಿವಾಹ ಮಾಡಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ, ಲೈಂಗಿಕ ದೌರ್ಜನ್ಯ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಆಗಿನ ಕುಂಸಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಕೆ. ಪಾಟೀಲ್ (ಹಾಲಿ ಕೋಟೆ ಪೊಲೀಸ್ ಠಾಣೆ) ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ವಿಚಾರಣೆ ವೇಳೆ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಆರೋಪಿತರ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಎ1ರಿಂದ ಎ4ರವರೆಗಿನ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹1,85,000 ದಂಡ ವಿಧಿಸಿ ಆದೇಶಿಸಿದ್ದಾರೆ.
ಇದಲ್ಲದೆ, ಪ್ರಕರಣದ ನೊಂದ ಬಾಲಕಿಗೆ ₹4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
