SUDDILIVE || SHIVAMOGGA
ಡಿಕೆಶಿ ಯುಗಾರಂಭ: ಶಿವಮೊಗ್ಗದಲ್ಲಿ ಸಂಭ್ರಮದ ನಡುವೆ ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ-DKSHI Yugarambha: Live broadcast of the swearing-in ceremony amidst celebrations in Shivamogga
ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ರಾಜಕೀಯ ಅಧ್ಯಾಯಕ್ಕೆ ಚಾಲನೆ ದೊರೆತಿದೆ. ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ವೀಕ್ಷಿಸಲು ಶಿವಮೊಗ್ಗ ನಗರದಲ್ಲಿ ಎರಡು ಕಡೆ ವಿಶೇಷ ಲೈವ್ ವೀಕ್ಷಣಾ ವ್ಯವಸ್ಥೆ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮದಿಂದ ಭಾಗವಹಿಸಿದರು.
ಗಂಗಾಧರಜ್ಜನವರ ಹೆಸರಿನಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಡಾ. ಜಿ. ಪರಮೇಶ್ವರ್, ಡಾ. ಶರಣ್ ಪ್ರಕಾಶ್ ಪಾಟೀಲ್, ಕೆ.ಹೆಚ್. ಮುನಿಯಪ್ಪ, ಭೈರತಿ ಸುರೇಶ್, ಯು.ಟಿ. ಖಾದರ್, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಯತೀಂದ್ರ ಸಿದ್ದರಾಮಯ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನಗರದ ಶಿವಪ್ಪ ನಾಯಕ ವೃತ್ತದಲ್ಲಿ ತಾತ್ಕಾಲಿಕ ಟೆಂಟ್ ನಿರ್ಮಿಸಿ, ಬೃಹತ್ ಎಲ್‌ಇಡಿ ಪರದೆಯ ಮೂಲಕ ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮ ವೀಕ್ಷಿಸಿದ ಅಭಿಮಾನಿಗಳು ಡಿ.ಕೆ. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಬಳಿಕ ಸಾರ್ವಜನಿಕರಿಗೆ ಉಪಹಾರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ದೇವೇಂದ್ರಪ್ಪ, ಎಚ್.ಸಿ. ಯೋಗೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ವೇಳೆ ನಗರದ ಮಂಜುನಾಥ ಚಿತ್ರಮಂದಿರದಲ್ಲಿ ಕೆ. ರಂಗನಾಥ್ ನೇತೃತ್ವದಲ್ಲಿ ವಿಶೇಷ ಲೈವ್ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಚಿತ್ರಮಂದಿರದ ಬೆಳ್ಳಿ ಪರದೆಯ ಮೇಲೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ ಪ್ರದರ್ಶಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಲಡ್ಡು ವಿತರಿಸಿ ಸಂಭ್ರಮ ಆಚರಿಸಲಾಯಿತು. ನಂತರ ಚಿತ್ರಮಂದಿರದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದನ್ನು ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಹೊಸ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದರು.



