ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲು ಆಗ್ರಹ-Demand to file a case of atrocity against the officers and send them to jail

SUDDILIVE || SHIVAMOGGA

ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲು ಆಗ್ರಹ-Demand to file a case of atrocity against the officers and send them to jail

Demand, jail

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ರೂಮ್ ಸೌಲಭ್ಯ ಕಲ್ಪಿಸಲು 2021–22ನೇ ಸಾಲಿನಲ್ಲಿ ಬಿಡುಗಡೆಯಾದ ₹4.25 ಕೋಟಿ ಎಸ್‌ಇಪಿ–ಟಿಎಸ್‌ಪಿ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳು ಹಾಗೂ ಕಿಯೋನಿಕ್ಸ್ ಸಂಸ್ಥೆಯ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಎಂ. ಗುರುಮೂರ್ತಿ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೃತ್ತ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಹಿಂದಿನ ಕುಲಸಚಿವೆ (ಆಡಳಿತ) ಜಿ. ಅನುರಾಧಾ, ಸ್ನಾತಕೋತ್ತರ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ. ಸಿ. ಗೀತಾ, ಹಿಂದಿನ ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ ಹಾಗೂ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ವೈ.ಎನ್. ರಾಮಚಂದ್ರ ವಿರುದ್ಧ ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಭದ್ರಾವತಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದರು.

ಕುವೆಂಪು ವಿಶ್ವವಿದ್ಯಾಲಯವು ಗುಣಮಟ್ಟದ ಶೈಕ್ಷಣಿಕ ಹಾಗೂ ಸಂಶೋಧನಾ ಸೌಲಭ್ಯಗಳ ಮೂಲಕ ನ್ಯಾಕ್‌ನಿಂದ ‘ಎ’ ಗ್ರೇಡ್ ಮಾನ್ಯತೆ ಪಡೆದಿದ್ದು, ಕೇಂದ್ರ ಸರ್ಕಾರದ ಎನ್‌ಐಆರ್‌ಎಫ್–2020 ಶ್ರೇಯಾಂಕದಲ್ಲಿ 73ನೇ ಸ್ಥಾನ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಿಂದ ನಾಲ್ಕು ಸ್ಟಾರ್ ಶ್ರೇಣಿ ಪಡೆದಿದೆ. ಪ್ರಸ್ತುತ ವಿಶ್ವವಿದ್ಯಾಲಯದಲ್ಲಿ 750ಕ್ಕೂ ಅಧಿಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಆದರೆ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸದೇ ಎಸ್‌ಇಪಿ–ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಕೋಟ್ಯಂತರ ರೂಪಾಯಿ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವುದು ಗಂಭೀರ ವಿಚಾರವಾಗಿದೆ ಎಂದು ಅವರು ಆರೋಪಿಸಿದರು.

ದುರುಪಯೋಗಗೊಂಡಿರುವ ₹4.25 ಕೋಟಿ ಅನುದಾನವನ್ನು ಸರ್ಕಾರ ವಾಪಸ್ ಪಡೆದು, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗುರುಮೂರ್ತಿ ಆಗ್ರಹಿಸಿದರು.

Demand to file a case of atrocity against the officers and send them to jail

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close