SUDDILIVE || SHIVAMOGGA
ಅಲ್ಪಸಂಖ್ಯಾತರಿಗೆ 6 ಸಚಿವ ಸ್ಥಾನ, ಒಬ್ಬರಿಗೆ ಡಿಸಿಎಂ ಹುದ್ದೆ ನೀಡಲು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಆಗ್ರಹ-District Congress Minority Unit demands 6 ministerial posts for minorities, one DCM post
ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು. ಮುಸ್ಲಿಂ ಸಮುದಾಯಕ್ಕೆ ಐದು ಸಚಿವ ಸ್ಥಾನಗಳು, ಒಬ್ಬ ಅಲ್ಪಸಂಖ್ಯಾತ ಪ್ರತಿನಿಧಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಹುದ್ದೆ ಹಾಗೂ ಕ್ರೈಸ್ತ ಸಮುದಾಯಕ್ಕೆ ಒಂದು ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಆಗ್ರಹಿಸಿದೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸೈಯದ್ ವಾಹಿದ್ ಅಡ್ಡು ಮಾತನಾಡಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಸರ್ವಧರ್ಮ ಸಮಭಾವದ ಆಶಯಗಳಿಗೆ ಅನುಗುಣವಾಗಿ ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ನ್ಯಾಯಯುತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರಸ್ತುತ ಮಲೆನಾಡು ಮತ್ತು ಮಧ್ಯ ಕರ್ನಾಟಕ ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಉತ್ತರ ಕನ್ನಡ, ಉಡುಪಿ ಹಾಗೂ ಚಿತ್ರದುರ್ಗ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಒಬ್ಬರೂ ಶಾಸಕರಿಲ್ಲದ ಪರಿಸ್ಥಿತಿ ಇದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ಆರು ಮಂದಿ ಮುಸ್ಲಿಂ ಸಚಿವರಿಗೆ ಅವಕಾಶ ನೀಡಲಾಗಿತ್ತು. ಅವರಲ್ಲಿ ಒಬ್ಬ ಮಹಿಳಾ ಸಚಿವರೂ ಇದ್ದರು. ಆದರೆ ಆ ಅವಧಿಯ ನಂತರ ಇಂದಿನವರೆಗೆ ಮಲೆನಾಡು ಭಾಗಕ್ಕೆ ಒಬ್ಬ ಮಹಿಳಾ ಸಚಿವರು ಅಥವಾ ಮುಸ್ಲಿಂ ಸಚಿವರಿಗೆ ಅವಕಾಶ ದೊರೆತಿಲ್ಲ ಎಂಬುದು ವಿಷಾದನೀಯ ಸಂಗತಿಯಾಗಿದೆ ಎಂದು ಹೇಳಿದರು.
ಆದ್ದರಿಂದ ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಕನಿಷ್ಠ ಐದು ಸಚಿವ ಸ್ಥಾನಗಳು ಹಾಗೂ ಒಬ್ಬ ಅಲ್ಪಸಂಖ್ಯಾತ ಜನಪ್ರತಿನಿಧಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಮನವಿ ಮಾಡಿದರು.
ಅಲ್ಪಸಂಖ್ಯಾತ ಮಹಿಳೆಯರ ರಾಜಕೀಯ ಸಬಲೀಕರಣದ ದೃಷ್ಟಿಯಿಂದ ಹಾಗೂ ಪಕ್ಷದ ಸಂಘಟನೆ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಬಲ್ಕಿಸ್ ಬಾನು ಅವರಿಗೆ ಸಚಿವ ಸ್ಥಾನ ನೀಡಬೇಕು. ಮಲೆನಾಡು ಭಾಗದ ಮಹಿಳಾ ಹಾಗೂ ಅಲ್ಪಸಂಖ್ಯಾತ ಸಮುದಾಯದ ಪ್ರಬಲ ಧ್ವನಿಯಾಗಿ ಅವರಿಗೆ ಅವಕಾಶ ನೀಡುವುದು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ತಿಳಿಸಿದರು.
ಹಾಗೆಯೇ ಶಿವಮೊಗ್ಗ ಜಿಲ್ಲೆಗೆ ಕನಿಷ್ಠ ಎರಡು ಸಚಿವ ಸ್ಥಾನಗಳನ್ನು ನೀಡಬೇಕು. ಅದರಲ್ಲಿ ಒಂದು ಸ್ಥಾನವನ್ನು ಶ್ರೀಮತಿ ಬಲ್ಕಿಸ್ ಬಾನು ಅವರಿಗೆ ನೀಡುವ ಮೂಲಕ ಜಿಲ್ಲೆಯ ಹಾಗೂ ಅಲ್ಪಸಂಖ್ಯಾತ ಮಹಿಳೆಯರ ಆಶೋತ್ತರಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಇದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿರುವ ಕ್ರೈಸ್ತ ಸಮುದಾಯಕ್ಕೆ ಒಂದು ಸಚಿವ ಸ್ಥಾನ ನೀಡುವ ಮೂಲಕ ಅಲ್ಪಸಂಖ್ಯಾತ ಸಮುದಾಯಗಳ ಸಮರ್ಪಕ ಪಾಲುದಾರಿಕೆಯನ್ನು ಖಚಿತಪಡಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಮನವಿ ಮಾಡಿದೆ.

