SUDDILIVE || SHIVAMOGGA
ಮನೆಯಲ್ಲಿ ವೃದ್ಧೆ ಮತ್ತು ಸಾಕು ನಾಯಿ ಮೃತ ಸ್ಥಿತಿಯಲ್ಲಿ ಪತ್ತೆ-Elderly Woman and Pet Dog Found Dead at Home
ಶಿವಮೊಗ್ಗ: ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಭಾವತಿ (60) ಮೃತ ದುರ್ದೈವಿ. ಅವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ಸುಮಾರು 15 ರಿಂದ 20 ದಿನಗಳ ಹಿಂದೆಯೇ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತರ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರೊಂದಿಗೆ ಮನೆಯಲ್ಲಿದ್ದ ಸಾಕು ನಾಯಿಯೂ ಮೃತಪಟ್ಟಿರುವುದು ಕಂಡುಬಂದಿದೆ.
ಪ್ರಭಾವತಿ ಅವರಿಗೆ ಇಬ್ಬರು ಪುತ್ರಿಯರು ಇದ್ದು, ಅವರಲ್ಲಿ ಒಬ್ಬರು ಶಿವಮೊಗ್ಗದಲ್ಲಿದ್ದರೆ, ಮತ್ತೊಬ್ಬರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಜನವಾರ್ತೆ ಪತ್ರಿಕೆಯ ಮಾಲೀಕರಾಗಿದ್ದ ದಿವಂಗತ ನಾಗರಾಜ ಅವರ ಪತ್ನಿಯಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ.
ಸುಮಾರು 15 ದಿನಗಳ ಹಿಂದೆ ಮನೆಯ ಎದುರಿನ ಕ್ಯಾಂಟೀನ್‌ನಿಂದ ತಿಂಡಿ ತೆಗೆದುಕೊಂಡು ಹೋಗಿದ್ದ ಪ್ರಭಾವತಿ ಬಳಿಕ ಹೊರಗೆ ಕಾಣಿಸಿಕೊಂಡಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚೆಗೆ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಹೊರೆಯವರು ಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲು ಮತ್ತು ಚಿತ್ರೀಕರಣಕ್ಕೆ ಆಗಮಿಸಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಮೃತರ ಕುಟುಂಬಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

