ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಶಾಸಕ ಚೆನ್ನಿ ಗರಂ: ಅಧಿಕಾರಿಗಳಿಗೆ ಕಠಿಣ ಗಡುವು-MLA Chenni Garam on the chaos at the private bus stand: Strict deadline for officials

 SUDDILIVE || SHIVAMOGGA

ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಶಾಸಕ ಚೆನ್ನಿ ಗರಂ: ಅಧಿಕಾರಿಗಳಿಗೆ ಕಠಿಣ ಗಡುವು-MLA Chenni Garam on the chaos at the private bus stand: Strict deadline for officials    
Channi, visit

Mla, visit

ಶಿವಮೊಗ್ಗ: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿನ ಮೂಲಸೌಕರ್ಯಗಳ ಕೊರತೆ, ಸ್ವಚ್ಛತೆಯ ವೈಫಲ್ಯ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ಯಾವುದೇ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿದ ಶಾಸಕ ಚನ್ನಬಸಪ್ಪ ಅವರು ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದರು. ಪಾದಚಾರಿ ಮಾರ್ಗಗಳ ಅತಿಕ್ರಮಣ, ವಿಶ್ರಾಂತಿ ಗೃಹಗಳ ಕಳಪೆ ನಿರ್ವಹಣೆ, ಗಲೀಜಾದ ಆಸನಗಳು, ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸದೆ ಬೀಗ ಹಾಕಿರುವ ಶೌಚಾಲಯಗಳು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯ ಕೊರತೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಾರ್ವಜನಿಕರ ದಿನನಿತ್ಯದ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಸಮಸ್ಯೆಗಳನ್ನು ತಕ್ಷಣ ನಿವಾರಿಸುವಂತೆ ಸೂಚಿಸಿದ ಅವರು, ನಿಲ್ದಾಣದ ಎಲ್ಲಾ ಶೌಚಾಲಯಗಳನ್ನು ದುರಸ್ತಿಗೊಳಿಸಿ ನಿರ್ವಹಣಾ ಸಿಬ್ಬಂದಿಗೆ ಪ್ರತ್ಯೇಕ ಕೌಂಟರ್ ನಿರ್ಮಿಸಲು ಆದೇಶಿಸಿದರು. ಕುಡಿಯುವ ನೀರಿನ ಫಿಲ್ಟರ್‌ಗಳನ್ನು ಪುನಶ್ಚೇತನಗೊಳಿಸುವುದು, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವುದು ಹಾಗೂ ಪ್ರಯಾಣಿಕರ ಸುರಕ್ಷತೆಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ನಿರ್ದೇಶನ ನೀಡಿದರು.

ಮಳೆಗಾಲದ ಹಿನ್ನೆಲೆಯಲ್ಲಿ ಒಳಚರಂಡಿಗಳ ಹೂಳೆತ್ತುವಿಕೆ ಕಾಮಗಾರಿ ತಕ್ಷಣ ಕೈಗೊಳ್ಳಬೇಕು ಹಾಗೂ ಹೊಸದಾಗಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯಗಳ ಟೆಂಡರ್ ಪ್ರಕ್ರಿಯೆಯನ್ನು ಈ ತಿಂಗಳೊಳಗೆ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಸೂಚಿಸಿದರು. ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ಹಾಗೂ ಗಸ್ತು ವಾಹನಗಳನ್ನು ನಿಯೋಜಿಸುವಂತೆಯೂ ಸೂಚನೆ ನೀಡಿದರು.

"ಮುಂದಿನ ಬಾರಿ ನಾನು ಬಸ್ ನಿಲ್ದಾಣಕ್ಕೆ ಭೇಟಿ ನೀಡುವ ವೇಳೆಗೆ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿರಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ" ಎಂದು ಶಾಸಕ ಚನ್ನಬಸಪ್ಪ ಖಡಕ್ ಎಚ್ಚರಿಕೆ ನೀಡಿದರು.

ಪರಿಶೀಲನಾ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ನಗರ ಉಪಾಧ್ಯಕ್ಷ ಪ್ರಭಾಕರ್ ಪಿ., ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ್ ಸೇರಿದಂತೆ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

MLA Chenni Garam on the chaos at the private bus stand: Strict deadline for officials

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close