ಪಿಂಚಣಿ ಇಲ್ಲದೆ 10 ಸಾವಿರ ಫಲಾನುಭವಿಗಳ ಪರದಾಟ – ಬಿ.ಎಸ್. ಗಣೇಶ್ ಆತಂಕ-10 thousand beneficiaries are struggling without pension – B.S. Ganesh is worried

SUDDILIVE || SHIVAMOGGA

ಪಿಂಚಣಿ ಇಲ್ಲದೆ 10 ಸಾವಿರ ಫಲಾನುಭವಿಗಳ ಪರದಾಟ – ಬಿ.ಎಸ್. ಗಣೇಶ್ ಆತಂಕ-10 thousand beneficiaries are struggling without pension – B.S. Ganesh is worried   

Pension, struggling

ಭದ್ರಾವತಿ, ಜು. 5: ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಿಕ ಪಿಂಚಣಿ ಪಡೆಯುತ್ತಿರುವ ಹಿರಿಯ ನಾಗರಿಕರು, ವಿಧವೆಯರು ಹಾಗೂ ಅಂಗವಿಕಲರಿಗೆ ಕಳೆದ ಮೂರು ತಿಂಗಳಿಂದ ಪಿಂಚಣಿ ಹಣ ಜಮೆಯಾಗದೇ ತೀವ್ರ ಸಂಕಷ್ಟ ಎದುರಾಗಿದೆ ಎಂದು ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಬಿ.ಎಸ್. ಗಣೇಶ್ ಆತಂಕ ವ್ಯಕ್ತಪಡಿಸಿದರು.

ನಗರದ ಕನಕಮಂಟಪದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಿಕ ಪಿಂಚಣಿ ಹಾಗೂ ವೇತನ ಪಡೆಯುವ ಅಂಗವಿಕಲರು, ವಿಧವೆಯರು ಮತ್ತು ಹಿರಿಯ ನಾಗರಿಕರ ಕುಂದುಕೊರತೆ ನಿವಾರಣಾ ಸಭೆಯಲ್ಲಿ ಅವರು ಮಾತನಾಡಿದರು.

ತಾಲೂಕಿನ ಸುಮಾರು 10 ಸಾವಿರಕ್ಕೂ ಹೆಚ್ಚು ಪಿಂಚಣಿದಾರರಿಗೆ ಕಳೆದ ಮೂರು ತಿಂಗಳಿಂದ ಪಿಂಚಣಿ ಹಣ ಬಿಡುಗಡೆಯಾಗಿಲ್ಲ ಎಂದು ತಿಳಿಸಿದ ಅವರು, ಇದರ ಪರಿಣಾಮವಾಗಿ ದಿನನಿತ್ಯದ ಜೀವನ ನಿರ್ವಹಣೆಯೇ ಕಷ್ಟಕರವಾಗಿದೆ. ಔಷಧಿ ಖರೀದಿ, ಆಹಾರ, ಅಗತ್ಯ ವಸ್ತುಗಳ ಖರೀದಿ ಸೇರಿದಂತೆ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಫಲಾನುಭವಿಗಳು ಪರದಾಡುವಂತಾಗಿದೆ ಎಂದು ಹೇಳಿದರು.

ಬಡವರು ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ರೀತಿಯ ಕುಂದುಕೊರತೆ ನಿವಾರಣಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಗಣೇಶ್ ತಿಳಿಸಿದರು.

ಸಭೆಯಲ್ಲಿ ತಾಲೂಕಿನ 24 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು (ಪಿಡಿಒಗಳು), ತಹಸೀಲ್ದಾರ್ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭಾಗವಹಿಸಿ ಫಲಾನುಭವಿಗಳ ಅಹವಾಲುಗಳನ್ನು ಆಲಿಸಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಹಿರಿಯ ನಾಗರಿಕರು, ವಿಧವೆಯರು ಹಾಗೂ ಅಂಗವಿಕಲರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಕೌಂಟರ್ ತೆರೆಯುವ ಮೂಲಕ ಪಿಂಚಣಿ ಸಂಬಂಧಿತ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವ ವ್ಯವಸ್ಥೆ ಕಲ್ಪಿಸಲಾಗುವುದು. ದಾಖಲೆಗಳ ದೋಷ, ಬ್ಯಾಂಕ್ ಖಾತೆ ಸಮಸ್ಯೆ ಹಾಗೂ ಇತರೆ ತಾಂತ್ರಿಕ ಕಾರಣಗಳಿಂದ ಪಿಂಚಣಿ ಸ್ಥಗಿತಗೊಂಡಿರುವ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ಶೀಘ್ರ ಪರಿಹಾರ ನೀಡಲಾಗುವುದು ಎಂದು ಗಣೇಶ್ ಭರವಸೆ ನೀಡಿದರು.

ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಬಾಕಿ ಉಳಿದಿರುವ ಪಿಂಚಣಿ ಹಣವನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

10 thousand beneficiaries are struggling without pension – B.S. Ganesh is worried

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close