SUDDILIVE ||SHIVAMOGGA
ಗಾಜನೂರು ಜಲಾಶಯದಿಂದ 8 ಗೇಟ್ ಒಪನ್ 18 ಸಾವಿರ ಕ್ಯೂಸೆಕ್ ನೀರು ನದಿಗೆ- 8 gates open from Gajanur reservoir, 18 thousand cusecs of water released into the river
ಶಿವಮೊಗ್ಗ, ಜುಲೈ 5: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ನೀರಿನ ಹೊರಹರಿವನ್ನು ಹಂತ ಹಂತವಾಗಿ ಹೆಚ್ಚಿಸಲಾಗಿದೆ.
ಜಲಾಶಯದ ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಸ್ತುತ ಜಲಾಶಯದ ಎಂಟು ಗೇಟ್‌ಗಳನ್ನು ತೆರೆಯಲಾಗಿದ್ದು, ತುಂಗಾ ನದಿಗೆ 18,051 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಇದೇ ವೇಳೆ ಜಲಾಶಯಕ್ಕೆ 20,565 ಕ್ಯೂಸೆಕ್ಸ್ ನೀರು ಒಳಹರಿದು ಬರುತ್ತಿದ್ದು, ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಒಳಹರಿವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ನಿನ್ನೆ ಸಂಜೆ 4 ಗಂಟೆಯಿಂದ ನೀರು ಬಿಡುಗಡೆ ಪ್ರಕ್ರಿಯೆ ಆರಂಭಿಸಲಾಯಿತು. ಆರಂಭದಲ್ಲಿ ಕೇವಲ ಎರಡು ಗೇಟ್‌ಗಳನ್ನು ತೆರೆಯಲಾಗಿದ್ದು, ಸುಮಾರು 2,000 ರಿಂದ 3,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿತ್ತು. ನಂತರ ಜಲಾಶಯಕ್ಕೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಹೆಚ್ಚಿನ ಗೇಟ್‌ಗಳನ್ನು ತೆರೆಯಲಾಯಿತು.
ಇದರ ಜೊತೆಗೆ ಪವರ್‌ಹೌಸ್ ಮೂಲಕವೂ ಸುಮಾರು 5,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದ್ದು, ಒಟ್ಟಾರೆ ಹೊರಹರಿವು ಕ್ರಮೇಣ ಹೆಚ್ಚಿಸಿ ಪ್ರಸ್ತುತ 18,000 ಕ್ಯೂಸೆಕ್ಸ್ ಮಟ್ಟಕ್ಕೆ ಏರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿರುವ ಕಾರಣ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯಕ್ಕೆ ಅನುಗುಣವಾಗಿ ನೀರಿನ ಹೊರಹರಿವಿನಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದೆ.
8 gates open from Gajanur reservoir, 18 thousand cusecs of water released into the river

