SUDDILIVE || SHIVAMOGGA
ಗೃಹಲಕ್ಷ್ಮಿ 31ನೇ ಕಂತು ಬಿಡುಗಡೆ; ಗೃಹಜ್ಯೋತಿ ಸಮೀಕ್ಷೆಗೆ ಆತಂಕ ಬೇಡ: ಸಿಎಸ್ ಚಂದ್ರಭೂಪಾಲ್-Grihalakshmi 31st episode released; No need to worry about Grihaljyoti survey: CS Chandrabhupal
ಶಿವಮೊಗ್ಗ, ಜು.17: ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಅನುದಾನ ಬಿಡುಗಡೆಯಾಗಿದ್ದು, ಜಿಲ್ಲೆಯ 3,79,858 ಅರ್ಹ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ ₹2,000ರಂತೆ ಮುಂದಿನ ಒಂದೆರಡು ದಿನಗಳಲ್ಲಿ ಜಮೆಯಾಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಡೆದ ವಿಡಿಯೋ ಸಂವಾದದ ಬಳಿಕ ಮಾತನಾಡಿದ ಅವರು, ಈ ಕಂತಿನಲ್ಲಿ ಶಿವಮೊಗ್ಗ ಜಿಲ್ಲೆಗೆ ಒಟ್ಟು ₹75.97 ಕೋಟಿ ಬಿಡುಗಡೆಯಾಗಿದೆ ಎಂದರು. ಜಿಲ್ಲೆಯಲ್ಲಿ ಈವರೆಗೆ 30 ಕಂತುಗಳಲ್ಲಿ ಡಿಬಿಟಿ ಮೂಲಕ ₹3,110.48 ಕೋಟಿಗೂ ಅಧಿಕ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದು ಮಾಹಿತಿ ನೀಡಿದರು.
ಮರಣ ಹೊಂದಿದ 9,247 ಫಲಾನುಭವಿಗಳನ್ನು ಗುರುತಿಸಲಾಗಿದ್ದು, ತಾಂತ್ರಿಕ ಕಾರಣಗಳಿಂದ ಅವರ ಖಾತೆಗೆ ಜಮೆಯಾಗಿದ್ದ ಹಣವನ್ನು ವಾಪಸ್ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಈ ಪೈಕಿ 3,600 ಫಲಾನುಭವಿಗಳಿಂದ ಈಗಾಗಲೇ ₹3.79 ಕೋಟಿ ಮರುಪಡೆಯಲಾಗಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರ ಮಾಹಿತಿ ಪರಿಶೀಲನಾ ಕಾರ್ಯ ಜುಲೈ 1ರಿಂದ ನಡೆಯುತ್ತಿದ್ದು, ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು. ಮೆಸ್ಕಾಂ ಸಿಬ್ಬಂದಿಯೇ ಮನೆ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಈ ಸಮೀಕ್ಷೆಯಿಂದ ಉಚಿತ ವಿದ್ಯುತ್ ಸೇವೆ ಸ್ಥಗಿತಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿರುವ 5,09,133 ಮನೆಗಳಲ್ಲಿ ಈಗಾಗಲೇ 1,38,566 ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಶೇ.29ರಷ್ಟು ಪ್ರಗತಿ ಸಾಧಿಸಲಾಗಿದೆ. ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ನೀಡಿ ಸಿಬ್ಬಂದಿಗೆ ಸಹಕರಿಸುವಂತೆ ಮನವಿ ಮಾಡಿದರು.
ಅನ್ನಭಾಗ್ಯ ಯೋಜನೆಯಡಿ ತುರ್ತು ಆರೋಗ್ಯ ಸೇವೆಗಳಿಗಾಗಿ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವ ಅನಾರೋಗ್ಯ ಪೀಡಿತರಿಗೆ 15 ದಿನಗಳೊಳಗೆ ಕಾರ್ಡ್ ವಿತರಿಸುವಂತೆ ಸರ್ಕಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದು ತಿಳಿಸಿದರು.
Grihalakshmi 31st episode released; No need to worry about Grihaljyoti survey: CS Chandrabhupal
