ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ ಉಗ್ರ ಹೋರಾಟದ ಎಚ್ಚರಿಕೆ- Karave Swabhimani faction protests against CWRC order, warns of violent struggle

 SUDDILIVE || SHIVAMOGGA

ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ ಉಗ್ರ ಹೋರಾಟದ ಎಚ್ಚರಿಕೆ- Karave Swabhimani faction protests against CWRC order, warns of violent struggle  

Karave, swabhimani

ಶಿವಮೊಗ್ಗ, ಜು.29: ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಆದೇಶದಂತೆ ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುಗಡೆ ಮಾಡುವ ನಿರ್ಧಾರವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ವತಿಯಿಂದ ಬುಧವಾರ ಶಿವಮೊಗ್ಗ ನಗರದ ಅಶೋಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಸಿಡಬ್ಲ್ಯೂಆರ್‌ಸಿ ಆದೇಶವು ಸಂಪೂರ್ಣವಾಗಿ ರೈತ ವಿರೋಧಿಯಾಗಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಈಗಾಗಲೇ ಮಳೆಯ ಕೊರತೆ ಎದುರಾಗಿದ್ದು, ಜಲಾಶಯಗಳಲ್ಲಿ ಸಮರ್ಪಕ ನೀರಿನ ಸಂಗ್ರಹವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಕರ್ನಾಟಕದ ರೈತರಿಗೆ ಅನ್ಯಾಯವಾಗಲಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಹಲವು ಪ್ರದೇಶಗಳಲ್ಲಿ ಬರದ ಛಾಯೆ ಆವರಿಸಿದ್ದು, ನೀರಿನ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಈಗಾಗಲೇ ಹಲವು ಕಾಲುವೆಗಳಿಗೆ ನೀರು ಹರಿಸದ ಕಾರಣ ಸುಮಾರು 168 ಗ್ರಾಮಗಳು ತೀವ್ರ ಸಮಸ್ಯೆ ಎದುರಿಸುತ್ತಿವೆ. ಕೆಲವು ಪ್ರದೇಶಗಳು ಸಂಪೂರ್ಣವಾಗಿ ಬರದಿಂದ ತತ್ತರಿಸಿದ್ದು, ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಅಭಾವ ಉಂಟಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಬಾರದು. ಮೊದಲು ಕರ್ನಾಟಕದ ರೈತರು ಮತ್ತು ಜನರ ನೀರಿನ ಅಗತ್ಯವನ್ನು ಪೂರೈಸಬೇಕು. ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಂಡು ತಮಿಳುನಾಡಿಗೆ ನೀರು ಹರಿಸುವುದನ್ನು ಸಂಪೂರ್ಣವಾಗಿ ತಡೆಹಿಡಿಯಬೇಕು ಎಂದು ಕರವೇ ಸ್ವಾಭಿಮಾನಿ ಬಣ ಒತ್ತಾಯಿಸಿತು.

ಒಂದು ವೇಳೆ ರಾಜ್ಯ ಸರ್ಕಾರ ಸಿಡಬ್ಲ್ಯೂಆರ್‌ಸಿ ಆದೇಶದಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದರೆ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರವೇ ಸ್ವಾಭಿಮಾನಿ ಬಣ ಎಚ್ಚರಿಕೆ ನೀಡಿತು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್.ಎಸ್., ಜಿಲ್ಲಾ ಸಂಚಾಲಕ ಶಿವಕುಮಾರ್, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಸಾದಿಕ್ ಎ., ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ನೂರುಲ್ಲಾ ಖಾನ್, ಯುವ ಘಟಕದ ಅಧ್ಯಕ್ಷ ಸಂತೋಷ್, ಪರಮೇಶ್, ಸತೀಶ್, 26ನೇ ವಾರ್ಡ್ ಅಧ್ಯಕ್ಷ ವಿಕಾಸ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Karave Swabhimani faction protests against CWRC order, warns of violent struggle  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close