ಶಿವಮೊಗ್ಗದಲ್ಲಿ ರಾಜಕೀಯ ಹೈಡ್ರಾಮಾ: ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ, ಫ್ಲೆಕ್ಸ್ ಹರಿದು ಆಕ್ರೋಶ-Political drama in Shivamogga: BJP attempts to siege Congress office, flex tears, anger

SUDDILIVE || SHIVAMOGGA

ಶಿವಮೊಗ್ಗದಲ್ಲಿ ರಾಜಕೀಯ ಹೈಡ್ರಾಮಾ: ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ, ಫ್ಲೆಕ್ಸ್ ಹರಿದು ಆಕ್ರೋಶ-Political drama in Shivamogga: BJP attempts to siege Congress office, flex tears, anger   

Political, drama


ಶಿವಮೊಗ್ಗ: ನಗರದಲ್ಲಿ ಗುರುವಾರ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಒಂದು ಪಕ್ಷ ಮತ್ತೊಂದು ಪಕ್ಷದ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದೆ. 

ಬೆಳಿಗ್ಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮೊದಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಗೆ ತೆರಳಿ ಕಾಂಗ್ರೆಸ್ ನಡೆ ಖಂಡಿಸಿ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದಿಡೀರ್ ಕಾಂಗ್ರೆಸ್ ಕಚೇರಿಯತ್ತ ಕಾಣಿಸಿಕೊಂಡು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿದ್ದ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದೇ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ಪೆಟ್ರೋಲ್ ಕ್ಯಾನ್‌ಗಳನ್ನು ಹಿಡಿದುಕೊಂಡು ಬಂದಿರುವುದು ಪೊಲೀಸರ ಗಮನಕ್ಕೆ ಬಂದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ತಕ್ಷಣವೇ ಪೆಟ್ರೋಲ್ ಕ್ಯಾನ್‌ಗಳನ್ನು ವಶಕ್ಕೆ ಪಡೆದು ಮುನ್ನೆಚ್ಚರಿಕೆ ಕ್ರಮ ಕೈಗೊಂಡರು. ಬಳಿಕ ಕಾರ್ಯಕರ್ತರನ್ನು ತಡೆದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಇದಕ್ಕೂ ಮುನ್ನ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಜಿಲ್ಲಾ ಕಾಂಗ್ರೆಸ್ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿತ್ತು. ಇದನ್ನು ಖಂಡಿಸಿದ ಬಿಜೆಪಿ ನಾಯಕರು ಕಾಂಗ್ರೆಸ್ ನಡೆ ಪ್ರಜಾಪ್ರಭುತ್ವ ವಿರೋಧಿ ಎಂದು ಆರೋಪಿಸಿ ಪ್ರತಿಯಾಗಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು .

ಎರಡೂ ಪಕ್ಷಗಳ ಕಾರ್ಯಕರ್ತರು ಮುಖಾಮುಖಿಯಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಚೇರಿಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪೊಲೀಸರು ಸಮಯೋಚಿತವಾಗಿ ಮಧ್ಯಪ್ರವೇಶಿಸಿದ ಪರಿಣಾಮ ಯಾವುದೇ ದೊಡ್ಡ ಮಟ್ಟದ ಅಹಿತಕರ ಘಟನೆ ಸಂಭವಿಸದೇ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟರು.

ಶಿವಮೊಗ್ಗದಲ್ಲಿ ಒಂದೇ ದಿನ ಎರಡು ಪ್ರಮುಖ ರಾಜಕೀಯ ಪಕ್ಷಗಳ ನಡುವೆ ಮುತ್ತಿಗೆ, ಪ್ರತಿಭಟನೆ ಮತ್ತು ಪ್ರತಿಪ್ರತಿಭಟನೆ ನಡೆದಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Political drama in Shivamogga: BJP attempts to siege Congress office, flex tears, anger   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close