SUDDILIVE || SHIVAMOGGA
ಐ20 ಕಾರು ಡಿವೈಡರ್‌ಗೆ ಡಿಕ್ಕಿ: ಇಬ್ಬರಿಗೆ ಗಾಯ, ಲೈಟ್ ಕಂಬ ಧ್ವಂಸ-i20 car hits divider: Two injured, light pole destroyed
ಶಿವಮೊಗ್ಗ, ಜು. 17: ನಗರದ ಸೋಮಿನಕೊಪ್ಪ ಸಮೀಪದ ಮೈತ್ರಾ ದೈವಿ ಬಡಾವಣೆ ಎದುರು ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಸೋಮಿನಕೊಪ್ಪ ಸೇತುವೆ ಕಡೆಯಿಂದ ಜೆಎಚ್ ಬಡಾವಣೆ ಕಡೆಗೆ ತೆರಳುತ್ತಿದ್ದ ಐ20 ಕಾರು, ಮೈತ್ರಾ ದೈವಿ ಕಾಲೇಜು ಎದುರಿನ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಬಲವಾಗಿ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ಡಿವೈಡರ್ ಮೇಲಿದ್ದ ಎರಡು ಕಾಂಕ್ರೀಟ್ ಬ್ಲಾಕ್‌ಗಳು ಹಾಗೂ ಲೈಟ್ ಕಂಬ ಸಂಪೂರ್ಣ ಕಿತ್ತು ಬಿದ್ದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತ ಸಂಭವಿಸಿದ ವೇಳೆ ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಒಬ್ಬರು ದಿವಾಕರ್ ಎಂದು ಗುರುತಿಸಲಾಗಿದ್ದು, ಮತ್ತೋರ್ವರ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ. ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ತಕ್ಷಣವೇ ರಕ್ಷಿಸಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ಕಾರನ್ನು ಟೋಯಿಂಗ್ ವಾಹನದ ಮೂಲಕ ಸ್ಥಳದಿಂದ ತೆರವುಗೊಳಿಸಲಾಯಿತು.
ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತನಿಖೆ ಮುಂದುವರಿದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
i20 car hits divider: Two injured, light pole destroyed

