SUDDILIVE || SHIVAMOGGA
ವಿದ್ಯಾರ್ಥಿಗಳ ಸಮಗ್ರ ಸಮಸ್ಯೆಗಳಿಗೆ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ಬೃಹತ್ ಪ್ರತಿಭಟನೆ- ABVP holds massive protest demanding solution to students' comprehensive problems
ಶಿವಮೊಗ್ಗ, ಆ.1: ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಶಿವಮೊಗ್ಗ ಮಹಾನಗರ ಘಟಕದ ನೇತೃತ್ವದಲ್ಲಿ ನಗರದ ಮಹಾವೀರ ವೃತ್ತದಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು.
ಎಬಿವಿಪಿ ಸಲ್ಲಿಸಿರುವ ಮನವಿಯಲ್ಲಿ, ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಕಾಲೇಜುಗಳಿಗೆ ತೆರಳುವ ಸಾವಿರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಸಮರ್ಪಕ ಬಸ್ ಸೌಲಭ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿ ಬಸ್ ಪಾಸ್ ಹೊಂದಿದ್ದರೂ ಹಲವೆಡೆ ನಿರ್ವಾಹಕರು ವಿದ್ಯಾರ್ಥಿಗಳನ್ನು ಬಸ್‌ಗೆ ಹತ್ತಿಸಿಕೊಳ್ಳುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಕಾಲೇಜಿಗೆ ಸಮಯಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹೆಚ್ಚುವರಿ ಬಸ್‌ಗಳನ್ನು ಕೂಡಲೇ ಕಾರ್ಯಾಚರಣೆಗೆ ಬಿಡಬೇಕು ಎಂದು ಆಗ್ರಹಿಸಲಾಗಿದೆ.
ಮಲ್ಲಿಗೇನಹಳ್ಳಿಯಲ್ಲಿರುವ ಡಿ. ದೇವರಾಜ ಅರಸು ವಿದ್ಯಾರ್ಥಿ ನಿಲಯಗಳು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ನಿತ್ಯ ಪರದಾಡುತ್ತಿದ್ದಾರೆ. ಈ ಮಾರ್ಗದಲ್ಲಿ ಕನಿಷ್ಠ ಆರು ಬಸ್‌ಗಳನ್ನು ಓಡಿಸಬೇಕು. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ವೇಳೆಗೆ ತಕ್ಕಂತೆ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅಗತ್ಯ ಪ್ರಮಾಣದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡದಿರುವುದರಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆಯಲ್ಲಿಯೂ ವಿಳಂಬವಾಗುತ್ತಿದೆ. ಕೂಡಲೇ ಅಗತ್ಯ ಸಂಖ್ಯೆಯ ಅತಿಥಿ ಉಪನ್ಯಾಸಕರನ್ನು ನೇಮಿಸಿ, ಬಾಕಿ ಗೌರವಧನವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.
ಇತ್ತೀಚೆಗೆ ಬೆಳಕಿಗೆ ಬಂದಿರುವ ಕೆಪಿಎಸ್‌ಸಿ ನೇಮಕಾತಿ ಹಗರಣದಿಂದ ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯ ಆತಂಕಕ್ಕೆ ಸಿಲುಕಿದೆ. ಹೀಗಾಗಿ ಹಗರಣದ ಕುರಿತು ಉನ್ನತ ಮಟ್ಟದ, ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.
ಇದರ ಜೊತೆಗೆ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಿಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನೂ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ. ಸಹ್ಯಾದ್ರಿ ಕಾಲೇಜುಗಳಲ್ಲಿ ಒಐಧಿ ಹಾಗೂ ಸ್ನಾತಕೋತ್ತರ ಪ್ರವೇಶಾತಿ ಕಡಿತ ಅಥವಾ ತಡೆ, ಡಿಜಿಟಲ್ ಮೌಲ್ಯಮಾಪನ ಪದ್ಧತಿಯಲ್ಲಿನ ದೋಷಗಳು, ಕ್ರೀಡಾ ಶುಲ್ಕದ ದುರ್ಬಳಕೆ ಹಾಗೂ ಘಟಿಕೋತ್ಸವ ವಿಳಂಬದಂತಹ ಸಮಸ್ಯೆಗಳನ್ನು ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಲಾಗಿದೆ.
ಉಗ್ರ ಹೋರಾಟದ ಎಚ್ಚರಿಕೆ
ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಸರ್ಕಾರ ಹಾಗೂ ಆಡಳಿತ ನಿರ್ಲಕ್ಷ್ಯ ತೋರಬಾರದು. ಮನವಿಯಲ್ಲಿರುವ ಬೇಡಿಕೆಗಳನ್ನು ಶೀಘ್ರವೇ ಈಡೇರಿಸದಿದ್ದರೆ ಎಬಿವಿಪಿ ವತಿಯಿಂದ ರಾಜ್ಯಾದ್ಯಂತ ಇನ್ನಷ್ಟು ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಸಂಬಂಧಿತ ಇಲಾಖೆಗಳ ಸಭೆ ನಡೆಸಿ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.



