SUDDILIVE || SHIVAMOGGA
ಶಿವಮೊಗ್ಗದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಲಿಖಿತ ಪರೀಕ್ಷೆ ಯಶಸ್ವಿ; 10,167 ಅಭ್ಯರ್ಥಿಗಳ ಹಾಜರಾತಿ
ಶಿವಮೊಗ್ಗ, ಆ.2: ಕರ್ನಾಟಕ ನಾಗರಿಕ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆ ಭಾನುವಾರ ಶಿವಮೊಗ್ಗ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಭದ್ರತೆ ಹಾಗೂ ಅಗತ್ಯ ಮೂಲಸೌಕರ್ಯಗಳೊಂದಿಗೆ ಯಶಸ್ವಿಯಾಗಿ ನಡೆಯಿತು.
ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳನ್ನು ಒಳಗೊಂಡಂತೆ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಶಿವಮೊಗ್ಗ ಜಿಲ್ಲೆಗೆ 10,737 ಅಭ್ಯರ್ಥಿಗಳು ಪರೀಕ್ಷೆಗೆ ನಿಗದಿಯಾಗಿದ್ದು, ಅವರಲ್ಲಿ 10,167 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದ ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ.
ಪರೀಕ್ಷೆಯನ್ನು ಯಾವುದೇ ಅಡೆತಡೆಗಳಿಲ್ಲದೆ, ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಸಮಗ್ರ ಸಿದ್ಧತೆ ಮಾಡಿಕೊಂಡಿತ್ತು. ಈ ಕಾರ್ಯಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಸಹಕಾರ ದೊರೆತಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಭದ್ರತಾ ದೃಷ್ಟಿಯಿಂದ 6 ಡಿವೈಎಸ್ಪಿ, 28 ಪೊಲೀಸ್ ಇನ್‌ಸ್ಪೆಕ್ಟರ್‌ಗಳು (PI), 56 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು (PSI) ಸೇರಿದಂತೆ ಒಟ್ಟು 90 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇದಲ್ಲದೆ, ಅಭ್ಯರ್ಥಿಗಳ ತಪಾಸಣೆ (Frisking)ಗಾಗಿ 139 ಪೊಲೀಸ್ ಸಿಬ್ಬಂದಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 150 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಗಡಿಯಾರ, ಜಾಮರ್ ವ್ಯವಸ್ಥೆ, ಗಾಳಿ-ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಪೀಠೋಪಕರಣಗಳು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿತ್ತು. ಪರೀಕ್ಷೆಯ ಪಾರದರ್ಶಕತೆ ಮತ್ತು ನಕಲು ತಡೆಯುವ ಉದ್ದೇಶದಿಂದ ಪ್ರತಿ ಪರೀಕ್ಷಾ ಕೊಠಡಿಯಲ್ಲೂ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಲಿಖಿತ ಪರೀಕ್ಷೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಪರೀಕ್ಷೆಯ ಯಶಸ್ಸಿಗೆ ಸಹಕರಿಸಿದ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಪೊಲೀಸ್ ಸಿಬ್ಬಂದಿ ಹಾಗೂ ಇತರ ಎಲ್ಲಾ ಅಧಿಕಾರಿಗಳಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಧನ್ಯವಾದಗಳನ್ನು ಸಲ್ಲಿಸಿದೆ. ಜೊತೆಗೆ, ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳಿಗೆ ಶುಭಾಶಯಗಳನ್ನು ಕೋರಿದೆ.

