SUDDILIVE || HOSANAGARA
ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ಕೊನೆಗೂ ಬಂಧನ- The accused who attacked the forest staff and fled has finally been arrested.
ಹೊಸನಗರ, ಆ.2: ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಪೊಲೀಸ್ ಹಾಗೂ ಅರಣ್ಯ ಅಧಿಕಾರಿಗಳ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸನಗರ ತಾಲೂಕಿನ ಅಡುಗೋಡಿ ಗ್ರಾಮದ ನಿವಾಸಿ ವೆಂಕಟೇಶ್ (36) ಬಂಧಿತ ಆರೋಪಿಯಾಗಿದ್ದಾನೆ.
ಅರಣ್ಯ ಇಲಾಖೆಯ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ವೆಂಕಟೇಶ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಜುಲೈ 15ರಂದು ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸುವಂತೆ ಆದೇಶಿಸಿತ್ತು.
ಆದರೆ, ಆರೋಪಿಯನ್ನು ಜೀಪಿನಲ್ಲಿ ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಬಟ್ಟೆಮಲ್ಲಪ್ಪ ಗ್ರಾಮದ ಸಮೀಪದ ಹೋಟೆಲ್‌ನಲ್ಲಿ ಅಧಿಕಾರಿಗಳು ಆಹಾರ ತರಲು ತೆರಳಿದ್ದರು. ಈ ಸಂದರ್ಭದಲ್ಲಿ ಜೀಪಿನಲ್ಲಿದ್ದ ಅರಣ್ಯ ಸಿಬ್ಬಂದಿ ಚಕ್ರಪಾಣಿ ಹಾಗೂ ಚಾಲಕ ನಾಗೇಂದ್ರ ಅವರ ಮೇಲೆ ಹಲ್ಲೆ ನಡೆಸಿದ ವೆಂಕಟೇಶ್ ಅಲ್ಲಿಂದ ಪರಾರಿಯಾಗಿದ್ದನು. ಈ ಘಟನೆ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು.
ಘಟನೆಗೆ ಸಂಬಂಧಿಸಿದಂತೆ ಕೊಲ್ಲೂರು ವನ್ಯಜೀವಿ ವಲಯದ ಉಪವಲಯ ಅರಣ್ಯಾಧಿಕಾರಿ ಸುನೀಲ್ ಡಿ. ಕುಂಬಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದರು.
ಸಿಪಿಐ ಗೌಡಪ್ಪಗೌಡ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಂಕರಗೌಡ ಪಾಟೀಲ್ ನೇತೃತ್ವದ ವಿಶೇಷ ಪೊಲೀಸ್ ತಂಡ ಹಲವು ದಿನಗಳಿಂದ ಆರೋಪಿಯ ಚಲನವಲನದ ಮೇಲೆ ನಿಗಾ ಇರಿಸಿತ್ತು. ಭಾನುವಾರ ಬೆಳಿಗ್ಗೆ ಆರೋಪಿಯು ತನ್ನ ಮನೆಯ ಸಮೀಪ ಕಾಣಿಸಿಕೊಂಡ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಚಾಣಾಕ್ಷತನದಿಂದ ವೆಂಕಟೇಶ್‌ನನ್ನು ವಶಕ್ಕೆ ಪಡೆದು ಬಂಧಿಸಿದರು.
ಬಂಧಿತ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಯ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪರಾರಿಯಾಗಿದ್ದ ಆರೋಪಿಯನ್ನು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಯಶಸ್ವಿಯಾಗಿ ಬಂಧಿಸಿದ ಪೊಲೀಸ್ ತಂಡದ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಾಚರಣೆ ಮೂಲಕ ಹಲವು ದಿನಗಳಿಂದ ತಲೆನೋವಾಗಿದ್ದ ಪ್ರಕರಣಕ್ಕೆ ಅಂತ್ಯ ಸಿಕ್ಕಂತಾಗಿದೆ.

