SUDDILIVE || SHIVAMOGGA
ಅಪ್ರಾಪ್ತನಿಗೆ ಬೈಕ್ ನೀಡಿದ ಮಾಲೀಕನಿಗೆ ₹27 ಸಾವಿರ ದಂಡ-Owner fined ₹27,000 for giving bike to a minor
ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವಾಹನ ಮಾಲೀಕನಿಗೆ ಶಿವಮೊಗ್ಗ ನ್ಯಾಯಾಲಯ ₹27,000 ದಂಡ ವಿಧಿಸಿದೆ.
2025ರಲ್ಲಿ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ಆರೋಪದ ಮೇರೆಗೆ ವಾಹನ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನಿಖೆ ಪೂರ್ಣಗೊಳಿಸಿದ ಬಳಿಕ 1ನೇ ಎ.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಾಹನ ಮಾಲೀಕನಿಗೆ ₹27,000 ದಂಡ ವಿಧಿಸಿ ಆದೇಶ ನೀಡಿದೆ.
ಅಪ್ರಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ನೀಡುವ ಪೋಷಕರು ಹಾಗೂ ವಾಹನ ಮಾಲೀಕರಿಗೆ ಈ ತೀರ್ಪು ಎಚ್ಚರಿಕೆಯ ಸಂದೇಶವಾಗಿದ್ದು, ಮಕ್ಕಳ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆಯ ಮಹತ್ವವನ್ನು ಮತ್ತೊಮ್ಮೆ ಒತ್ತಿ ಹೇಳಿದೆ.
