SUDDILIVE || SHIVAMOGGA
ಕಸ್ತೂರಿ ರಂಗನ್ ವರದಿ ವಿರೋಧಿಸಿ ವಿಶೇಷ ಅಧಿವೇಶನ: ಸಚಿವ ಮಧು ಬಂಗಾರಪ್ಪ-Special session to oppose Kasturirangan report: Minister Madhu Bangarappa
ಶಿವಮೊಗ್ಗ: ಮಲೆನಾಡಿನ ಜನಜೀವನಕ್ಕೆ ಮಾರಕವಾಗಬಹುದಾದ ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿರೋಧಿಸಲಿದ್ದು, ಈ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲು ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಸ್ತೂರಿ ರಂಗನ್ ವರದಿ ವಿಚಾರವಾಗಿ ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಪದೇಪದೇ ಕರಡು ಅಧಿಸೂಚನೆಗಳನ್ನು ಹೊರಡಿಸುತ್ತಿದೆ. ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ 20 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಜನವಸತಿ ಹಾಗೂ ಅಗತ್ಯ ಸೌಲಭ್ಯಗಳು ಇವೆ. ವರದಿ ಜಾರಿಯಾದರೆ ಹಲವು ದಶಕಗಳಿಂದ ಈ ಭಾಗದಲ್ಲಿ ನೆಲೆಸಿರುವ ಜನರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದರು.
ಹೀಗಾಗಿ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಈ ಕುರಿತು ವಿಧಾನಮಂಡಲದಲ್ಲಿ ಸಮಗ್ರ ಚರ್ಚೆ ನಡೆಸಿ ಸ್ಪಷ್ಟ ನಿರ್ಣಯ ಕೈಗೊಳ್ಳುವ ನಿಟ್ಟಿನಲ್ಲಿ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ರಾಘವೇಂದ್ರ, ವಿಜಯೇಂದ್ರ ವಿರುದ್ಧ ವಾಗ್ದಾಳಿ
ಕಸ್ತೂರಿ ರಂಗನ್ ವರದಿ ವಿಚಾರವಾಗಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಚಿವ ಮಧು ಬಂಗಾರಪ್ಪ ತೀವ್ರ ವಾಗ್ದಾಳಿ ನಡೆಸಿದರು.
"ಇಬ್ಬರೂ ಸಹೋದರರು ಜವಾಬ್ದಾರಿ ಮರೆತು ನಾಟಕವಾಡುತ್ತಿದ್ದಾರೆ. ಸಂಸತ್ತಿನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸದೆ ಇಲ್ಲಿಗೆ ಬಂದು ಪಾದಯಾತ್ರೆ ನಡೆಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾಟಕ ಮಾಡುವುದನ್ನು ಬಿಟ್ಟು ಕೇಂದ್ರ ಸರ್ಕಾರದ ಮುಂದೆ ಧ್ವನಿ ಎತ್ತಲಿ" ಎಂದು ಸವಾಲು ಹಾಕಿದರು.
‘ಸಂವಿಧಾನವೇ ನಮಗೆ ಅಂತಿಮ’
ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಕುರಿತು ಬಿಜೆಪಿ ಮಾಡುತ್ತಿರುವ ರಾಜಕೀಯದ ಬಗ್ಗೆಯೂ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಧರ್ಮದ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿದರು.
"ಯಾರೂ ತಾವು ಯಾವ ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ಭಗವದ್ಗೀತೆ, ಕುರಾನ್, ಬೈಬಲ್‌ಗಳಂತೆಯೇ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ನಮಗೆ ಮುಖ್ಯ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಿಂದೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ ಎಂದು ಹೇಳಿದ್ದ ಸಂದರ್ಭದಲ್ಲಿ ಅವರ ಅಕ್ಕಪಕ್ಕದಲ್ಲಿದ್ದವರೇ ಇಂದು ಕೇಂದ್ರದಲ್ಲಿದ್ದಾರೆ" ಎಂದು ತಿರುಗೇಟು ನೀಡಿದರು.
ಕೆಪಿಎಸ್‌ಸಿ ನೇಮಕಾತಿ ಲೋಪ ಸರಿಪಡಿಸಲು ಕ್ರಮ
ಕೆಪಿಎಸ್‌ಸಿ ಕಾರ್ಯದರ್ಶಿ ಬಂಧನದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಬಂಧನದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು. ನೇಮಕಾತಿ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಲೋಪಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಯಾವುದೇ ಅರ್ಹ ಅಭ್ಯರ್ಥಿಗೆ ಅನ್ಯಾಯವಾಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಬಿಜೆಪಿ ಪಾದಯಾತ್ರೆಗೆ ವ್ಯಂಗ್ಯ
ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯ ಕುರಿತೂ ಸಚಿವರು ವ್ಯಂಗ್ಯವಾಡಿದರು. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿರುವುದರಿಂದ ಬಿಜೆಪಿಯವರಿಗೆ ಮಾತನಾಡಲು ವಿಷಯಗಳೇ ಇಲ್ಲದಂತಾಗಿದೆ ಎಂದು ಟೀಕಿಸಿದರು.
"ವಾಕಿಂಗ್ ಮಾಡುವ ಮೂಲಕ ಅವರು ತಮ್ಮ ಆರೋಗ್ಯವನ್ನಾದರೂ ಸುಧಾರಿಸಿಕೊಳ್ಳಲಿ" ಎಂದು ಸಚಿವ ಮಧು ಬಂಗಾರಪ್ಪ ಲೇವಡಿ ಮಾಡಿದರು.
