SUDDILIVE || SHIVAMOGGA
ಮೆಗ್ಗಾನ್ ಆಸ್ಪತ್ರೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಸೆಕ್ಯುರಿಟಿ ಗಾರ್ಡ್ ಕಮಲಾ ವಜಾ: ಮರುನೇಮಕಕ್ಕೆ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಆಗ್ರಹ-Kamala, a security guard who served at McGann Hospital for 17 years, dismissed; Kannada Karmika Rakshana Vedike demands her reinstatement
ಶಿವಮೊಗ್ಗ: ನಗರದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸುಮಾರು 17 ವರ್ಷಗಳಿಂದ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಕಮಲಾ ಅವರನ್ನು ಯಾವುದೇ ನೋಟಿಸ್ ನೀಡದೆ ಏಕಾಏಕಿ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ವತಿಯ ವಾಟಳ್ ಮಂಜು ನೇತೃತ್ವದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.
ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆಯ ಅಧ್ಯಕ್ಷ ವಾಟಾಳ್ ಮಂಜುನಾಥ್ ನೇತೃತ್ವದಲ್ಲಿ ಸಲ್ಲಿಸಿರುವ ದೂರಿನಲ್ಲಿ, ಕಮಲಾ ಅವರು ಹಲವು ವರ್ಷಗಳಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಾಮಾಣಿಕವಾಗಿ ಹಾಗೂ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಕೋವಿಡ್-19 ಮಹಾಮಾರಿಯ ಸಂದರ್ಭದಲ್ಲಿ ಕೂಡ ತಮ್ಮ ಆರೋಗ್ಯ ಹಾಗೂ ಜೀವದ ಬಗ್ಗೆ ಲೆಕ್ಕಿಸದೆ ಕರ್ತವ್ಯ ನಿರ್ವಹಿಸಿದ್ದರು ಎಂದು ಉಲ್ಲೇಖಿಸಲಾಗಿದೆ.
ಮೊಬೈಲ್ ಪ್ರಕರಣದ ಹಿನ್ನೆಲೆ
ದೂರಿನ ಪ್ರಕಾರ, ಸುಮಾರು 15 ದಿನಗಳ ಹಿಂದೆ ಹೆರಿಗೆ ವಾರ್ಡ್‌ನಲ್ಲಿ ಕಮಲಾ ಅವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ, ವಾರ್ಡ್‌ಗೆ ದಾಖಲಾಗಿದ್ದ ರೋಗಿಯೊಬ್ಬರ ಬ್ಯಾಗ್‌ನಲ್ಲಿದ್ದ ಮೊಬೈಲ್ ಫೋನ್ ಪದೇಪದೇ ರಿಂಗ್ ಆಗುತ್ತಿತ್ತು. ಈ ವೇಳೆ ಕಮಲಾ ಅವರು ಬ್ಯಾಗ್‌ನಲ್ಲಿದ್ದ ಫೋನ್ ಕರೆ ಸ್ವೀಕರಿಸಿ, ಸಂಬಂಧಿಕರಿಗೆ ರೋಗಿಯೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿ, ಬಳಿಕ ಮೊಬೈಲ್ ಅನ್ನು ಅದೇ ಬ್ಯಾಗ್‌ನಲ್ಲಿ ಇಟ್ಟಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಘಟನೆ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎಂದು ಸಂಘಟನೆ ಹೇಳಿದೆ. ನಂತರ ಬ್ಯಾಗ್‌ನಲ್ಲಿದ್ದ ಮೊಬೈಲ್ ಫೋನ್ ಅನ್ನು ಅಪರಿಚಿತ ವ್ಯಕ್ತಿಯೊಬ್ಬರು ತೆಗೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಆ ಮೊಬೈಲ್ ಚಿಕಿತ್ಸೆಗಾಗಿ ಹೊರರೋಗಿಯಾಗಿ ಬಂದಿದ್ದ ವ್ಯಕ್ತಿಯೊಬ್ಬರಿಗೆ ದೊರೆತಿದ್ದು, ಕಳೆದುಕೊಂಡಿದ್ದ ವ್ಯಕ್ತಿಗೆ ಮೊಬೈಲ್ ವಾಪಸ್ ಸಿಕ್ಕಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆದರೂ ಈ ಘಟನೆಯನ್ನು ಆಧಾರವಾಗಿಸಿಕೊಂಡು ಕಮಲಾ ಅವರ ಮೇಲೆ ಆರೋಪ ಹೊರಿಸಿ ಕೆಲಸದಿಂದ ತೆಗೆದುಹಾಕಿರುವುದು ಅನ್ಯಾಯ ಎಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.
17 ವರ್ಷಗಳ ಸೇವೆಗೆ ನ್ಯಾಯ ಬೇಕು
ಕಮಲಾ ಅವರು 17 ವರ್ಷಗಳ ಕಾಲ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದು, ಅವರ ವಿರುದ್ಧ ಯಾವುದೇ ಗಂಭೀರ ಆರೋಪ ಸಾಬೀತಾಗಿಲ್ಲ. ಯಾವುದೇ ನೋಟಿಸ್ ನೀಡದೆ ಅಥವಾ ಸಮರ್ಪಕ ವಿಚಾರಣೆ ನಡೆಸದೆ ಏಕಾಏಕಿ ಕೆಲಸದಿಂದ ವಜಾಗೊಳಿಸಿರುವುದು ಕಾರ್ಮಿಕರ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಸಂಘಟನೆ ದೂರಿನಲ್ಲಿ ಹೇಳಿದೆ.
ಹಲವು ವರ್ಷಗಳಿಂದ ಸೇವೆ ಸಲ್ಲಿಸಿರುವ ಮಹಿಳಾ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ದೂರ ಮಾಡುವ ಮೂಲಕ ಅವರ ಜೀವನೋಪಾಯಕ್ಕೆ ತೊಂದರೆ ಉಂಟುಮಾಡಲಾಗಿದೆ. ಹೀಗಾಗಿ ಕಮಲಾ ಅವರನ್ನು ಪುನಃ ಕರ್ತವ್ಯಕ್ಕೆ ಸೇರಿಸಿಕೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಇದೇ ವೇಳೆ, ಸೆಕ್ಯುರಿಟಿ ಏಜೆನ್ಸಿಗಳ ವಿರುದ್ಧವೂ ಸಂಘಟನೆ ಗಂಭೀರ ಆರೋಪ ಮಾಡಿದ್ದು, ಹೊಸ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಹಣದ ವ್ಯವಹಾರ ನಡೆಯುತ್ತಿದೆ ಎಂಬ ಆರೋಪವನ್ನು ಮಾಡಿದೆ. ಈ ಆರೋಪಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.
ಮರುನೇಮಕಕ್ಕೆ ಆಗ್ರಹ
ಕಮಲಾ ಅವರನ್ನು ಕೂಡಲೇ ಕೆಲಸಕ್ಕೆ ಮರುನೇಮಕ ಮಾಡಬೇಕು. ಅವರ ವಿರುದ್ಧದ ಆರೋಪಗಳ ಕುರಿತು ನ್ಯಾಯಯುತವಾಗಿ ಪರಿಶೀಲನೆ ನಡೆಸಿ, ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಒಂದು ವೇಳೆ ಕಮಲಾ ಅವರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಮೆಗ್ಗಾನ್ ಆಸ್ಪತ್ರೆ ಆಡಳಿತ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.
ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು, 17 ವರ್ಷಗಳಿಂದ ಸೇವೆ ಸಲ್ಲಿಸಿರುವ ಮಹಿಳಾ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದು ಸಂಘಟನೆ ಮನವಿ ಮಾಡಿದೆ.
