SUDDILIVE || SHIVAMOGGA
ಕೃಷ್ಣನಿಗಾಗಿ ರಸ್ತೆ ತಡೆದು ಪ್ರತಿಭಟನೆ-protest blocking the road
ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಸಮೀಪದ ಈಶ್ವರವನದ ಎದುರಿನ ತುಂಗಾ ಚಾನೆಲ್‌ನಲ್ಲಿ ಈಜಲು ತೆರಳಿದ್ದ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ನೀರುಪಾಲಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಶಿವಮೊಗ್ಗ–ಸವಳಂಗ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ.
ನೀರುಪಾಲಾದ ಬಾಲಕನನ್ನು ಬೊಮ್ಮನಕಟ್ಟೆ ನಿವಾಸಿ ಕೃಷ್ಣ (15) ಎಂದು ಗುರುತಿಸಲಾಗಿದೆ. ಕೃಷ್ಣ ಸೇರಿದಂತೆ ಆರು ಮಂದಿ ಸ್ನೇಹಿತರ ತಂಡ ಈಜಲು ತುಂಗಾ ಚಾನೆಲ್‌ಗೆ ತೆರಳಿತ್ತು ಎನ್ನಲಾಗಿದೆ. ತಂಡದಲ್ಲಿದ್ದ ಕೃಷ್ಣ ಮೊದಲು ನೀರಿಗೆ ಇಳಿದಾಗ, ಚಾನೆಲ್‌ನಲ್ಲಿ ನೀರಿನ ಹರಿವು ಹೆಚ್ಚಿದ್ದ ಕಾರಣ ನಿಯಂತ್ರಣ ಕಳೆದುಕೊಂಡು ನೀರಿನಲ್ಲಿ ಮುಳುಗಿದ್ದಾನೆ.
ಕೃಷ್ಣ ನೀರಿನಲ್ಲಿ ಮುಳುಗುತ್ತಿದ್ದುದನ್ನು ಕಂಡ ಸ್ನೇಹಿತರು ಆತನನ್ನು ರಕ್ಷಿಸಲು ಪ್ರಯತ್ನಿಸಿದರೂ ಯಶಸ್ವಿಯಾಗಲಿಲ್ಲ. ಬಳಿಕ ಸ್ಥಳೀಯರಿಗೆ ಮಾಹಿತಿ ನೀಡಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ನೀರು ತಡೆದು ಬಾಲಕನನ್ನು ಹುಡುಕುವಂತೆ ಒತ್ತಾಯ
ಬಾಲಕ ನೀರುಪಾಲಾದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದರು. ಚಾನೆಲ್‌ನಲ್ಲಿ ನೀರಿನ ಹರಿವು ಮುಂದುವರಿದಿರುವುದರಿಂದ ಶೋಧ ಕಾರ್ಯಾಚರಣೆಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಕೂಡಲೇ ಚಾನೆಲ್‌ನಲ್ಲಿ ನೀರು ಹರಿಯುವುದನ್ನು ತಡೆದು ನಿಲ್ಲಿಸಿ ಬಾಲಕನನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಶಿವಮೊಗ್ಗ–ಸವಳಂಗ ರಸ್ತೆಗೆ ಬಂದು ರಸ್ತೆ ತಡೆ ನಡೆಸಿದರು. ರಸ್ತೆ ತಡೆ ಪ್ರತಿಭಟನೆಯಿಂದ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು.
ಸ್ಥಳಕ್ಕೆ ಪೊಲೀಸರ ದೌಡು
ವಿಷಯ ತಿಳಿದು ವಿನೋಬನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ಪೊಲೀಸರು, ಶೋಧ ಕಾರ್ಯಾಚರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮನವರಿಕೆ ಮಾಡಿದರು.
ಪೊಲೀಸರ ಮಧ್ಯಪ್ರವೇಶದ ಬಳಿಕ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆಯನ್ನು ಹಿಂಪಡೆದರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನೇತೃತ್ವದಲ್ಲಿ ಚಾನೆಲ್‌ನಲ್ಲಿ ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯಿತು.
ಸ್ಥಳದಲ್ಲಿ ಬಾಲಕನ ಕುಟುಂಬಸ್ಥರು ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತ್ತು. ಕೃಷ್ಣನನ್ನು ಶೀಘ್ರವಾಗಿ ಪತ್ತೆಹಚ್ಚುವಂತೆ ಕುಟುಂಬಸ್ಥರು ಹಾಗೂ ಸ್ಥಳೀಯರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ನೀರಿನ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಯನ್ನು ಎಚ್ಚರಿಕೆಯಿಂದ ನಡೆಸಲಾಗುತ್ತಿದೆ. ಬಾಲಕನ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
protest blocking the road
