SUDDILIVE|| SHIKARIPURA
ಶಿರಾಳಕೊಪ್ಪದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹಪತ್ತೆ- Man body found under suspicious circumstances in Shiralakoppa
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಒಡಕೇಶಪ್ಪ (31) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮೆಕ್ಕೆಜೋಳದ ಹೊಲಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ ಒಡಕೇಶಪ್ಪ ರಾತ್ರಿ ಮನೆಗೆ ವಾಪಸ್ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕುಟುಂಬಸ್ಥರು ಹಾಗೂ ಸ್ಥಳೀಯರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಮಳವಳ್ಳಿ ಗ್ರಾಮದ ಮೆಕ್ಕೆಜೋಳದ ಹೊಲದಲ್ಲಿ ಒಡಕೇಶಪ್ಪ ಮೃತದೇಹ ಪತ್ತೆಯಾಗಿದೆ. ಕೈಗಳನ್ನು ಕಾಲುಗಳ ಬಳಿ ಕಟ್ಟಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಲ್ಲದೆ, ಬಾಯಿಯಲ್ಲಿ ವಿಷಪದಾರ್ಥ ಇಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ ಎನ್ನಲಾಗಿದ್ದು, ಇದು ಕೊಲೆಯಾಗಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಎಎಸ್ಪಿ ಎ.ಜೆ. ಕಾರ್ಯಪ್ಪ ಹಾಗೂ ಪಿಎಸ್ಐ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದ್ದು, ಸಾವಿನ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕ ಒಡಕೇಶಪ್ಪನ ಸಾವಿನ ನಿಖರ ಕಾರಣ ತಿಳಿದುಬರಲಿದೆ.
ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.
Man body found under suspicious circumstances in Shiralakoppa
