ಶಿವಮೊಗ್ಗದಲ್ಲಿ ಎರಡು ಕಡೆ ಗಾಂಜಾ ದಾಳಿ: ಮೂವರು ಆರೋಪಿಗಳ ಬಂಧನ, 1.72 ಕೆಜಿ ಗಾಂಜಾ ಜಪ್ತಿ- Ganja raids at two locations in Shivamogga: Three accused arrested, 1.72 kg of ganja seized

SUDDILIVE || SHIVAMOGGA

ಶಿವಮೊಗ್ಗದಲ್ಲಿ ಎರಡು ಕಡೆ ಗಾಂಜಾ ದಾಳಿ: ಮೂವರು ಆರೋಪಿಗಳ ಬಂಧನ, 1.72 ಕೆಜಿ ಗಾಂಜಾ ಜಪ್ತಿ- Ganja raids at two locations in Shivamogga: Three accused arrested, 1.72 kg of ganja seized  
Ganja, raid


ಶಿವಮೊಗ್ಗ: ಜಿಲ್ಲೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಭದ್ರಾವತಿ ಗ್ರಾಮಾಂತರ ಹಾಗೂ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ, ಒಟ್ಟು 1 ಕೆಜಿ 725 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾಗಿರುವ ಗಾಂಜಾದ ಒಟ್ಟು ಮೌಲ್ಯ ಸುಮಾರು 81,350 ರೂ. ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದನೇರಳೆಕೆರೆ ಸಿದ್ದರಮಟ್ಟಿ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿ ಆಧರಿಸಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕಿ ಶಿಲ್ಪಾ ಎನ್. ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು.

ದಾಳಿಯ ವೇಳೆ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಅಭಿಶೇಕ್ ನಾಯಕ್ @ ಅಭಿ ಹಾಗೂ ಆರೀಫ್ ಉಲ್ಲಾ @ ತೌಸಿಫ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 31,350 ರೂ. ಮೌಲ್ಯದ 627 ಗ್ರಾಂ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಇದೇ ವೇಳೆ, ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬುದ್ದನಗರದಿಂದ ಮಂಜುನಾಥ ಬಡಾವಣೆಗೆ ತೆರಳುವ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ವಿರುದ್ಧವೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಗಾಂಜಾ ಮಾರಾಟದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಕಿರಣ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಸುಮಾರು 50,000 ರೂ. ಮೌಲ್ಯದ 1 ಕೆಜಿ 98 ಗ್ರಾಂ ಗಾಂಜಾವನ್ನು ಪೊಲೀಸರು ಅಮಾನತುಗೊಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 290/2026ರಂತೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಜಿಲ್ಲೆಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

Ganja raids at two locations in Shivamogga: Three accused arrested, 1.72 kg of ganja seized  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close