SUDDILIVE || SHIVAMOGGA
ತಂದೆಯ ಸಮಾಧಿ ಬಳಿ ಪ್ರಾರ್ಥನೆ ಸಲ್ಲಿಸಲು ತೆರಳಿದ್ದ ವ್ಯಕ್ತಿಯ ಮೇಲೆ ಚಾಕು ಇರಿತ-Man stabbed while visiting his father's grave to offer prayers
ಶಿವಮೊಗ್ಗ: ನಗರದ ಹೊರವಲಯದ ಸೋಮಿನಕೊಪ್ಪದಲ್ಲಿರುವ ಸುನ್ನಿ ಕಬರಸ್ಥಾನದಲ್ಲಿ ಭಾನುವಾರ ಮಧ್ಯಾಹ್ನ ವ್ಯಕ್ತಿಯೊಬ್ಬರ ಮೇಲೆ ಅಪರಿಚಿತರು ಚಾಕುವಿನಿಂದ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ದಾಳಿಗೊಳಗಾದವರನ್ನು ಮುಯೀನ್ ಇಕ್ಬಾಲ್ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಮುಯೀನ್ ಇಕ್ಬಾಲ್ ಅವರು ಸೋಮಿನಕೊಪ್ಪದ ಸುನ್ನಿ ಕಬರಸ್ಥಾನಕ್ಕೆ ತೆರಳಿ, ಅಲ್ಲಿ ಇರುವ ತಮ್ಮ ತಂದೆಯ ಸಮಾಧಿ ಬಳಿ ಪ್ರಾರ್ಥನೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ ಏಕಾಏಕಿ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಗಳು ಮುಯೀನ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಗಾಯಗೊಂಡ ಮುಯೀನ್ ಅವರನ್ನು ತಕ್ಷಣವೇ ಶಿವಮೊಗ್ಗ ನಗರದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ.
ಘಟನೆ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದಾಳಿಯ ಹಿಂದಿನ ನಿಖರ ಕಾರಣವೇನು ಹಾಗೂ ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
