SUDDILIVE || SHIVAMOGGA
ಆನಂದಪುರ–ಶಿಕಾರಿಪುರ ಹೆದ್ದಾರಿಯಲ್ಲಿ ಭೀಕರ ಬೈಕ್ ಅಪಘಾತ; ಗಾಯಾಳು ಸಾವು-Fatal bike accident on Anandpur-Shikaripur highway; injured person dies
ಶಿವಮೊಗ್ಗ: ಆನಂದಪುರ–ಶಿಕಾರಿಪುರ ರಾಜ್ಯ ಹೆದ್ದಾರಿಯ ದಾಸಕೊಪ್ಪ ಮಸೀದಿ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಾಗರ ತಾಲೂಕಿನ ದಾಸಕೊಪ್ಪ ಗ್ರಾಮದ ಮಸೀದಿ ಸಮೀಪ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಮೊಹಮ್ಮದ್ ಸಿದ್ದಿಕ್ ಎಂದು ಗುರುತಿಸಲಾಗಿದೆ.
ತೀವ್ರ ವೇಗದಲ್ಲಿ ಬಂದ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಸಿದ್ದಿಕ್ ಅವರ ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು. ಅಪಘಾತದ ಬಳಿಕ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.
ಗಂಭೀರ ಸ್ಥಿತಿಯಲ್ಲಿದ್ದ ಸಿದ್ದಿಕ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಆಸ್ಪತ್ರೆ ತಲುಪುವ ಮುನ್ನವೇ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಆನಂದಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ಎರಡೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಸ್ಥಳ ಮಹಜರು ನಡೆಸಲಾಗಿದೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Fatal bike accident on Anandpur-Shikaripur highway; injured person dies
