SUDDILIVE || SHIVAMOGGA
ಸೆ.25ರಿಂದ ಶಾಸಕರು, ಸಚಿವರ ಮನೆ ಮುಂದೆ ಸಿಐಟಿಯು ಪ್ರತಿಭಟನೆ-Protest in front of MLAs and ministers' homes from September 25
ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 25ರಿಂದ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ಜಿಲ್ಲಾ ಸಂಚಾಲಕ ಎಂ. ನಾರಾಯಣ ಹಾಗೂ ಸಹ ಸಂಚಾಲಕಿ ಹನುಮಮ್ಮ ತಿಳಿಸಿದ್ದಾರೆ.
ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಬೇಕು, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಬೇಕು ಸೇರಿದಂತೆ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಸಿಐಟಿಯು ಒತ್ತಾಯಿಸಿದೆ.
ಸೆಪ್ಟೆಂಬರ್ 8ರಂದು ಬೆಂಗಳೂರಿನ ವಿಧಾನಸೌಧದ ಬಳಿ ಸಿಐಟಿಯು ಸಂಯೋಜಿತ 184 ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಂಗನವಾಡಿ, ಬಿಸಿಯೂಟ, ಗ್ರಾಮ ಪಂಚಾಯಿತಿ, ಬೀಡಿ, ಪ್ಲಾಂಟೇಷನ್, ಟೈಲ್ಸ್, ಆಟೊ–ಟ್ಯಾಕ್ಸಿ, ಕಟ್ಟಡ, ಹಮಾಲಿ, ಮನೆಗೆಲಸ, ಮುನ್ಸಿಪಲ್, ಗುತ್ತಿಗೆ ಹಾಗೂ ಕೈಗಾರಿಕಾ ಕಾರ್ಮಿಕರು ಸೇರಿದಂತೆ 25 ಸಾವಿರಕ್ಕೂ ಅಧಿಕ ಕಾರ್ಮಿಕರು ಭಾಗವಹಿಸಿದ್ದರು ಎಂದು ಸಂಘಟನೆ ತಿಳಿಸಿದೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕರ ಮನವಿ ಸ್ವೀಕರಿಸಿದ್ದರು. ಮುಖ್ಯಮಂತ್ರಿ ಸೆಪ್ಟೆಂಬರ್ 15ರಂದು ಕಾರ್ಮಿಕ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಅಂದಿನ ಹೋರಾಟವನ್ನು ಹಿಂಪಡೆಯಲಾಗಿತ್ತು. ಆದರೆ, ಭರವಸೆಯಂತೆ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಪ್ರತಿನಿಧಿಗಳ ನಡುವೆ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಮತ್ತೆ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ಸಿಐಟಿಯು ಮುಖಂಡರು ತಿಳಿಸಿದ್ದಾರೆ.
ಕಾರ್ಮಿಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ, ಕಾರ್ಮಿಕ ಸಚಿವರು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಐಟಿಯು ಪ್ರತಿನಿಧಿಗಳ ಸಭೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸರ್ಕಾರ ಕಾರ್ಮಿಕರ ಬೇಡಿಕೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಿಐಟಿಯು ಎಚ್ಚರಿಕೆ ನೀಡಿದೆ. ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಶಾಸಕರು ಹಾಗೂ ಸಚಿವರ ಮನೆಗಳ ಮುಂದೆ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ಇಲ್ಲ
ಸೆಪ್ಟೆಂಬರ್ 25ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಾಗೂ ವಿಸರ್ಜನಾ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಿಐಟಿಯು ಪ್ರತಿಭಟನೆ ನಡೆಸುವುದಿಲ್ಲ ಎಂದು ಸಂಘಟನೆ ತಿಳಿಸಿದೆ.
ನಗರ ಹೊರತುಪಡಿಸಿ ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ಸೆಪ್ಟೆಂಬರ್ 25ರಂದು ಪ್ರತಿಭಟನೆ ನಡೆಯಲಿದೆ. ಸೊರಬ ತಾಲ್ಲೂಕಿನಲ್ಲಿ ಮಾತ್ರ ಸೆಪ್ಟೆಂಬರ್ 26ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
