SUDDILIVE || HOSANAGARA
ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಭಸ್ಮ; ಗಣೇಶೋತ್ಸವಕ್ಕೆ ತೆರಳಿದ್ದ ಕುಟುಂಬ, ತಪ್ಪಿದ ಅನಾಹುತ-House gutted by short circuit; family on way to Ganesh festival escapes disaster
ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು, ಧಾನ್ಯಗಳು ಸೇರಿದಂತೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಸುಟ್ಟುಹೋಗಿರುವ ಘಟನೆ ಹೊಸನಗರ ತಾಲೂಕಿನ ಕೋಡೂರು ಗ್ರಾಮದಲ್ಲಿ ನಡೆದಿದೆ.
ಕೋಡೂರಿನ ಕೀಳಂಬಿ ರಸ್ತೆ ಬಳಿ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿರುವ ಸಂಜು ಎಂಬುವವರಿಗೆ ಸೇರಿದ ಮನೆಯಲ್ಲಿ ಮಂಗಳವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿದೆ.
ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು, ಧಾನ್ಯಗಳು ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.
ಗಣೇಶೋತ್ಸವಕ್ಕೆ ತೆರಳಿದ್ದ ಕುಟುಂಬ
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಮನೆಯ ಸದಸ್ಯರೆಲ್ಲರೂ ಗ್ರಾಮದ ಗಣೇಶೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುಟುಂಬದವರು ಮನೆಯಲ್ಲೇ ಇದ್ದಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎನ್ನಲಾಗಿದ್ದು, ಅದೃಷ್ಟವಶಾತ್ ಪ್ರಾಣಹಾನಿ ತಪ್ಪಿದೆ.
ವಿಷಯ ತಿಳಿದ ಕೂಡಲೇ ಹೊಸನಗರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಕೋಡೂರು ವ್ಯಾಪ್ತಿಯಲ್ಲಿ ಕೆಲಕಾಲ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
