SUDDILIVE || BANGLORE
ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ-SC/ST Newspaper Editors Association Annual Endowment Award Presentation on September 17
ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 17ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ಗುರುವಾರ ಬೆಳಿಗ್ಗೆ 10.30ಕ್ಕೆ ಕಬ್ಬನ್ ಪಾರ್ಕ್‌ನ ಸರ್ಕಾರಿ ನೌಕರರ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ, ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್, ಮಾಜಿ ಸಚಿವ ಹೆಚ್. ಆಂಜನೇಯ, ನಿಕಟಪೂರ್ವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಅನುಚೇತು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ವಿ. ಶಿವಾನಂದ ತಗಡೂರು, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಚ್.ಬಿ. ಮದನಗೌಡ, ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಅವರು ಉಪಸ್ಥಿತರಿರುವರು.
ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಘದ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಅವರು ಪ್ರಾಸ್ತಾವಿಕ ನುಡಿ ಆಡಲಿದ್ದಾರೆ.
ವಿವಿಧ ದತ್ತಿ ಪ್ರಶಸ್ತಿಗಳ ಪ್ರದಾನ
2025ನೇ ಸಾಲಿನ ವಾರ್ಷಿಕ ದತ್ತಿ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರದಾನ ಮಾಡಲಾಗುತ್ತಿದೆ.
ಡಾ. ಬಾಬಾಸಾಹೇಬ ಅಂಬೇಡ್ಕರ್ ದತ್ತಿ ಪ್ರಶಸ್ತಿಯನ್ನು ಮೈಸೂರಿನ ‘ವಿಜಯ ಕಾಲ’ ಕನ್ನಡ ದಿನಪತ್ರಿಕೆಯ ಸಂಪಾದಕ ಕೆ. ದೀಪಕ್ ಅವರಿಗೆ ನೀಡಲಾಗುತ್ತಿದೆ.
ಬಿ. ರಾಚಯ್ಯ ದತ್ತಿ ಪ್ರಶಸ್ತಿಯನ್ನು ಮಾಹಿತಿ ಆಯೋಗದ ಆಯುಕ್ತ ಹಾಗೂ ಹಿರಿಯ ಪತ್ರಕರ್ತ ಬದ್ರುದ್ದೀನ್ ಕೆ. ಅವರಿಗೆ, ಪ್ರೊ. ಬಿ. ಕೃಷ್ಣಪ್ಪ ದತ್ತಿ ಪ್ರಶಸ್ತಿಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಅವರಿಗೆ ಹಾಗೂ ಬಿ. ಬಸವಲಿಂಗಪ್ಪ ದತ್ತಿ ಪ್ರಶಸ್ತಿಯನ್ನು ಪತ್ರಕರ್ತ ಯತಿರಾಜ್ ಬ್ಯಾಲಹಳ್ಳಿ ಅವರಿಗೆ ಪ್ರದಾನ ಮಾಡಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಸಂಪಾದಕರಿಗೆ ಸಂಘದ ಗೌರವ ಪ್ರಶಸ್ತಿಗಳನ್ನು ಚಂದ್ರಣ್ಣ (ಸಂಪಾದಕರು, ‘ಕರ್ನಾಟಕ ಎಕ್ಸ್‌ಪ್ರೆಸ್’, ದಾವಣಗೆರೆ), ದೇವೇಂದ್ರಪ್ಪ ಕಪ್ಪನೂರು (ಸಂಪಾದಕರು, ‘ಬುದ್ಧಲೋಕ’, ಗುಲ್ಬರ್ಗಾ), ಬಿ.ಓ. ಕರಿಯಮ್ಮ (ಸಂಪಾದಕರು, ‘ಜಗಳೂರು ವಾಯ್ಸ್’, ದಾವಣಗೆರೆ), ಸುಭಾಷ್ ಹೊದ್ದೂರು (ಸಂಪಾದಕರು, ‘ಸುದಿನ’ ಕನ್ನಡ ದಿನಪತ್ರಿಕೆ, ಬಾಗಲಕೋಟೆ) ಹಾಗೂ ಅನೂಪ್ ಕುಮಾರ್ (ಕಾರ್ಯನಿರ್ವಾಹಕ ಸಂಪಾದಕರು, ‘ಬಳ್ಳಾರಿ ಬೆಳಗಾಯಿತು’, ಬಳ್ಳಾರಿ) ಅವರಿಗೆ ಪ್ರದಾನಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ಭೂಮಾಯಿ ಬಳಗ, ಬೆಂಗಳೂರು ಆಶಯಗೀತೆಗಳನ್ನು ಪ್ರಸ್ತುತಪಡಿಸಲಿದೆ.
ಇದೇ ಸಮಾರಂಭದಲ್ಲಿ ಎನ್. ರವಿಕುಮಾರ್ ಟೆಲೆಕ್ಸ್ ಅವರ ‘ಸುದ್ದಿಮಾಧ್ಯಮ ಕ್ಷೇತ್ರದಲ್ಲಿ ಅಂಬೇಡ್ಕರ್ ದೃಷ್ಟಿಕೋನ’ ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಗುತ್ತದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಪ್ರಾಯೋಜಕತ್ವದಲ್ಲಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾನ್ಯತೆ ಪಡೆದ ಪತ್ರಿಕೆಗಳೊಂದಿಗೆ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ಚೆಲುವರಾಜು ಹಾಗೂ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ತಿಳಿಸಿದ್ದಾರೆ.
