SUDDILIVE || SHIVAMOGGA
ರಾಹುಲ್ ಗಾಂಧಿ ವಿರುದ್ಧ FIR ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ-Congress protests in Shivamogga, condemning FIR against Rahul Gandhi
ಶಿವಮೊಗ್ಗ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಕಚೇರಿಯಿಂದ ಮಹಾವೀರ ವೃತ್ತದವರೆಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೂಡಲೇ ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಎಫ್‌ಐಆರ್ ದಾಖಲಾದ ಹಿನ್ನೆಲೆ ಏನು?
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿತ್ತು. ಈ ಘಟನೆಯನ್ನು ಖಂಡಿಸಿ ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು.
ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್‌ನ ಕಾರ್ಯಕರ್ತ ಅಮಿತ್ ಕುಮಾರ್ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಎಫ್‌ಐಆರ್ ದಾಖಲಿಸಿರುವ ಕ್ರಮವನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಪ್ರಕರಣವನ್ನು ಹಿಂಪಡೆಯುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ಹಾಪ್‌ಕಾಮ್ಸ್ ಜಿಲ್ಲಾ ಅಧ್ಯಕ್ಷ ವಿಜಯ ಕುಮಾರ್, ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಚೇತನ್ ಕೆ. ಗೌಡ ಸೇರಿದಂತೆ ವಿವಿಧ ಬ್ಲಾಕ್‌ಗಳ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
