SUDDILIVE | SHIVAMOGGA
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಆಗಿ ರಿಷಿ ಆನಂದ್ ಅಧಿಕಾರ ಸ್ವೀಕಾರ-Rishi Anand assumed office as Shimoga Zilla Panchayat CEO
ಶಿವಮೊಗ್ಗ: ನೂತನ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ) 2020ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಿಷಿ ಆನಂದ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ರಿಜಿಸ್ಟರ್‌ಗೆ ಸಹಿ ಮಾಡುವ ಮೂಲಕ ಅವರು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಿಷಿ ಆನಂದ್, ಕರ್ನಾಟಕ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳಡಿ ಸಾರ್ವಜನಿಕರಿಗೆ ದೊರೆಯಬೇಕಾದ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ತಲುಪಬೇಕು. ಯಾವುದೇ ರೀತಿಯ ವಿಳಂಬವಾಗದಂತೆ ನೋಡಿಕೊಳ್ಳುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.
ಪ್ರಸ್ತುತ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಇರಬಾರದು ಎಂಬುದು ತಮ್ಮ ಪ್ರಮುಖ ಆದ್ಯತೆಯಾಗಿದೆ. ಜೊತೆಗೆ ಕೂಲಿ ಕಾರ್ಮಿಕರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (MGNREGA) ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ವಿವಿಧ ಲೈನ್ ಇಲಾಖೆಗಳ ಮೂಲಕ ಸಾರ್ವಜನಿಕರಿಗೆ ದೊರೆಯಬೇಕಾದ ಸೌಲಭ್ಯಗಳು ಕೂಡ ಸಮಯಕ್ಕೆ ಸರಿಯಾಗಿ ತಲುಪುವಂತೆ ನೋಡಿಕೊಳ್ಳಲಾಗುವುದು. ಸಾರ್ವಜನಿಕ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುವುದು ಹಾಗೂ ಉತ್ತಮ ಆಡಳಿತ ನೀಡುವುದು ತಮ್ಮ ಆದ್ಯತೆಯಾಗಿದೆ ಎಂದು ರಿಷಿ ಆನಂದ್ ಹೇಳಿದರು.
ಈ ಕಾರ್ಯಗಳಲ್ಲಿ ಸಾರ್ವಜನಿಕರು, ಅಧಿಕಾರಿಗಳು ಹಾಗೂ ಮಾಧ್ಯಮಗಳ ಸಹಕಾರ ಮತ್ತು ಸಹಯೋಗವನ್ನು ಕೋರಿದರು.
