SUDDILIVE || SHIVAMOGGA
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ-Fire breaks out in a moving private bus
ಶಿವಮೊಗ್ಗ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಬಾಳು ಗ್ರಾಮದ ಬಳಿ ಗುರುವಾರ ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ಡ್ರೀಮ್ ಎಂಬ ಖಾಸಗಿ ಬಸ್‌ನಲ್ಲಿ ಮುಂಜಾನೆ ಸುಮಾರು 5.45ರ ವೇಳೆಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಸ್ ಚಲಿಸುತ್ತಿದ್ದ ಸಂದರ್ಭದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ವಿಷಯ ಗಮನಕ್ಕೆ ಬರುತ್ತಿದ್ದಂತೆ ಚಾಲಕ ಹಾಗೂ ಕ್ಲೀನರ್ ತಕ್ಷಣವೇ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿದ್ದರೂ, ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದಿದ್ದರು. ಶಿವಮೊಗ್ಗದಿಂದ ಸಾಗರದತ್ತ ಇಬ್ಬರು ಪ್ರಯಾಣಿಕರು ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಹಾಗೂ ಕ್ಲೀನರ್ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದು, ಇಬ್ಬರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಬೆಂಕಿ ತೀವ್ರವಾಗಿ ಹರಡಿದ ಪರಿಣಾಮ ಬಸ್‌ನ ಸುಮಾರು ಶೇ.80ರಷ್ಟು ಭಾಗ ಸುಟ್ಟು ಹಾನಿಯಾಗಿದೆ. ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನಕರವಾಗಿದ್ದು, ಚಾಲಕ ಮತ್ತು ಕ್ಲೀನರ್‌ನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.
Fire breaks out in a moving private bus
