SUDDILIVE || BHADRAVATHI
ಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಆತ್ಮಹತ್ಯೆ ಶಂಕೆ-Body of unidentified man found in Bhadra river: Suicide suspected
ಶಿವಮೊಗ್ಗ: ಭದ್ರಾವತಿ ನಗರದ ಮಾಧವಾಚಾರ್ ಸರ್ಕಲ್ ಸಮೀಪ ಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಹೊಸ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ನದಿಯಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿ ದಂಡೆಯಲ್ಲಿಯೂ ಪರಿಶೀಲನೆ ನಡೆಸಿರುವ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಮುಂದಾಗಿದ್ದಾರೆ.
ಮೃತ ವ್ಯಕ್ತಿಯ ಹೆಸರು ಮತ್ತು ವಿಳಾಸದ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನೆಯ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯ ಹಿನ್ನೆಲೆಯಲ್ಲಿ ಸೇತುವೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಈ ಸಂಬಂಧ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಮೃತರ ಗುರುತು ಪತ್ತೆಗೆ ಪೊಲೀಸರ ಮನವಿ
ಮೃತ ವ್ಯಕ್ತಿಯ ಗುರುತು ತಿಳಿದಿರುವವರು ಅಥವಾ ಅವರ ಕುಟುಂಬದ ಬಗ್ಗೆ ಮಾಹಿತಿ ಹೊಂದಿರುವವರು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
