SUDDILIVE || SAGARA
ಶರಾವತಿ ಬ್ಯಾಕ್‌ವಾಟರ್‌ನಲ್ಲಿ ಅಕ್ರಮ ಮರಳು ಗಣಿಗಾರಿಕೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪ-Illegal sand mining in Sharavati backwaters: Officials accused of negligence
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ಸಮೀಪದ ಗೀಜಿಗ ಗ್ರಾಮದಲ್ಲಿ ಶರಾವತಿ ಬ್ಯಾಕ್‌ವಾಟರ್‌ನಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಗೀಜಿಗ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ಸುಮಾರು 5ರಿಂದ 6 ಯಂತ್ರಗಳನ್ನು ಬಳಸಿ, ಬೋಟ್‌ಗಳ ಮೂಲಕ ಮರಳು ತೆಗೆಯಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಿಗದಿತ ಸಮಯಕ್ಕಿಂತ ಮುನ್ನವೇ ಈ ಬಾರಿ ಅಕ್ರಮ ಮರಳುಗಾರಿಕೆ ಆರಂಭವಾಗಿದ್ದು, ನಿಯಮಬಾಹಿರವಾಗಿ ಮರಳು ತೆಗೆಯುವ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ ಎಂಬ ಆರೋಪವೂ ಕೇಳಿಬಂದಿದೆ.
ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದರೂ ಜಿಲ್ಲಾಡಳಿತ, ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಯಾವುದೇ ಪರಿಣಾಮಕಾರಿ ದಾಳಿ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯವರಿಗೆ ಸ್ಥಳೀಯರು ಕರೆ ಮಾಡಿ ಅಕ್ರಮಮರಳುಗಾರಿಕೆ ವಿರುದ್ಧ ದೂರಿದರೂ ಸ್ಥಳಕ್ಕೆ ಅಧಿಕಾರಿಗಳು ಬಂದಿಲ್ಲ ಎಂಬ ಕಾರಣಕ್ಕೆ ಮಾಧ್ಯಮಗಳಿಗೆ ಸ್ಥಳೀಯರು ದೂರವಾಣಿ ಮೂಲಕ ದೂರಲು ಆರಂಬಿಸಿದ್ದಾರೆ. ಅಂದರೆ ಅಧಿಕಾರಿಗಳ ನಿರ್ಲಕ್ಷ ಎದ್ದು ಕಾಣುತ್ತಿದೆ.
ಜಿಲ್ಲೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳು ವರ್ಗಾವಣೆಯಾಗಿ ಮೂರು–ನಾಲ್ಕು ತಿಂಗಳು ಕಳೆದಿದ್ದರೂ, ಅಕ್ರಮ ಮರಳು ಮಾಫಿಯಾ ವಿರುದ್ಧ ಇಲಾಖೆ ವತಿಯಿಂದ ಪರಿಣಾಮಕಾರಿ ಕ್ರಮ ಅಥವಾ ಪ್ರಕರಣ ದಾಖಲಿಸಿರುವುದು ಸಾರ್ವಜನಿಕರ ಗಮನಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಅಕ್ರಮ ಮರಳುಗಾರಿಕೆ ನಿರಂತರವಾಗಿ ನಡೆಯುತ್ತಿದೆಯೇ ಎಂಬ ಅನುಮಾನವೂ ಸಾರ್ವಜನಿಕರಲ್ಲಿ ಮೂಡಿದೆ. ಜಿಲ್ಲಾಡಳಿತವೇ ಅಕ್ರಮ ಮರಳುಗಾರಿಕೆಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆಯೇ? ಎಂಬ ಪ್ರಶ್ನೆಯನ್ನು ಸ್ಥಳೀಯರು ಎತ್ತಿದ್ದಾರೆ. ಆದರೆ ಈ ಆರೋಪಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.
ಶಿವಮೊಗ್ಗ ಗ್ರಾಮಾಂತರ, ಸಾಗರ, ತೀರ್ಥಹಳ್ಳಿಯಲ್ಲಿ ಅಕ್ರಮ ಮರಳುಗಾರಿಕೆ ಹೆಚ್ಚಾಗಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಸಂಬಂಧಪಟ್ಟ ಇಲಾಖೆಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Illegal sand mining in Sharavati backwaters: Officials accused of negligence
