SUDDILIVE || SHIVAMOGGA
ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದರೆ ಗ್ರಹಚಾರ ಬಿಡಸ್ತೀನಿ: ಶಾಸಕ ಚನ್ನಬಸಪ್ಪ ವಾರ್ನ್-If you behave rudely with the public, you will be evicted: MLA Channabasappa Warn
ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ಪದೇಪದೇ ಉಂಟಾಗುತ್ತಿರುವ ಸಮಸ್ಯೆ ಹಾಗೂ ದೂರು ನೀಡಲು ತೆರಳುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಜಲಮಂಡಳಿ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ತುರ್ತು ಸಭೆ ನಡೆಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಶಾಸಕರು, ಸಾರ್ವಜನಿಕರ ಸಮಸ್ಯೆಗಳನ್ನು ಸೌಜನ್ಯದಿಂದ ಆಲಿಸಿ ತಕ್ಷಣ ಪರಿಹರಿಸುವುದು ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕರ್ತವ್ಯ ಎಂದು ಹೇಳಿದರು.
"ಕುಡಿಯುವ ನೀರಿನ ಸಮಸ್ಯೆ ಹೇಳಿಕೊಳ್ಳಲು ಬರುವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುವ ಅಧಿಕಾರಿ ಅಥವಾ ಸಿಬ್ಬಂದಿ ಯಾರೇ ಆಗಿದ್ದರೂ ಅವರ ವಿರುದ್ಧ ಮುಲಾಜಿಲ್ಲದೆ ಕಠಿಣ ಶಿಸ್ತುಕ್ರಮ ಕೈಗೊಂಡು ಅಮಾನತಿಗೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು," ಎಂದು ಎಚ್ಚರಿಕೆ ನೀಡಿದರು.
ಜನಸಾಮಾನ್ಯರೊಂದಿಗೆ ಅಧಿಕಾರಿಗಳು ದರ್ಪದಿಂದ ವರ್ತಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಆಡಳಿತ ವ್ಯವಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಚನ್ನಬಸಪ್ಪ ಹೇಳಿದರು.
ಇದೇ ವೇಳೆ ನಗರದಲ್ಲಿ ನಡೆಯುತ್ತಿರುವ 24/7 ಕುಡಿಯುವ ನೀರು ಯೋಜನೆಯ ಕಾಮಗಾರಿ ವಿಳಂಬದ ಬಗ್ಗೆಯೂ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ನಾಗರಿಕರಿಗೆ ಸುಗಮವಾಗಿ ಕುಡಿಯುವ ನೀರು ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನೀರು ಸರಬರಾಜಿನಲ್ಲಿ ತೊಂದರೆಯಾಗಿರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ತಕ್ಷಣ ಟ್ಯಾಂಕರ್ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಕರ್ತವ್ಯಲೋಪ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಸಭೆಯಲ್ಲಿ ಜಲಮಂಡಳಿ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಅಧಿಕಾರಿಗಳು ಭಾಗವಹಿಸಿದ್ದರು.
If you behave rudely with the public, you will be evicted: MLA Channabasappa Warn
