SUDDILIVE || SHIVAMOGGA
ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ ಸ್ಟೇಬಲ್ ನಿಧನ- Police constable injured in accident dies
ಶಿವಮೊಗ್ಗ: ಕರ್ತವ್ಯದ ನಿಮಿತ್ತ ಬೈಕ್‌ನಲ್ಲಿ ತೆರಳುತ್ತಿದ್ದ ಶಿಕಾರಿಪುರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಗಿರೀಶ್ ಕುಮಾರ್ ಅವರು ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು, ಸುಮಾರು 15 ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಗಿರೀಶ್ ಕುಮಾರ್ ಅವರು ಶಿಕಾರಿಪುರದಿಂದ ಆನಂದಪುರ ಹಾಗೂ ಸಾಗರ ಭಾಗದ ಕಡೆಗೆ ಅಪರಾಧ ಪ್ರಕರಣವೊಂದರ ಆರೋಪಿಗಳ ಪತ್ತೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಲು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಾಪುರ ಕ್ರಾಸ್ ಸಮೀಪ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ನಾಯಿಯೊಂದು ಅಡ್ಡ ಬಂದಿದ್ದರಿಂದ ಅಪಘಾತ
ಗಿರೀಶ್ ಕುಮಾರ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ ನಾಯಿಯೊಂದು ಅಡ್ಡ ಬಂದಿದ್ದರಿಂದ ಅಪಘಾತ ಸಂಭವಿಸಿತ್ತು. ವಿದ್ಯುತ್ ತಂತಿ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಮಾಹಿತಿ ಪರಿಶೀಲಿಸಲು ಅವರನ್ನು ಕಳುಹಿಸಲಾಗಿತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮೊದಲು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ತಲೆಗೆ ಗಂಭೀರ ಗಾಯಗಳಾಗಿದ್ದ ಹಿನ್ನೆಲೆಯಲ್ಲಿ ಎರಡು ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿತ್ತು. ಆದರೂ ಅವರು ಕೋಮಾ ಸ್ಥಿತಿಯಲ್ಲೇ ಇದ್ದರು ಎನ್ನಲಾಗಿದೆ.
ಸುಮಾರು 15 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಚೇತರಿಸಿಕೊಳ್ಳದೆ ಇಂದು ಬುಧವಾರ ಮೃತಪಟ್ಟಿದ್ದಾರೆ.
ನಾಲ್ಕು ವರ್ಷಗಳಿಂದ ಶಿಕಾರಿಪುರದಲ್ಲಿ ಸೇವೆ
ಗಿರೀಶ್ ಕುಮಾರ್ ಅವರು ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ನಾಲ್ಕು ವರ್ಷಗಳಿಂದ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.
ಮೂಲತಃ ಶಿಕಾರಿಪುರ ತಾಲೂಕಿನ ಸಾಲೂರು ಗ್ರಾಮದವರಾದ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪತ್ನಿ ಅಂಚೆ ಇಲಾಖೆಯಲ್ಲಿ ಆಗಿ ಸರ್ಕಾರಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕುಟುಂಬಕ್ಕೆ ಆಧಾರವಾಗಿದ್ದ ಪೊಲೀಸ್ ಸಿಬ್ಬಂದಿ
ಕರ್ತವ್ಯ ನಿರ್ವಹಿಸಲು ತೆರಳಿದ್ದ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಿರೀಶ್ ಕುಮಾರ್ ಅವರು ಮೃತಪಟ್ಟಿರುವುದು ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟುಮಾಡಿದೆ. ಇಬ್ಬರು ಮಕ್ಕಳನ್ನು ಹೊಂದಿರುವ ಕುಟುಂಬಕ್ಕೆ ಅವರ ಸಾವು ತುಂಬಲಾರದ ನಷ್ಟವಾಗಿದೆ.
Police constable injured in accident dies
