SUDDILIVE || BHADRAVATHI
11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ-Accused who had been absconding without appearing in court for 11 years arrested
ಭದ್ರಾವತಿ: ಕರ್ನಾಟಕ ಅಬಕಾರಿ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಧಿತನನ್ನು ಗಿರೀಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ವರ್ಷಗಳಿಂದ ಈತ ಘನ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎಲ್‌ಪಿಆರ್ (ಲಾಂಗ್ ಪೆಂಡಿಂಗ್ ರಿಜಿಸ್ಟರ್) ಎಂದು ಘೋಷಿಸಲಾಗಿತ್ತು.
ಈ ಸಂಬಂಧ ಭದ್ರಾವತಿಯ ಘನ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಸಿಸಿ ನಂ. 293/2016ರ ಪ್ರಕರಣದಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.
ನ್ಯಾಯಾಲಯದ ವಾರೆಂಟ್ ಜಾರಿಗೊಳಿಸುವ ಕಾರ್ಯಾಚರಣೆ ಕೈಗೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳ ತಂಡವು, ಹಲವು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಗಿರೀಶ್ ನಾಯ್ಕ್‌ನನ್ನು ಪತ್ತೆಹಚ್ಚಿ ಬಂಧಿಸಿದೆ.
ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.



0 ಕಾಮೆಂಟ್‌ಗಳು