Advertisement

ಬೆಳೆ ಹಾನಿಯಿಂದ ರೈತ ಆತ್ಮಹತ್ಯೆ: ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಬಿ.ವೈ. ವಿಜಯೇಂದ್ರ ಆಗ್ರಹ- Farmer Dies by Suicide Over Crop Losses: B.Y. Vijayendra Demands ₹5 Lakh Compensation for Family

SUDDILIVE || SHIRALKOPPA

ಬೆಳೆ ಹಾನಿಯಿಂದ ರೈತ ಆತ್ಮಹತ್ಯೆ: ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಬಿ.ವೈ. ವಿಜಯೇಂದ್ರ ಆಗ್ರಹ- Farmer Dies by Suicide Over Crop Losses: B.Y. Vijayendra Demands ₹5 Lakh Compensation for Family   
Vijendra, demand

ಶಿರಾಳಕೊಪ್ಪ ಹತ್ತಿರದ ತಾಳಗುಂದ ಗ್ರಾಮದ ಮೃತ ರೈತ ರಮೇಶ್ ಮನೆಗೆ ಶಾಸಕ ಬಿ ವೈ ವಿಜಯೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು.


ಶಿರಾಳಕೊಪ್ಪ: ಬೆಳೆ ಹಾನಿಯಿಂದ ತೀವ್ರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಿಕಾರಿಪುರ ತಾಲೂಕಿನ ತಾಳಗುಂದ ಗ್ರಾಮದ ರೈತ ರಮೇಶ್ ಬಾಸಿಂಗದ (41) ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಕ್ಷಣವೇ ₹5 ಲಕ್ಷ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.

ಭಾನುವಾರ ಮೃತ ರೈತ ರಮೇಶ್ ಬಾಸಿಂಗದ ಅವರ ಮನೆಗೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ, ದುಃಖತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಅವರು, ವೈಯಕ್ತಿಕ ಧನಸಹಾಯವನ್ನೂ ನೀಡಿ, ರೈತನ ಸಾವಿಗೆ ಕಾರಣವಾದ ಪರಿಸ್ಥಿತಿಗಳು ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗತಿಯ ಕುರಿತು ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಅವರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಟೀಕಿಸಿದರು.

ಬರಪೀಡಿತ ತಾಲೂಕುಗಳೆಂದು ಘೋಷಿಸಿದ ನಂತರವೂ ರೈತರ ಖಾತೆಗಳಿಗೆ ಕೇವಲ ₹1,000 ಹಾಗೂ ₹1,500 ಪರಿಹಾರ ಹಣ ಜಮೆ ಮಾಡುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ ಅವರು, ಇಷ್ಟು ಅಲ್ಪ ಮೊತ್ತದಿಂದ ರೈತರ ಬದುಕು ಸುಧಾರಿಸಲು ಸಾಧ್ಯವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ರೈತರು ಬೆಳೆದ ಬೆಳೆಗಳಿಗೆ ಹಾನಿಯಾದಾಗ ಅವರಿಗೆ ಸೂಕ್ತ ಪರಿಹಾರ ಹಾಗೂ ಆರ್ಥಿಕ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ, ರೈತರ ಸಂಕಷ್ಟಕ್ಕೆ ಸ್ಪಂದಿಸಿ ಶಾಶ್ವತ ಪರಿಹಾರ ಕಲ್ಪಿಸುವ ಬದಲು ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರಗಾರಿಕೆಯಲ್ಲಿ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು.

ರೈತರು ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರ, ಅವರು ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಅವರ ನೆರವಿಗೆ ಧಾವಿಸಬೇಕು. ಬೆಳೆ ನಷ್ಟ, ಆರ್ಥಿಕ ಸಂಕಷ್ಟ ಹಾಗೂ ಇತರ ಸಮಸ್ಯೆಗಳಿಂದ ರೈತರು ಇಂತಹ ಕಠಿಣ ನಿರ್ಧಾರ ಕೈಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಾರದು. ರೈತರ ಬದುಕಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಳಗುಂದ ಗ್ರಾಮದ ಮೃತ ರೈತ ರಮೇಶ್ ಬಾಸಿಂಗದ ಅವರ ಕುಟುಂಬಕ್ಕೆ ಕನಿಷ್ಠ ₹5 ಲಕ್ಷ ಪರಿಹಾರ ನೀಡುವುದರ ಜತೆಗೆ, ಕುಟುಂಬದ ಜೀವನ ನಿರ್ವಹಣೆಗೆ ಅಗತ್ಯ ನೆರವು ಒದಗಿಸಬೇಕು. ಇಂತಹ ದುರಂತಗಳು ಮರುಕಳಿಸದಂತೆ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ನಿಂಬೆಗೊಂದಿ ಸಿದ್ದಲಿಂಗಪ್ಪ, ಯುವ ಮೋರ್ಚಾ ಅಧ್ಯಕ್ಷ ವೀರಣ್ಣ, ಜಿಲ್ಲಾ ಉಪಾಧ್ಯಕ್ಷ ಬೆಣ್ಣೆ ಪ್ರವೀಣ್ ಹಾಗೂ ಮಾರವಳ್ಳಿ ಅಶೋಕ್ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Farmer Dies by Suicide Over Crop Losses: B.Y. Vijayendra Demands ₹5 Lakh Compensation for Family 

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು