SUDDILIVE || SHIVAMOGGA
ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಿಹಿಸುದ್ದಿ; ಬಲದಂಡೆ, ಎಡದಂಡೆ ನಾಲೆಗಳಿಗೆ 10 ದಿನ ನೀರು ಹರಿಸಲು ನಿರ್ಧಾರ- Good news for farmers in Bhadra Achukattu area; Decision to release water to right bank and left bank canals for 10 days
ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಹಾಗೂ ನೀರಿನ ಕೊರತೆಯಿಂದಾಗಿ ಭತ್ತದ ಬೆಳೆ ಮತ್ತು ಅಡಿಕೆ, ತೆಂಗಿನ ತೋಟಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ರೈತರ ಮನವಿಗೆ ಸರ್ಕಾರ ಸ್ಪಂದಿಸಿದೆ. ಭದ್ರಾ ಜಲಾಶಯದ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ತಲಾ 10 ದಿನಗಳ ಕಾಲ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಹೆಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ.
ಈ ಕುರಿತು ವಿಡಿಯೋ ಹಂಚಿಕೊಂಡಿರುವ ಅವರು, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರು ಮುಖ್ಯಮಂತ್ರಿ, ನೀರಾವರಿ ಸಚಿವ ಚೆಲುವರಾಯಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ ನೀರು ಹರಿಸುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಅದರಂತೆ ಭದ್ರಾ ಬಲದಂಡೆ ನಾಲೆಯಲ್ಲಿ 10 ದಿನಗಳ ಕಾಲ ಪ್ರತಿದಿನ 1,500 ಕ್ಯೂಸೆಕ್ ಹಾಗೂ ಎಡದಂಡೆ ನಾಲೆಯಲ್ಲಿ 10 ದಿನಗಳ ಕಾಲ ಪ್ರತಿದಿನ 500 ಕ್ಯೂಸೆಕ್ ನೀರು ಹರಿಸಲು ತೀರ್ಮಾನಿಸಲಾಗಿದೆ. ಇದರೊಂದಿಗೆ ಗೋಂದಿ ನಾಲೆಗೂ ನೀರು ಹರಿಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಬಸವರಾಜಪ್ಪ ಮಾಹಿತಿ ನೀಡಿದ್ದಾರೆ.
ಕಳೆದ ಒಂದು ವಾರದಿಂದ ಶಾಸಕರು ಹಾಗೂ ರೈತರ ಪರವಾಗಿ ನೀರು ಹರಿಸುವಂತೆ ನಿರಂತರ ಪ್ರಯತ್ನ ನಡೆಸಲಾಗುತ್ತಿತ್ತು. ಇದೀಗ ಸರ್ಕಾರ ನೀರು ಹರಿಸುವ ನಿರ್ಧಾರ ಕೈಗೊಂಡಿರುವುದು ರೈತರಿಗೆ ಸಮಾಧಾನ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಭಾನುವಾರ ರಜೆ ಇರುವುದರಿಂದ ಸೋಮವಾರ ಅಧಿಕೃತ ಆದೇಶದ ಪ್ರತಿ ಹೊರಬೀಳುವ ನಿರೀಕ್ಷೆಯಿದೆ. ಆದೇಶದ ಪ್ರತಿ ಲಭ್ಯವಾದ ಬಳಿಕ ನೀರು ಹರಿಸುವ ಕುರಿತು ಅಧಿಕೃತ ಮಾಹಿತಿ ಸ್ಪಷ್ಟವಾಗಲಿದೆ ಎಂದು ಹೇಳಿದ್ದಾರೆ.
ಭದ್ರಾ ಜಲಾಶಯದಲ್ಲಿ ಪ್ರಸ್ತುತ 172.3 ಅಡಿ ನೀರು ಸಂಗ್ರಹವಿದೆ, ರೈತರ ಸಂಕಷ್ಟಕ್ಕೆ ಸ್ಪಂದಿಸಿ ನೀರು ಹರಿಸಲು ನಿರ್ಧಾರ ಕೈಗೊಂಡ ಮುಖ್ಯಮಂತ್ರಿ, ನೀರಾವರಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರಿಗೆ ರೈತರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.
Good news for farmers in Bhadra Achukattu area; Decision to release water to right bank and left bank canals for 10 days



0 ಕಾಮೆಂಟ್ಗಳು