SUDDILIVE || SHIVAMOGGA
ಗೋವಿಂದಪುರ ಆಶ್ರಯ ಮನೆಗಳ ವಿತರಣೆ: 32 ಫಲಾನುಭವಿಗಳಿಗೆ ಮನೆಗಳ ಕೀ ಹಸ್ತಾಂತರ
ಉಳಿದ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ₹5 ಕೋಟಿ ಬಿಡುಗಡೆ; ನ.15ರಂದು ಫಲಾನುಭವಿಗಳಿಂದ ಕಾಮಗಾರಿ ಪರಿಶೀಲನೆ – ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಗೋವಿಂದಪುರ ಆಶ್ರಯ ಬಡಾವಣೆಯಲ್ಲಿ ಮನೆಗಳಿಗಾಗಿ ಹಣ ಪಾವತಿಸಿ ಒಂಬತ್ತು ವರ್ಷಗಳಿಂದ ಕಾಯುತ್ತಿದ್ದ ಫಲಾನುಭವಿಗಳಿಗೆ ಕೊನೆಗೂ ಮನೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಈಗಾಗಲೇ 32 ಫಲಾನುಭವಿಗಳಿಗೆ ಮನೆಗಳ ಕೀಗಳನ್ನು ಹಸ್ತಾಂತರಿಸಲಾಗಿದ್ದು, ಉಳಿದ ಮನೆಗಳ ಕಾಮಗಾರಿ ಪೂರ್ಣಗೊಳಿಸಿ ಹಂತ ಹಂತವಾಗಿ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರಭಕ್ತ ಬಳಗದ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವಿಂದಪುರದಲ್ಲಿ ಒಟ್ಟು 3 ಸಾವಿರ ಆಶ್ರಯ ನಿವೇಶನಗಳನ್ನು ಹಂಚಿಕೆ ಮಾಡಬೇಕಾಗಿದೆ. ಈ ಪೈಕಿ ಸುಮಾರು 450 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ. ಆದರೆ, ಮನೆಗಳಿಗಾಗಿ ಹಣ ಪಾವತಿಸಿ ಒಂಬತ್ತು ವರ್ಷಗಳು ಕಳೆದರೂ ಅನೇಕ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಟ್ಟಿರಲಿಲ್ಲ. ಇದರಿಂದಾಗಿ ಫಲಾನುಭವಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು ಎಂದರು.
ಈ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಅಕ್ಟೋಬರ್ 27ರಂದು ರಾಷ್ಟ್ರಭಕ್ತ ಬಳಗದ ವತಿಯಿಂದ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರು ನೀಡಿದ ಭರವಸೆಯಂತೆ ನವೆಂಬರ್ 11ರಂದು 32 ಫಲಾನುಭವಿಗಳಿಗೆ ಮನೆಗಳ ಕೀಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆದಿದೆ. ಇದರಿಂದಾಗಿ ಹಲವು ವರ್ಷಗಳಿಂದ ಮನೆಗಾಗಿ ಕಾಯುತ್ತಿದ್ದವರಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ ಎಂದು ಹೇಳಿದರು.
ಉಳಿದ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳ ಆದೇಶದಂತೆ ಮಹಾನಗರ ಪಾಲಿಕೆ ಆಯುಕ್ತರು ಈಗಾಗಲೇ ಗುತ್ತಿಗೆದಾರರಿಗೆ 5 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ನವೆಂಬರ್ 15ರಂದು ಉಳಿದ ಫಲಾನುಭವಿಗಳನ್ನು ಗೋವಿಂದಪುರಕ್ಕೆ ಕರೆದೊಯ್ದು ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ನೇರವಾಗಿ ಪರಿಶೀಲಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.
ಆಯುಕ್ತರು ನೀಡಿರುವ ಭರವಸೆಯಂತೆ ಮುಂದಿನ 10 ದಿನಗಳೊಳಗೆ 74 ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತದೆ. ಜನವರಿಯೊಳಗೆ 600 ನಿವೇಶನಗಳನ್ನು ವಿತರಿಸುವುದಾಗಿಯೂ ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರಭಕ್ತ ಬಳಗ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಲು ಕ್ರಮ ಕೈಗೊಂಡ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ಒಟ್ಟು 3 ಸಾವಿರ ನಿವೇಶನಗಳ ಪೈಕಿ ವಿತರಣೆ ಪ್ರಕ್ರಿಯೆ ಪೂರ್ಣಗೊಂಡ ನಂತರವೂ ಸುಮಾರು 1,800 ನಿವೇಶನಗಳು ಉಳಿಯಲಿವೆ. ಅವುಗಳ ಅಭಿವೃದ್ಧಿ ಮತ್ತು ಹಂಚಿಕೆಗೆ ಕ್ರಮ ಕೈಗೊಳ್ಳದಿದ್ದರೆ ರಾಷ್ಟ್ರಭಕ್ತ ಬಳಗದ ವತಿಯಿಂದ ಮತ್ತೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಮುಚ್ಚಲು ಬಿಡುವುದಿಲ್ಲ
ಶಿವಮೊಗ್ಗ ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತಗೊಳ್ಳುವ ಆತಂಕದ ಬಗ್ಗೆಯೂ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣ ಮುಚ್ಚಲು ಅವಕಾಶ ನೀಡುವುದಿಲ್ಲ. ವಿಮಾನ ನಿಲ್ದಾಣ ಆರಂಭವಾಗಿ ಕೆಲವೇ ವರ್ಷಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸುವ ಪರಿಸ್ಥಿತಿ ಎದುರಾಗಿರುವುದು ದುರದೃಷ್ಟಕರ. ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಇಂತಹ ಮಹತ್ವದ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ಪಕ್ಷಗಳ ಮುಖಂಡರು ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಹೇಳಿದರು.
ಈಗಾಗಲೇ ಎರಡು ವಿಮಾನಯಾನ ಸಂಸ್ಥೆಗಳು ಶಿವಮೊಗ್ಗದಿಂದ ತಮ್ಮ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿವೆ. ನವೆಂಬರ್ 21ರಿಂದ ಮತ್ತೊಂದು ವಿಮಾನಯಾನ ಸಂಸ್ಥೆಯೂ ಬುಕ್ಕಿಂಗ್ ಸ್ಥಗಿತಗೊಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹೀಗಾದರೆ ಶಿವಮೊಗ್ಗ ವಿಮಾನ ನಿಲ್ದಾಣದ ಭವಿಷ್ಯವೇ ಪ್ರಶ್ನಾರ್ಥಕವಾಗಲಿದೆ ಎಂದರು.
ಈ ವಿಚಾರದಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು, ರಾಜಕೀಯೇತರ ಸಂಘ-ಸಂಸ್ಥೆಗಳು ಹಾಗೂ ವಿಶೇಷವಾಗಿ ವಾಣಿಜ್ಯೋದ್ಯಮಿಗಳ ಸಂಘಟನೆ ಛೇಂಬರ್ ಆಫ್ ಕಾಮರ್ಸ್ ಒಟ್ಟಾಗಿ ಪ್ರಯತ್ನಿಸಬೇಕು. ಎಲ್ಲರೂ ಪಕ್ಷಭೇದ ಮರೆತು ಒಂದೇ ವೇದಿಕೆಯಲ್ಲಿ ಹೋರಾಟ ನಡೆಸಿದರೆ ವಿಮಾನ ನಿಲ್ದಾಣ ಸುಗಮವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತಗೊಂಡರೆ ನೂರಾರು ಕೋಟಿ ರೂಪಾಯಿ ಸಾರ್ವಜನಿಕ ಹಣ ವ್ಯರ್ಥವಾಗಲಿದೆ. ಈಗಾಗಲೇ ನಿರ್ಮಾಣವಾಗಿರುವ ವಿಮಾನ ನಿಲ್ದಾಣ ನಿರ್ವಹಣೆಯಿಲ್ಲದೆ ಅಸ್ಥಿಪಂಜರದಂತಾಗುವುದನ್ನು ತಡೆಯಬೇಕಿದೆ. ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ವಿಮಾನ ನಿಲ್ದಾಣ ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರಭಕ್ತ ಬಳಗ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧವಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರಭಕ್ತ ಬಳಗದ ಪ್ರಮುಖರಾದ ಬಾಲು, ಮೋಹನ್ ಜಾಧವ್, ಶಿವಾಜಿ, ನಾಗಣ್ಣ, ಎಂ.ರಾಜು, ಗೋವಿಂದಣ್ಣ, ಆನಂದ್, ಕುಬೇರಪ್ಪ ಮತ್ತಿತರರು ಉಪಸ್ಥಿತರಿದ್ದರು.



0 ಕಾಮೆಂಟ್ಗಳು