SUDDILIVE || SAGARA

ಹೆಬ್ಬೋಡಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: 23 ವರ್ಷದ ಯುವಕ ಸಾವು-23-Year-Old Youth Dies After Bike Crashes Into Electric Pole Near Hebbodi, Anandapura   

Road, accident


ಸಾಗರ (ಆನಂದಪುರ): ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 23 ವರ್ಷದ ಯುವಕ ಮೃತಪಟ್ಟಿರುವ ದಾರುಣ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಹೆಬ್ಬೋಡಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.

ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಶಿರಾಳಗಿ ಗ್ರಾಮದ .ನಿವಾಸಿ ಗಣೇಶ್ (23) ಎಂದು ಗುರುತಿಸಲಾಗಿದೆ.

ಸಂಬಂಧಿಕರ ಮನೆಗೆ ಬಂದಿದ್ದ ಗಣೇಶ್, ಆಡೂರಿನಿಂದ ಆನಂದಪುರ ಮಾರ್ಗವಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೆಬ್ಬೋಡಿ ಸಮೀಪ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಬೈಕ್ ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಮಾರ್ಗಮಧ್ಯೆಯೇ ಗಣೇಶ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಕರ ಮನೆಗೆ ಬಂದಿದ್ದ ಯುವಕನ ಬದುಕು ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿರುವುದು ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ತೀವ್ರ ದುಃಖ ಮೂಡಿಸಿದೆ.

ಘಟನೆಗೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್ ಪರಿಶೀಲನೆ ನಡೆಸುತ್ತಿದ್ದಾರೆ.

23-Year-Old Youth Dies After Bike Crashes Into Electric Pole Near Hebbodi, Anandapura