Advertisement

ಹೊಸನಗರದಲ್ಲಿ ಪ್ರಜಾಸೇವಾ ಆಂದೋಲನಕ್ಕೆ ಭರ್ಜರಿ ಸ್ಪಂದನೆ: 300ಕ್ಕೂ ಹೆಚ್ಚು ಅರ್ಜಿ ಸ್ವೀಕಾರ; ಬಾಕಿ ಅರ್ಜಿ ವಿಲೇವಾರಿಗೆ ಸಚಿವ ಮಧು ಬಂಗಾರಪ್ಪ ಸೂಚನೆ-Hosanagar: Praja Seva Campaign Receives Overwhelming Response; More Than 300 Applications Received, Minister Madhu Bangarappa Directs Officials to Clear Pending Applications

 SUDDILIVE || SHIVAMOGGA

ಹೊಸನಗರದಲ್ಲಿ ಪ್ರಜಾಸೇವಾ ಆಂದೋಲನಕ್ಕೆ ಭರ್ಜರಿ ಸ್ಪಂದನೆ: 300ಕ್ಕೂ ಹೆಚ್ಚು ಅರ್ಜಿ ಸ್ವೀಕಾರ; ಬಾಕಿ ಅರ್ಜಿ ವಿಲೇವಾರಿಗೆ ಸಚಿವ ಮಧು ಬಂಗಾರಪ್ಪ ಸೂಚನೆ-Hosanagar: Praja Seva Campaign Receives Overwhelming Response; More Than 300 Applications Received, Minister Madhu Bangarappa Directs Officials to Clear Pending Applications
Praja, seva

ಶಿವಮೊಗ್ಗ: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಿ, ಆಡಳಿತವೇ ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಿದ್ದ ಹೊಸನಗರ ತಾಲೂಕು ಮಟ್ಟದ 'ಪ್ರಜಾಸೇವಾ ಆಂದೋಲನ'ಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಆಂದೋಲನದಲ್ಲಿ 300ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ಪ್ರತಿಯೊಂದು ಅರ್ಜಿಯನ್ನು ಜವಾಬ್ದಾರಿಯಿಂದ ಪರಿಶೀಲಿಸಿ ತ್ವರಿತವಾಗಿ ವಿಲೇವಾರಿ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶನಿವಾರ ಹೊಸನಗರದ ಈಡಿಗರ ಭವನದಲ್ಲಿ ನಡೆದ ಪ್ರಜಾಸೇವಾ ಆಂದೋಲನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಆಡಳಿತ ಯಂತ್ರ ಮತ್ತು ಅಧಿಕಾರಿಗಳ ಸಹಕಾರದೊಂದಿಗೆ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಣ್ಣಪುಟ್ಟ ಕೆಲಸಗಳಿಗಾಗಿ ರೈತರು, ವೃದ್ಧರು, ವಿಕಲಚೇತನರು ಹಾಗೂ ಬಡವರು ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಅಹವಾಲಿಗೂ ಅಧಿಕಾರಿಗಳು ಜವಾಬ್ದಾರಿಯಿಂದ ಸ್ಪಂದಿಸಬೇಕು. ಯಾವುದೇ ಸೂಕ್ತ ಕಾರಣವಿಲ್ಲದೆ ಅರ್ಜಿಗಳನ್ನು ಬಾಕಿ ಉಳಿಸಿಕೊಂಡರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಕಲಚೇತನರು, ವಯೋವೃದ್ಧರು ಹಾಗೂ ಮಕ್ಕಳು ಸಭೆಯ ಯಾವುದೇ ಸಂದರ್ಭದಲ್ಲಿ ವೇದಿಕೆಗೆ ಬಂದು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅವರು ಸರತಿಯಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ತಿಳಿಸಿದರು.



ಆನ್‌ಲೈನ್ ಅರ್ಜಿಗಳಿಗೂ ಆದ್ಯತೆ

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಜನರ ಸಮಸ್ಯೆಗಳನ್ನು ಪರಿಹರಿಸಲು ಅವರು ಸರ್ಕಾರಿ ಕಚೇರಿಗಳಿಗೆ ಅಲೆಯುವ ಬದಲು ಆಡಳಿತವೇ ಜನರ ಬಳಿಗೆ ತೆರಳಿ ಕೆಲಸ ಮಾಡಿಕೊಡಬೇಕು ಎಂಬ ಉದ್ದೇಶದಿಂದ ಪ್ರಜಾಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಆನ್‌ಲೈನ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು. ಅರ್ಜಿಗಳ ಸ್ವರೂಪಕ್ಕೆ ಅನುಗುಣವಾಗಿ ತಹಶೀಲ್ದಾರ್, ಉಪವಿಭಾಗಾಧಿಕಾರಿ, ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಅಥವಾ ಪೊಲೀಸ್ ವರಿಷ್ಠಾಧಿಕಾರಿಗಳ ಹಂತಕ್ಕೆ ರವಾನಿಸಿ ಕ್ರಮ ಕೈಗೊಳ್ಳಲಾಗುವುದು. ನಿಗದಿತ ಅವಧಿಯೊಳಗೆ ಅರ್ಜಿದಾರರಿಗೆ ಅರ್ಜಿಯ ಸ್ಥಿತಿ ಹಾಗೂ ವಿಲೇವಾರಿ ಕುರಿತು ಮಾಹಿತಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳು ತಾವು ರಾಜ್ಯದ ಮುಖ್ಯಮಂತ್ರಿಯಷ್ಟೇ ಅಲ್ಲ, ರಾಜ್ಯದ ಒಬ್ಬ ಪ್ರಜಾಸೇವಕ ಎಂದು ಹೇಳಿರುವುದನ್ನು ಸ್ಮರಿಸಿದ ಅವರು, ತಾವೂ ತಾಲೂಕಿನ ಜನರ ಸೇವಕರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಜನರ ಬೇಡಿಕೆ ಮತ್ತು ಅಹವಾಲುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಆಂದೋಲನ ಮಹತ್ವದ ಹೆಜ್ಜೆಯಾಗಿದೆ ಎಂದರು.

ಭೂ ಗ್ಯಾರಂಟಿ ಯೋಜನೆಯಡಿ ಹಕ್ಕುಪತ್ರ ವಿತರಣೆ

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿ ಯೋಜನೆಯನ್ನು ಆರನೇ ಗ್ಯಾರಂಟಿಯಾಗಿ ಜಾರಿಗೆ ತರಲಾಗಿದೆ. ಈಗಾಗಲೇ ಸಾಗರದಲ್ಲಿ ಸುಮಾರು 4,000 ಹಕ್ಕುಪತ್ರಗಳನ್ನು ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೊಸನಗರದಲ್ಲಿಯೂ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ತಾಲೂಕು ಕೇಂದ್ರಗಳು, ಪಟ್ಟಣಗಳು ಹಾಗೂ ನಗರ ಪ್ರದೇಶಗಳಲ್ಲಿನ ದೊಡ್ಡ ಬಡಾವಣೆಗಳ ನಿವಾಸಿಗಳಿಗೂ ಹಕ್ಕುಪತ್ರ ದೊರೆಯಬೇಕು. ಡಿಡಿಎಲ್‌ಆರ್, ಬಿಎಲ್‌ಒ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು, ಬಾಕಿ ಉಳಿದಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ರೈತರು ಮತ್ತು ನಾಗರಿಕರಿಗೆ ಹಕ್ಕುಪತ್ರ ನೀಡಬೇಕು. ಯಾವುದೇ ಅರ್ಜಿಗಳು ಅನಗತ್ಯವಾಗಿ ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕ್ರಷರ್, ಬಗರ್ ಹುಕುಂ, ಹಕ್ಕುಪತ್ರ ಸಮಸ್ಯೆಗಳ ಬಗ್ಗೆ ದೂರು

ಸಭೆಯಲ್ಲಿ ಸಾರ್ವಜನಿಕರು ಹಲವು ಪ್ರಮುಖ ಸಮಸ್ಯೆಗಳನ್ನು ಸಚಿವರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರು.

ಟಂಕಬೈಲು ಗ್ರಾಮದ ನಾಗರಾಜ್ ಅವರು ತಮ್ಮ ಮನೆಯ ಸಮೀಪ ರಾತ್ರಿ 9 ಗಂಟೆಯಾದರೂ ಜಲ್ಲಿ ಕ್ರಷರ್ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಭೆಗೆ ಗೈರಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ನೋಟಿಸ್ ನೀಡುವಂತೆ ಸಚಿವರು ಸೂಚಿಸಿದರು.

ಹೆಬ್ಬಿಗೆ ಗ್ರಾಮದ ರಾಮಪ್ಪ ಅವರು ಮೂರು ಎಕರೆ ಬಗರ್ ಹುಕುಂ ಜಮೀನಿಗೆ ಹಕ್ಕುಪತ್ರ ನೀಡುವಂತೆ ಮನವಿ ಸಲ್ಲಿಸಿದರು. ಕಲ್ಲೋಡಿ ಹಬ್ಬಿಗಲ್ ಗ್ರಾಮದ ಇಟ್ಟಕ್ಕಿ ಶ್ರೀನಿವಾಸ್ ಅವರು 1.20 ಗುಂಟೆ ಬಗರ್ ಹುಕುಂ ಜಮೀನಿಗೆ ಹಕ್ಕುಪತ್ರ ದೊರೆತು ಏಳು ವರ್ಷಗಳಾದರೂ ಖಾತೆ ಮತ್ತು ಪಹಣಿ ಆಗಿಲ್ಲ ಎಂದು ಸಮಸ್ಯೆ ಪರಿಹರಿಸುವಂತೆ ಕೋರಿದರು.

ಮಸರೂರು ಗ್ರಾಮದ ಪರಿಶಿಷ್ಟ ಜಾತಿಯ ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಜೇನಮ್ಮ ಅವರು ಸರ್ವೆ ನಂ.4ರಲ್ಲಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, 1982ರಲ್ಲಿಯೇ ಜಮೀನು ತಮ್ಮ ಹೆಸರಿಗೆ ಮಂಜೂರಾಗಿದ್ದರೂ ಈವರೆಗೆ ಹಕ್ಕುಪತ್ರ ನೀಡಿಲ್ಲ. ಹಕ್ಕುಪತ್ರ ನೀಡಿ ಖಾತೆ ಮತ್ತು ಪಹಣಿ ಮಾಡಿಸಿಕೊಡುವಂತೆ ಮನವಿ ಸಲ್ಲಿಸಿದರು.

ನಗರ ಬಸ್ ನಿಲ್ದಾಣದ ಕಾಮಗಾರಿ ವಿಳಂಬವಾಗುತ್ತಿದ್ದು, ಕಾಮಗಾರಿ ಆರಂಭಿಸಲು ಅಡ್ಡಿಪಡಿಸಲಾಗುತ್ತಿದೆ. ಆದಷ್ಟು ಬೇಗ ಕಾಮಗಾರಿ ಆರಂಭಿಸಬೇಕು ಎಂದು ನಿತಿನ್ ಸೇರಿದಂತೆ ಇತರರು ಮನವಿ ಸಲ್ಲಿಸಿದರು.

ಮಾರುತಿಪುರದ ಇಂದ್ರೇಶ್ ಅವರು ಸರ್ವೆ ನಂ.27ರಲ್ಲಿ 94ಸಿ ಹಕ್ಕು ನೀಡುವ ವಿಚಾರದಲ್ಲಿ ಅರಣ್ಯಾಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದರು.

ಹೊಸನಗರ ತಾಲೂಕಿನ ಗಂಗನಕೊಪ್ಪ ಗ್ರಾಮದ ಸರ್ವೆ ನಂ.13ರಲ್ಲಿರುವ ಸುಮಾರು ಎರಡು ಕೋಟಿ ರೂ. ಮೌಲ್ಯದ ಸರ್ಕಾರಿ ಜಾಗವನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಕೆಲವರು ಕಬಳಿಸಿದ್ದಾರೆ ಎಂದು ಗುಡ್ಡಿಕೊಪ್ಪ ಗ್ರಾಮದ ನಿವಾಸಿಗಳು ಆರೋಪಿಸಿ ದೂರು ನೀಡಿದರು.

ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋಳ್ಗುಡ್ಡೆ ಗ್ರಾಮದ ರಾಜಪ್ಪ ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ಕಳೆದ ಸುಮಾರು 10 ವರ್ಷಗಳಿಂದ ಹೊಂದಿದ್ದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಪಡಿಸಿ ಎಪಿಎಲ್ ಕಾರ್ಡ್ ನೀಡಲಾಗಿದೆ. ಇದರಿಂದ ತೊಂದರೆಯಾಗಿದ್ದು, ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.

ಕೆಪಿಎಸ್ ಶಾಲೆ, ರಸ್ತೆ, ನೀರು ಸೇರಿದಂತೆ ಹಲವು ಸಮಸ್ಯೆಗಳ ಅಹವಾಲು

ಹೊಸನಾಡು ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು ಮಾಡುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದರು. ಹೊಸನಗರ ಸರ್ಕಾರಿ ಪ್ರೌಢಶಾಲೆಯನ್ನು ಕೆಪಿಎಸ್ ಶಾಲೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಮೇಶ್ ಮನವಿ ಮಾಡಿದರು.

ಇದಲ್ಲದೆ, ಮಂಗಗಳ ಹಾವಳಿ ನಿಯಂತ್ರಿಸಬೇಕು, ರಸ್ತೆ ಜಾಗದಲ್ಲಿ ನಿರ್ಮಿಸಿರುವ ಮನೆ ತೆರವುಗೊಳಿಸಬೇಕು, ವಿದ್ಯುತ್ ಸಂಪರ್ಕ ಕಲ್ಪಿಸಬೇಕು, ಸಾರ್ವಜನಿಕರ ಓಡಾಟಕ್ಕೆ ದಾರಿ ಬಿಡಿಸಿಕೊಡಬೇಕು ಎಂಬ ಬೇಡಿಕೆಗಳು ಸಲ್ಲಿಕೆಯಾದವು.

ನೀರು ಸರಬರಾಜು, ಮೆಸ್ಕಾಂ, ರಸ್ತೆ, ವಸತಿ, ಕೆಎಸ್‌ಆರ್‌ಟಿಸಿ, ಆಹಾರ ಮತ್ತು ಆರೋಗ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರು ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

15 ಕೌಂಟರ್‌ಗಳಲ್ಲಿ 300ಕ್ಕೂ ಹೆಚ್ಚು ಅರ್ಜಿ ಸ್ವೀಕಾರ

ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಕಾರ್ಯಕ್ರಮದಲ್ಲಿ ಒಟ್ಟು 15 ಕೌಂಟರ್‌ಗಳನ್ನು ತೆರೆಯಲಾಗಿತ್ತು. ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳ ಮುಂದಿನ ಕ್ರಮಕ್ಕಾಗಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಎಂಎಡಿಬಿ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಶಿಮುಲ್ ಅಧ್ಯಕ್ಷ ವಿದ್ಯಾಧರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರ, ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಅನ್ನಪೂರ್ಣ ಮತ್ತು ಸುಜಾತ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಹೊಸನಗರ ತಹಶೀಲ್ದಾರ್ ಭರತ್ ರಾಜ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Hosanagar: Praja Seva Campaign Receives Overwhelming Response; More Than 300 Applications Received, Minister Madhu Bangarappa Directs Officials to Clear Pending Applications

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು