SUDDILIVE || SHIVAMOGGA
ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಾಲು, ಬಸ್ ಪ್ರಯಾಣ ದರ ಹೆಚ್ಚಳ ಹಿಂಪಡೆಯಲು ಜೆಡಿಎಸ್ ಆಗ್ರಹ-JDS demands rollback of hike in prices of essential commodities, milk, bus fares
ಸರ್ಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಯ ಎಚ್ಚರಿಕೆ
ಶಿವಮೊಗ್ಗ: ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ, ಕೆಎಸ್ಆರ್ಟಿಸಿ ಸೇರಿದಂತೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳ ಹಾಗೂ ಬರ ಪರಿಸ್ಥಿತಿಯಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆಗಳನ್ನು ಹಿಂಪಡೆಯಬೇಕು ಎಂದು ಶಿವಮೊಗ್ಗ ಜಿಲ್ಲಾ ಜನತಾದಳ (ಜಾತ್ಯತೀತ) ಡಿಸಿಯವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಈ ಕುರಿತು ಶಿವಮೊಗ್ಗ ಜಿಲ್ಲಾ ಜನತಾದಳ (ಜಾತ್ಯತೀತ) ಅಧ್ಯಕ್ಷ ಎನ್. ರಾಮಕೃಷ್ಣ ಅವರ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ರಾಜ್ಯದಲ್ಲಿ ಹಾಲು, ಮೊಸರು, ತುಪ್ಪ, ಬೆಣ್ಣೆ, ಪನೀರ್ ಸೇರಿದಂತೆ ವಿವಿಧ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗಿರುವುದರಿಂದ ಸಾಮಾನ್ಯ ಕುಟುಂಬಗಳ ಮಾಸಿಕ ವೆಚ್ಚ ಹೆಚ್ಚಾಗಿದೆ. ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯ ಪರಿಣಾಮವಾಗಿ ಹೋಟೆಲ್ಗಳು, ಖಾನಾವಳಿಗಳು ಹಾಗೂ ಆಹಾರ ವಿತರಕರು ತಮ್ಮ ಆಹಾರ ಪದಾರ್ಥಗಳ ಬೆಲೆಯನ್ನೂ ಹೆಚ್ಚಿಸುವಂತಾಗಿದೆ. ಇದರಿಂದ ಹೊರಗಡೆ ಆಹಾರ ಸೇವಿಸುವ ಗ್ರಾಹಕರಿಗೂ ಹೆಚ್ಚುವರಿ ಹೊರೆ ಬೀಳುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದರ ಜತೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಹಾಗೂ ಗ್ರಾಮೀಣ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಉತ್ಪಾದನೆಯಲ್ಲಿ ಕುಸಿತ, ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆ ಉಂಟಾಗಿದೆ. ಈ ಪರಿಸ್ಥಿತಿಯ ಪರಿಣಾಮವಾಗಿ ಅಕ್ಕಿ, ಸಕ್ಕರೆ, ಬೇಳೆಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳು ಜೀವನ ನಿರ್ವಹಣೆ ಮಾಡಲು ಕಷ್ಟಪಡುತ್ತಿವೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ಇದೇ ವೇಳೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ವಿವಿಧ ರಸ್ತೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 30ರ ವರೆಗೆ ಹೆಚ್ಚಿಸಿರುವುದು ದಿನನಿತ್ಯ ಪ್ರಯಾಣಿಸುವ ಕಾರ್ಮಿಕರು, ವಿದ್ಯಾರ್ಥಿಗಳು, ನೌಕರರು, ಹಿರಿಯ ನಾಗರಿಕರು ಹಾಗೂ ಸಾಮಾನ್ಯ ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿದೆ. ಸಾರ್ವಜನಿಕ ಸಾರಿಗೆ ಜನಸಾಮಾನ್ಯರ ಜೀವನಾಡಿಯಾಗಿದ್ದು, ಪ್ರಯಾಣ ದರ ಹೆಚ್ಚಳದಿಂದ ಕುಟುಂಬಗಳ ಮಾಸಿಕ ಖರ್ಚು ಗಣನೀಯವಾಗಿ ಏರಿಕೆಯಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಯಾಣ ದರ ಹೆಚ್ಚಳದ ಹೊರೆಯನ್ನು ಪ್ರತಿಬಾರಿಯೂ ಶ್ರೀಸಾಮಾನ್ಯರೇ ಭರಿಸಬೇಕು ಎನ್ನುವ ರಾಜ್ಯ ಸರ್ಕಾರದ ನಿಲುವು ಸಮಂಜಸವಲ್ಲ. ಈ ಹೊರೆಯನ್ನು ಸರ್ಕಾರವೇ ಭರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.
ಜೆಡಿಎಸ್ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು:
- ಹಾಲು, ಮೊಸರು, ತುಪ್ಪ, ಬೆಣ್ಣೆ, ಪನೀರ್ ಸೇರಿದಂತೆ ಎಲ್ಲ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆದು, ಮರುಪರಿಶೀಲಿಸಿ ಜನಸಾಮಾನ್ಯರಿಗೆ ಹೊರೆಯಾಗದಂತೆ ಬೆಲೆ ನಿಗದಿಪಡಿಸಬೇಕು.
- ಕೆಎಸ್ಆರ್ಟಿಸಿ ಹಾಗೂ ಇತರೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳವನ್ನು ಹಿಂಪಡೆಯಬೇಕು.
- ಬರಪೀಡಿತ ರೈತರು, ಗ್ರಾಮೀಣ ಕುಟುಂಬಗಳು ಹಾಗೂ ಜಾನುವಾರು ಸಾಕಾಣಿಕೆದಾರರಿಗೆ ವಿಶೇಷ ಪರಿಹಾರ ಕ್ರಮಗಳನ್ನು ಘೋಷಿಸಬೇಕು.
- ಬರಪೀಡಿತ ಗ್ರಾಮಗಳಲ್ಲಿ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸುವುದರ ಜತೆಗೆ ಜಾನುವಾರುಗಳಿಗೆ ಮೇವು ಮತ್ತು ನೀರಿನ ಲಭ್ಯತೆಯನ್ನು ಖಚಿತಪಡಿಸಬೇಕು.
- ಅಕ್ಕಿ, ಸಕ್ಕರೆ, ಬೇಳೆಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು.
- ಬಡವರು, ಕೆಳ ಮಧ್ಯಮ ವರ್ಗ ಹಾಗೂ ಮಧ್ಯಮ ವರ್ಗದ ಜನರ ಹಿತಾಸಕ್ತಿ ಕಾಪಾಡಲು ಪರಿಣಾಮಕಾರಿ ಬೆಲೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು.
ಆಹಾರ ಪದಾರ್ಥಗಳ ಬೆಲೆ ಏರಿಕೆ, ಹಾಲಿನ ಉತ್ಪನ್ನಗಳ ದರ ಹೆಚ್ಚಳ, ಬಸ್ ಪ್ರಯಾಣ ದರ ಹೆಚ್ಚಳ ಹಾಗೂ ಬರ ಪರಿಸ್ಥಿತಿಯಿಂದ ಉಂಟಾಗಿರುವ ಸಂಕಷ್ಟಗಳು ಒಟ್ಟಾಗಿ ಜನಸಾಮಾನ್ಯರ ಖರೀದಿ ಸಾಮರ್ಥ್ಯವನ್ನು ಕುಗ್ಗಿಸಿವೆ. ಜನರ ಮೂಲಭೂತ ಅಗತ್ಯಗಳನ್ನೇ ಪೂರೈಸಿಕೊಳ್ಳಲು ಕಷ್ಟವಾಗುತ್ತಿರುವ ಸಂದರ್ಭದಲ್ಲಿ ಸರ್ಕಾರ ಜನಪರ ನಿಲುವು ತಳೆದು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
ಸರ್ಕಾರ ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಬಸ್ ಪ್ರಯಾಣ ದರ ಹೆಚ್ಚಳವನ್ನು ಹಿಂಪಡೆಯಲು ವಿಫಲವಾದರೆ, ಜನತಾದಳ (ಜಾತ್ಯತೀತ) ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎನ್. ರಾಮಕೃಷ್ಣ ಎಚ್ಚರಿಕೆ ನೀಡಿದ್ದಾರೆ. ಮನವಿ ಸಲ್ಲಿಸುವ ವೇಳೆ ಶಾಸಕಿ ಶಾರದ ಪೂರ್ಯನಾಯ್ಕ್, ಜೆಡಿಎಸ್ ಕೋರ್ ಕಮಿಟಿ ಸದಸ್ಯ ಮತ್ತು ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್, ತ್ಯಾಗರಾಜ್, ದೀಪಕ್ ಸಿಂಗ್, ದಯಾನಂದ್ ಮೊದಲಾದವರು ಉಪಸ್ಥಿತರಿದ್ದರು.



0 ಕಾಮೆಂಟ್ಗಳು