SUDDILIVE || SHIVAMOGGA
ಶಿವಮೊಗ್ಗದ ಏರ್ ಪೋರ್ಟ್ ವಿಚಾರದಲ್ಲಿ ಗುಡ್ ನ್ಯೂಸ್ ಹಂಚಿಕೊಂಡ ಸಂಸದ-MP shares good news regarding Shimoga airport
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ ಮೂಲಕ ವಿಮಾನಯಾನ ಸೇವೆ ವಿಸ್ತರಣೆಯಾಗುವ ನಿರೀಕ್ಷೆ ಮತ್ತಷ್ಟು ಗಟ್ಟಿಯಾಗಿದೆ. ಕೇಂದ್ರ ಸರ್ಕಾರದ ಉಡಾನ್ (UDAN) 6.0 ಯೋಜನೆಯ ಟೆಂಡರ್ ಪಟ್ಟಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಸೇರ್ಪಡೆಯಾಗಿದ್ದು, ಇದು ಜಿಲ್ಲೆಯ ವಿಮಾನಯಾನ ಕ್ಷೇತ್ರಕ್ಕೆ ಸಿಹಿ ಸುದ್ದಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತತ ಪ್ರಯತ್ನಗಳ ಫಲವಾಗಿ ಉಡಾನ್ ಯೋಜನೆಯಡಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅವಕಾಶ ದೊರೆತಿದೆ. ಉಡಾನ್ 6.0 ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಡಿಸೆಂಬರ್ 30 ಅಥವಾ 31 ಕೊನೆಯ ದಿನಾಂಕವಾಗಿ ನಿಗದಿಯಾಗಿದೆ. ಈ ಬಾರಿ ಟೆಂಡರ್ನಲ್ಲಿ ನಿರ್ದಿಷ್ಟ ವಿಮಾನಯಾನ ಮಾರ್ಗಗಳನ್ನು ಮೊದಲೇ ನಿಗದಿಪಡಿಸಿಲ್ಲ. ವಿಮಾನಯಾನ ಸಂಸ್ಥೆಗಳು ತಾವು ನಡೆಸುವ ಕಾರ್ಯಸಾಧು ಸಮೀಕ್ಷೆಯ ಆಧಾರದ ಮೇಲೆ ಯಾವ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭಿಸಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳಲು ಮುಕ್ತ ಅವಕಾಶ ನೀಡಲಾಗಿದೆ ಎಂದು ವಿವರಿಸಿದರು.
ಫೆಬ್ರವರಿ–ಮಾರ್ಚ್ವರೆಗೆ ಟೆಂಡರ್ ಪ್ರಕ್ರಿಯೆ
ಟೆಂಡರ್ ಪ್ರಕ್ರಿಯೆ ಅಂತಿಮಗೊಳ್ಳಲು ಫೆಬ್ರವರಿ ಅಥವಾ ಮಾರ್ಚ್ವರೆಗೆ ಅಂದಾಜು ಎರಡು ಮೂರು ತಿಂಗಳ ಕಾಲಾವಕಾಶ ಬೇಕಾಗಬಹುದು. ಈ ಮಧ್ಯಂತರ ಅವಧಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಈಗಿರುವ ವಿಮಾನಯಾನ ಸೇವೆ ಸ್ಥಗಿತಗೊಳ್ಳದಂತೆ ರಾಜ್ಯ ಸರ್ಕಾರ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ವಿಶೇಷವಾಗಿ ಶಿವಮೊಗ್ಗ–ಬೆಂಗಳೂರು ಅಥವಾ ಶಿವಮೊಗ್ಗ–ಹೈದರಾಬಾದ್ ಮಾರ್ಗದಲ್ಲಿ ತಾತ್ಕಾಲಿಕವಾಗಿ ವಿಮಾನ ಹಾರಾಟ ಮುಂದುವರಿಸಲು ರಾಜ್ಯ ಸರ್ಕಾರವು ವಯಬಿಲಿಟಿ ಗ್ಯಾಪ್ ಫಂಡಿಂಗ್ (VGF) ಮೂಲಕ ಆರ್ಥಿಕ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.
ಹಿಂದಿನ ಸಂದರ್ಭಗಳಂತೆ ಈ ಬಾರಿ ಯಾವುದೇ ಕಮರ್ಷಿಯಲ್ ಬ್ರೇಕ್ ಎದುರಾಗದಂತೆ ಕ್ರಮ ಕೈಗೊಳ್ಳುವ ಅಗತ್ಯವಿದೆ. ಯಾವುದೇ ಅಡೆತಡೆಯಿಲ್ಲದೆ ಮುಂದಿನ ಟೆಂಡರ್ ಪ್ರಕ್ರಿಯೆಯಲ್ಲಿಯೂ ಶಿವಮೊಗ್ಗ ವಿಮಾನ ನಿಲ್ದಾಣ ಪರಿಗಣನೆಗೆ ಬಂದಿರುವುದು ಸಂತಸದ ವಿಚಾರವಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಈಗಾಗಲೇ ಎರಡು ಮೂರು ಪ್ರಮುಖ ವಿಮಾನಯಾನ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ಅಪ್ಪರ್ ಭದ್ರಾ ನೀರು ಹರಿಯುತ್ತಿರುವುದು ಬಿಜೆಪಿ ಸರ್ಕಾರದ ಕೊಡುಗೆ
ಹಿರಿಯೂರು ಕೆನಾಲ್ನಲ್ಲಿ ಅಪ್ಪರ್ ಭದ್ರಾ ಯೋಜನೆಯ ನೀರು ಹರಿಯುತ್ತಿರುವ ವಿಚಾರವಾಗಿ ಮಾತನಾಡಿದ ಸಂಸದರು, ಹಿಂದಿನ ಬಿಜೆಪಿ ಸರ್ಕಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರಯತ್ನ, ಬದ್ಧತೆ ಮತ್ತು ಯೋಜನೆಗೆ ನೀಡಿದ ಅನುದಾನದ ಫಲವಾಗಿ ಇಂದು ನೀರು ಹರಿಯಲು ಸಾಧ್ಯವಾಗಿದೆ ಎಂದರು.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇದ್ದರೂ ಹಿರಿಯೂರು ಭಾಗಕ್ಕೆ ನೀರು ತಲುಪುತ್ತಿರುವುದು ಹಿಂದಿನ ಬಿಜೆಪಿ ಸರ್ಕಾರದ ಕೊಡುಗೆಯಾಗಿದೆ. ಈ ಯೋಜನೆಗಾಗಿ ಹಿಂದಿನ ಸರ್ಕಾರ ಕೈಗೊಂಡ ಪ್ರಯತ್ನಗಳು ಹಾಗೂ ನೀಡಿದ ಅನುದಾನದ ಕುರಿತು ಜನರಿಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಹೇಳಿದರು.
ಎನ್ಡಿಎ ಅಭ್ಯರ್ಥಿ ಆಯ್ಕೆ ಕುರಿತು ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿದ್ದೇವೆ
ಮುಂಬರುವ ಚುನಾವಣೆಯಲ್ಲಿ ಎನ್ಡಿಎ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ನೂರಕ್ಕೆ ನೂರು ಶಾಸಕರನ್ನು ಗೆಲ್ಲಿಸಿಕೊಂಡು ಬರುವಂತಹ ರಾಜಕೀಯ ವಾತಾವರಣ ರಾಜ್ಯದಲ್ಲಿದೆ ಎಂದು ಬಿ.ವೈ. ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಅಭ್ಯರ್ಥಿ ಘೋಷಣೆಗಾಗಿ ನಾವೆಲ್ಲರೂ ಕಾಯುತ್ತಿದ್ದೇವೆ. ರಾಜ್ಯದ ಬಿಜೆಪಿ ನಾಯಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೂ ಈ ಕುರಿತು ಚರ್ಚಿಸಿದ್ದಾರೆ. ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ಯಾರಿಗೆ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒತ್ತಾಯ
ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಸಂಸದರು, ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಅತ್ಯಂತ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.
ಕಡಿಮೆ ಗೌರವಧನದ ನಡುವೆಯೂ ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಸೇವೆ ಮತ್ತು ಜಾಗೃತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಗೌರವಧನ ಹೆಚ್ಚಳ ಸೇರಿದಂತೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಅವರು ಹೋರಾಟ ಮುಂದುವರಿಸುತ್ತಿರುವುದು ಗಮನಿಸಬೇಕಾದ ಸಂಗತಿ.
ಸರ್ಕಾರ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸಲು ಮುಂದಾಗಬೇಕು ಎಂದು ಬಿ.ವೈ. ರಾಘವೇಂದ್ರ ಆಗ್ರಹಿಸಿದರು.
MP shares good news regarding Shimoga airport



0 ಕಾಮೆಂಟ್ಗಳು