SUDDILIVE || SHIVAMOGGA
ಶಿವಮೊಗ್ಗದ ಬೈಪಾಸ್, ಎನ್.ಟಿ. ರಸ್ತೆಯಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ-Footpath Encroachment Clearance Drive on Shivamogga Bypass and N.T. Road
ಶಿವಮೊಗ್ಗ: ನಗರದ ಬೈಪಾಸ್ ರಸ್ತೆ ಹಾಗೂ ಎನ್.ಟಿ. ರಸ್ತೆಯಲ್ಲಿ ಫುಟ್‌ಪಾತ್‌ಗಳನ್ನು ಒತ್ತುವರಿ ಮಾಡಿಕೊಂಡು ಅಂಗಡಿ ಮತ್ತು ಇತರೆ ವಾಣಿಜ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದ ಸ್ಥಳಗಳ ವಿರುದ್ಧ ಮಹಾನಗರ ಪಾಲಿಕೆ ಹಾಗೂ ಸಂಚಾರಿ ಪೊಲೀಸರು ಜಂಟಿಯಾಗಿ ತೆರವು ಕಾರ್ಯಾಚರಣೆ ನಡೆಸಿದರು.
ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಮೀಸಲಿರುವ ಫುಟ್‌ಪಾತ್‌ಗಳನ್ನು ಕೆಲವರು ಅತಿಕ್ರಮಿಸಿಕೊಂಡು ಅಂಗಡಿ ಮುಂಗಟ್ಟುಗಳನ್ನು ಹಾಕಿಕೊಂಡಿದ್ದರು. ಇನ್ನು ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸಿಕೊಳ್ಳುವ ಮೂಲಕ ಸಾರ್ವಜನಿಕರು ಫುಟ್‌ಪಾತ್‌ನಲ್ಲಿ ಸಂಚರಿಸಲು ತೊಂದರೆ ಉಂಟುಮಾಡುತ್ತಿದ್ದರು. ಇದರಿಂದ ಪಾದಚಾರಿಗಳು ಅನಿವಾರ್ಯವಾಗಿ ರಸ್ತೆಯಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡರು. ಸಂಚಾರಿ ಪೊಲೀಸ್ ಠಾಣೆಯ ಸಿಪಿಐ ದೇವರಾಜ್ ಅವರ ನೇತೃತ್ವದಲ್ಲಿ ಜೆಸಿಬಿ ಯಂತ್ರದ ಸಹಾಯದಿಂದ ಫುಟ್‌ಪಾತ್‌ಗಳ ಮೇಲಿದ್ದ ಒತ್ತುವರಿಗಳನ್ನು ತೆರವುಗೊಳಿಸಲಾಯಿತು.
ಬೈಪಾಸ್ ಮತ್ತು ಎನ್.ಟಿ. ರಸ್ತೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿ ಪಾದಚಾರಿ ಮಾರ್ಗವನ್ನು ಮುಕ್ತಗೊಳಿಸುವ ಪ್ರಯತ್ನ ಮಾಡಲಾಯಿತು. ಫುಟ್‌ಪಾತ್‌ಗಳು ಪಾದಚಾರಿಗಳ ಸಂಚಾರಕ್ಕೆ ಮುಕ್ತವಾಗಿರಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ನಗರದಲ್ಲಿ ಪಾದಚಾರಿಗಳ ಸುಗಮ ಸಂಚಾರ ಹಾಗೂ ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು ಫುಟ್‌ಪಾತ್‌ಗಳನ್ನು ಒತ್ತುವರಿ ಮಾಡಿಕೊಳ್ಳದೆ, ಅವುಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತವಾಗಿಡಬೇಕು ಎಂಬುದು ಈ ಕಾರ್ಯಾಚರಣೆಯ ಆಶಯವಾಗಿದೆ.



0 ಕಾಮೆಂಟ್‌ಗಳು