SUDDILIVE || SHIVAMOGGA
ಶಿವಮೊಗ್ಗ ಜಿಲ್ಲೆಯಲ್ಲಿ ಕೆಎಫ್ಡಿ ತಡೆಗೆ ಆರೋಗ್ಯ ಇಲಾಖೆ ಸನ್ನದ್ಧ; ತಾಲೂಕು ಆಸ್ಪತ್ರೆಗಳಲ್ಲಿ 10 ಹಾಸಿಗೆಗಳ ವಾರ್ಡ್ ಸಿದ್ಧತೆ-Health Department prepared to prevent KFD in Shivamogga district; 10-bed wards prepared in taluk hospitals
ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯಿತಿ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಯು.ಟಿ. ಖಾದರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ಆರೋಗ್ಯ ವ್ಯವಸ್ಥೆ ಹಾಗೂ ಮಂಗನ ಕಾಯಿಲೆ (ಕೆಎಫ್ಡಿ) ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಿದರು.
ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವರು, ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವನ್ನು ಪ್ರಸ್ತಾಪಿಸಿದರು. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಅಭಿಯಾನ
ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಂತರ್ ಇಲಾಖಾ ಸಭೆಗಳನ್ನು ಆರಂಭಿಸಲಾಗಿದೆ. ಕೆಎಫ್ಡಿ ಹಾಟ್ಸ್ಪಾಟ್ಗಳನ್ನು ಗುರುತಿಸಿ, ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಪ್ರತಿಯೊಂದು ಹಳ್ಳಿಯಲ್ಲೂ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ.
ಜನರು ಹೆಚ್ಚಾಗಿ ಸೇರುವ ಸ್ಥಳಗಳು, ಕೃಷಿ ಚಟುವಟಿಕೆ ನಡೆಯುವ ಪ್ರದೇಶಗಳು ಹಾಗೂ ಅಡಿಕೆ ತೋಟಗಳಲ್ಲಿ ಕಾರ್ಮಿಕರು ಸೇರುವ ಸ್ಥಳಗಳಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ವಿಶೇಷವಾಗಿ ಶಿಕಾರಿಪುರ ಸೇರಿದಂತೆ ವಿವಿಧ ಭಾಗಗಳಿಂದ ಸಾಗರದ ಸುತ್ತಮುತ್ತಲಿನ ಅಡಿಕೆ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರಿಗೆ ಮಂಗನ ಕಾಯಿಲೆ ಕುರಿತು ಅರಿವು ಮೂಡಿಸುವ ಅಗತ್ಯವಿದೆ. ಕಾಡು ಮತ್ತು ತೋಟದ ಪ್ರದೇಶಗಳಿಗೆ ತೆರಳುವಾಗ ಉಣ್ಣೆಗಳಿಂದ ರಕ್ಷಣೆ ಪಡೆಯುವುದು, ಕೆಲಸ ಮುಗಿಸಿ ಬಂದ ನಂತರ ಬಿಸಿನೀರಿನಲ್ಲಿ ಸ್ನಾನ ಮಾಡುವಂತಹ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಲಾಗುತ್ತಿದೆ.
ಮಂಗಗಳು ಮೃತಪಟ್ಟರೆ ತಕ್ಷಣ ಮಾಹಿತಿ ನೀಡಲು ಸೂಚನೆ
ಯಾವುದೇ ಗ್ರಾಮದಲ್ಲಿ ಮಂಗಗಳು ಮೃತಪಟ್ಟಿರುವುದು ಕಂಡುಬಂದರೆ ತಕ್ಷಣ ಆರೋಗ್ಯ ಇಲಾಖೆ ಅಥವಾ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಪಡೆಗಳಿಗೆ ಸೂಚಿಸಲಾಗಿದೆ.
ಜ್ವರ ಕಾಣಿಸಿಕೊಂಡ ವ್ಯಕ್ತಿಗಳಲ್ಲಿ ಕೆಎಫ್ಡಿ ಶಂಕೆ ಇದ್ದರೆ ತಕ್ಷಣ ರಕ್ತದ ಮಾದರಿ ಸಂಗ್ರಹಿಸಿ ಶಿವಮೊಗ್ಗದ ವೈರಾಣು ರೋಗ ಪರೀಕ್ಷಾ ಪ್ರಯೋಗಾಲಯಕ್ಕೆ (ವಿಡಿಎಲ್) ಕಳುಹಿಸಿ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.
ತಾಲೂಕು ಆಸ್ಪತ್ರೆಗಳಲ್ಲಿ 10 ಹಾಸಿಗೆಗಳ ವಿಶೇಷ ವಾರ್ಡ್
ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ತಲಾ 10 ಹಾಸಿಗೆಗಳ ವಾರ್ಡ್ಗಳನ್ನು ಸಿದ್ಧಪಡಿಸಲಾಗಿದೆ. ಕೆಎಫ್ಡಿ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದರೆ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ಹೊಸನಗರ ಭಾಗದಲ್ಲಿ ಸಿಎಸ್ಸಿ ಕೇಂದ್ರಕ್ಕೆ ಪ್ರಸ್ತಾವನೆ
ಸಭೆಯಲ್ಲಿ ಹೊಸನಗರ ತಾಲೂಕು ವ್ಯಾಪ್ತಿಯ ಆರೋಗ್ಯ ಸೇವೆಗಳ ಬಗ್ಗೆಯೂ ಚರ್ಚೆ ನಡೆಯಿತು. ಕೆಲವು ಗ್ರಾಮೀಣ ಪ್ರದೇಶಗಳಿಂದ ತಾಲೂಕು ಆಸ್ಪತ್ರೆಗೆ ಬರಲು ದೂರವಾಗುತ್ತಿರುವ ಹಿನ್ನೆಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ (ಸಿಎಸ್ಸಿ) ಸ್ಥಾಪಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.
ಸಂಬಂಧಪಟ್ಟ ಪ್ರದೇಶದಲ್ಲಿ ಸುಮಾರು ನಾಲ್ಕರಿಂದ ಐದು ಎಕರೆ ಜಾಗ ಲಭ್ಯವಿದ್ದು, ಸಿಎಸ್ಸಿ ಸ್ಥಾಪನೆಗೆ ಅಗತ್ಯವಿರುವ ಸಿಬ್ಬಂದಿ ಮತ್ತು ಮೂಲಸೌಕರ್ಯಗಳ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ. ಸುತ್ತಮುತ್ತಲಿನ ಸುಮಾರು 35 ಸಾವಿರ ಜನಸಂಖ್ಯೆಗೆ ಅನುಕೂಲವಾಗುವಂತೆ ಕೇಂದ್ರ ಸ್ಥಾಪನೆಯ ಅಗತ್ಯವನ್ನು ಸಭೆಯಲ್ಲಿ ವಿವರಿಸಲಾಯಿತು.
ಸೊರಬ ಆಸ್ಪತ್ರೆಯಲ್ಲಿ ದಿನಕ್ಕೆ 600ರಿಂದ 700 ಹೊರರೋಗಿಗಳು
ಸೊರಬ ತಾಲೂಕು ಆಸ್ಪತ್ರೆಯಲ್ಲಿ 100 ಹಾಸಿಗೆಗಳ ವ್ಯವಸ್ಥೆಯಿದ್ದು, ಒಟ್ಟು 23 ಎಕರೆ ಜಮೀನು ಲಭ್ಯವಿದೆ. ಪ್ರತಿದಿನ ಸರಾಸರಿ 600ರಿಂದ 700 ಹೊರರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಸುಮಾರು 50 ಒಳರೋಗಿಗಳು ದಾಖಲಾಗುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಆದರೆ ಆಸ್ಪತ್ರೆಯಲ್ಲಿ ಇಎನ್ಟಿ ತಜ್ಞರ ಕೊರತೆ, ಅರಿವಳಿಕೆ ತಜ್ಞರಾಗಿ ಒಬ್ಬರೇ ಕಾರ್ಯನಿರ್ವಹಿಸುತ್ತಿರುವುದು ಹಾಗೂ ಸ್ತ್ರೀರೋಗ ತಜ್ಞರ ಲಭ್ಯತೆಯ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ಸ್ತ್ರೀರೋಗ ತಜ್ಞರು ದೀರ್ಘಾವಧಿ ರಜೆಯಲ್ಲಿರುವುದರಿಂದ ಹೆರಿಗೆ ಸೇವೆಗಳ ಮೇಲೂ ಪರಿಣಾಮ ಬೀರುತ್ತಿರುವ ಬಗ್ಗೆ ಗಮನ ಸೆಳೆಯಲಾಯಿತು.
ತಜ್ಞ ವೈದ್ಯರ ಕೊರತೆ ನೀಗಿಸುವುದು, ವೈದ್ಯರಿಗೆ ಅಗತ್ಯ ತರಬೇತಿ ನೀಡುವುದು ಹಾಗೂ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸರ್ಕಾರಿ ಆಸ್ಪತ್ರೆಗಳ ಸೌಲಭ್ಯಗಳ ಬಗ್ಗೆ ಜನರಿಗೆ ತಿಳಿಸಿ
ಸರ್ಕಾರಿ ಆಸ್ಪತ್ರೆಗಳ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರತಿಯೊಂದು ತಾಲೂಕಿನಲ್ಲಿ ಯಾವೆಲ್ಲ ವೈದ್ಯಕೀಯ ಸೌಲಭ್ಯಗಳಿವೆ, ಯಾವ ತಜ್ಞ ವೈದ್ಯರು ಲಭ್ಯವಿದ್ದಾರೆ, ಯಾವ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ಜನರಿಗೆ ತಲುಪಿಸಬೇಕು. ಮುಂದಿನ 15 ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಲಭ್ಯವಿರುವ ಆರೋಗ್ಯ ಸೇವೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮ ರೂಪಿಸಬೇಕು. ನಂತರದ 15 ದಿನಗಳ ಅಂತರದಲ್ಲಿ ಮತ್ತೊಂದು ಸುತ್ತಿನ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಯಿತು.
ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯಗಳಿದ್ದರೂ ಅವುಗಳ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ಇಲ್ಲದಿರುವುದರಿಂದ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸುವ ಪರಿಸ್ಥಿತಿ ಇದೆ. ಈ ಮನೋಭಾವ ಬದಲಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ನಿರಂತರವಾಗಿ ಸಾರ್ವಜನಿಕ ಸಂಪರ್ಕ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಸಚಿವರು ಸೂಚಿಸಿದರು.




0 ಕಾಮೆಂಟ್ಗಳು