SUDDILIVE || HOLALKERE
ಅಪಘಾತದಲ್ಲಿ ಹೊಳಲ್ಕೆರೆಯ ಮೂಲದ ಯುವಕ ದುರ್ಮರಣ, ಚಾಲಕನಿಗೆ ಗಂಭೀರಗಾಯ-A young man from Holalkere dies in an accident, the driver is seriously injured.
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಿಟಿ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಹೊಳಲ್ಕೆರೆ ಮೂಲದ 31 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಜಾವಳ್ಳಿ ಸಮೀಪ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮೂಲದ ದರ್ಶನ್ (31) ಮೃತಪಟ್ಟ ದುರ್ದೈವಿ. ಅಪಘಾತದಲ್ಲಿ ಕಾರು ಚಾಲನೆ ಮಾಡುತ್ತಿದ್ದ ಶರತ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜು
ಶಿವಮೊಗ್ಗ ತಾಲೂಕಿನ ಜಾವಳ್ಳಿ ಸಮೀಪ ಟಿಟಿ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಟಿಟಿ ವಾಹನ ವೇಗವಾಗಿ ಬಂದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ವಾಹನ ನಜ್ಜುಗುಜ್ಜಾಗಿದೆ.
ಅಪಘಾತದ ತೀವ್ರತೆಗೆ ಕಾರು ಚಾಲಕ ಶರತ್ ಅವರ ಕಾಲು ಕಾರಿನೊಳಗೆ ಸಿಲುಕಿಕೊಂಡಿತ್ತು. ಗಂಭೀರವಾಗಿ ಗಾಯಗೊಂಡು ತೀವ್ರ ನೋವಿನಿಂದ ಒದ್ದಾಡುತ್ತಿದ್ದ ಅವರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ಬಳಿಕ ಗಾಯಾಳುವನ್ನು ಕಾರಿನಿಂದ ಹೊರತೆಗೆದು ತಕ್ಷಣ ಆಸ್ಪತ್ರೆಗೆ ರವಾನಿಸಲಾಯಿತು.
ಆದರೆ, ಕಾರಿನಲ್ಲಿದ್ದ ದರ್ಶನ್ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರ ಭೇಟಿ, ಪ್ರಕರಣ ದಾಖಲು
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
A young man from Holalkere dies in an accident, the driver is seriously injured.



0 ಕಾಮೆಂಟ್ಗಳು