Advertisement

ಶಿವಮೊಗ್ಗದ ಗ್ರಾಮಾಂತರ ಭಾಗದಲ್ಲಿ ನೆಗೆದುಬಿದ್ದು ಹೋಗುತ್ತಾ ಮೈತ್ರಿ? ಮಾಜಿ ಶಾಸಕರ ಫ್ರೆಂಡ್ಲಿ ಫೈಟ್ ನ ಕಥೆ ಏನು?Alliances are falling apart in rural Shivamogga? What's the story behind the friendly fight between former MLAs?

 SUDDILIVE || SHIVAMOGGA

ಶಿವಮೊಗ್ಗದ ಗ್ರಾಮಾಂತರ ಭಾಗದಲ್ಲಿ ನೆಗೆದುಬಿದ್ದು ಹೋಗುತ್ತಾ ಮೈತ್ರಿ? ಮಾಜಿ ಶಾಸಕರ ಫ್ರೆಂಡ್ಲಿ ಫೈಟ್ ನ ಕಥೆ ಏನು?Alliances are falling apart in rural Shivamogga? What's the story behind the friendly fight between former MLAs?

Rural, bjp

ಶಿವಮೊಗ್ಗ: ರಾಜ್ಯಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿದರೂ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸುವ ಸಾಧ್ಯತೆಗಳಿವೆ. ಅದರಲ್ಲೂ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಚುನಾವಣೆ ಎದುರಿಸುವ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಕೆ.ಬಿ.ಅಶೋಕನಾಯ್ಕ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ವಿಚಾರ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸ್ಪರ್ಧೆಯ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಕೆಲಸ ಮಾಡಿವೆ. ವಿಧಾನಪರಿಷತ್ ಚುನಾವಣೆಯ ಸಂದರ್ಭದಲ್ಲಿಯೂ ಮೈತ್ರಿ ಆಧಾರದಲ್ಲಿ ಸ್ಥಾನಗಳ ಹಂಚಿಕೆ ಕುರಿತು ಚರ್ಚೆ ನಡೆದಿದೆ. ಆದರೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳ ವಿಚಾರದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಬೇಕು ಎಂಬ ಅಭಿಪ್ರಾಯವಿದೆ ಎಂದು ಹೇಳಿದರು.

ಸ್ಥಳೀಯ ಮಟ್ಟದ ನಿರ್ಧಾರಕ್ಕೆ ಆದ್ಯತೆ

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಬಗ್ಗೆ ರಾಜ್ಯ ಮತ್ತು ಕೇಂದ್ರದ ನಾಯಕರು ಯಾವ ರೀತಿಯ ಮಾರ್ಗದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಯೂ ಒಟ್ಟಾಗಿ ಸ್ಪರ್ಧಿಸುವ ಕುರಿತು ಹೇಳಿಕೆ ನೀಡಿದ್ದಾರೆ. ಆದರೆ ಶಿವಮೊಗ್ಗ ಜಿಲ್ಲೆಯ ಮಟ್ಟದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸ್ವತಂತ್ರವಾಗಿ ಸ್ಪರ್ಧಿಸುವ ಅಭಿಪ್ರಾಯ ಹೊಂದಿದ್ದಾರೆ ಎಂದು ತಿಳಿಸಿದರು.

ಫ್ರೆಂಡ್ಲಿ ಫೈಟ್ ಎಂಬ ಪರಿಕಲ್ಪನೆಯೂ ಚರ್ಚೆಯಲ್ಲಿದೆ. ಅಂದರೆ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ತಮ್ಮದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಸ್ಪರ್ಧಿಸುವುದು, ಚುನಾವಣೆ ಬಳಿಕ ಸ್ಥಳೀಯ ಆಡಳಿತದಲ್ಲಿ ಒಟ್ಟಾಗಿ ಕೆಲಸ ಮಾಡುವ ಸಾಧ್ಯತೆಯೂ ಇದೆ. ಆದರೆ ಫ್ರೆಂಡ್ಲಿ ಫೈಟ್‌ನ ಸ್ವರೂಪ ಮತ್ತು ಅನುಷ್ಠಾನದ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರವಾಗಿಲ್ಲ ಎಂದು ಹೇಳಿದರು.

ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆಯ ಚಿಂತನೆ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮುಂದಿನ ಶಾಸಕರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಬಿಂಬಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಶೋಕನಾಯ್ಕ್, ಕಾರ್ಯಕರ್ತರು ಅಭಿಯಾನದ ರೂಪದಲ್ಲಿ ಇಂತಹ ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿ ಸಂಘಟನೆಯ ಬಲದ ಆಧಾರದಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಬೇಕು ಎಂಬುದು ನಮ್ಮ ಆಶಯ ಎಂದರು.

ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸುವ ಕುರಿತು ಸದ್ಯದ ಪರಿಸ್ಥಿತಿಯಲ್ಲಿ ಚಿಂತನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರದ ನಾಯಕರು ನೀಡುವ ಸೂಚನೆಗಳನ್ನೂ ಪಾಲಿಸಲಾಗುವುದು. ಅಂತಿಮವಾಗಿ ಸ್ಥಳೀಯ ಮಟ್ಟದ ಪರಿಸ್ಥಿತಿ ಹಾಗೂ ಪಕ್ಷದ ಸಂಘಟನೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಿದರೆ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ಗುರಿ ಹೊಂದಿದ್ದೇವೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ತನ್ನದೇ ಆದ ಶಕ್ತಿಯಿದ್ದು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುವುದು ಎಂದು ಹೇಳಿದರು.

ಒಟ್ಟಾರೆ, ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಸುವ ಬಗ್ಗೆ ನಾಯಕರು ಒಲವು ವ್ಯಕ್ತಪಡಿಸುತ್ತಿದ್ದರೂ, ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪ್ರತ್ಯೇಕವಾಗಿ ಸ್ಪರ್ಧಿಸುವ ಚಿಂತನೆ ಬಿಜೆಪಿ ವಲಯದಲ್ಲಿ ಚರ್ಚೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಎರಡೂ ಪಕ್ಷಗಳು ಪ್ರತ್ಯೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆಯೇ ಎಂಬುದು ರಾಜ್ಯ ನಾಯಕತ್ವದ ಮುಂದಿನ ನಿರ್ಧಾರವನ್ನು ಅವಲಂಬಿಸಿದೆ.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಎಸ್ಟಿ ಮೋರ್ಚಾದ ಅಧ್ಯಕ್ಷ ಹರೀಶ್, ಮಾಧ್ಯಮ ಪ್ರಮುಖ್ ಗಳಾದ ಚಂದ್ರಶೇಖರ್, ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

Alliances are falling apart in rural Shivamogga? What's the story behind the friendly fight between former MLAs?

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು