SUDDILIVE || BANGALORU
ತಾಪಂ, ಜಿಪಂ ಕ್ಷೇತ್ರಗಳ ಮೀಸಲಾತಿ ಅಂತಿಮ ಅಧಿಸೂಚನೆ ಇಂದು ಪ್ರಕಟ ಸಾಧ್ಯತೆ-Final notification of reservation of TAP, ZP constituencies likely to be published today
ಬೆಂಗಳೂರು, ನ.20: ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಅಂತಿಮ ಅಧಿಸೂಚನೆ ಇಂದು (ನ.20) ಪ್ರಕಟವಾಗುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ನ.19ರಂದು ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದೆ. ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದ ಅಂತಿಮ ಅಧಿಸೂಚನೆ ಬಹುತೇಕ ನಾಳೆ ಪ್ರಕಟವಾಗಲಿದೆ ಎಂದು ತಿಳಿಸಿದ್ದರು. ಅದರಂತೆ ಇಂದು ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆಯಿದೆ.
ರಾಜ್ಯದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಹಾಗೂ 234 ತಾಲೂಕು ಪಂಚಾಯಿತಿಗಳ 3,580 ಸದಸ್ಯ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅಕ್ಟೋಬರ್ 9ರಂದು ಕರಡು ಅಧಿಸೂಚನೆ ಹೊರಡಿಸಲಾಗಿತ್ತು.
ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಅಕ್ಟೋಬರ್ 19ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ 2,900ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ಎಲ್ಲ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಅಧಿಸೂಚನೆ ಸಿದ್ಧಪಡಿಸಿದ್ದಾರೆ ಎಂದು ಸಚಿವರು ತಿಳಿಸಿದ್ದರು.
ಅಂತಿಮ ಅಧಿಸೂಚನೆ ಪ್ರಕಟವಾದ ಬಳಿಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದ ಮುಂದಿನ ಬೆಳವಣಿಗೆಗಳ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.



0 ಕಾಮೆಂಟ್‌ಗಳು