Advertisement

ಇದೇನು ಗಂಜಿ ಕೇಂದ್ರನಾ ಎಂದು ವಿಜೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ- Vijendra attacks the state government, saying, "Is this a porridge center?"

SUDDILIVE || SHIVAMOGGA

ಇದೇನು ಗಂಜಿ ಕೇಂದ್ರನಾ ಎಂದು ವಿಜೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ- Vijendra attacks the state government, saying, "Is this a porridge center?"  

Vijendra, slams



ಶಿವಮೊಗ್ಗ: ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವ ಸಂದರ್ಭದಲ್ಲಿ ಜನರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಸರ್ಕಾರ ಮುಂದಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ‘ಭಾರತ್ ಜೋಡೋ ಸೌಧ’ಗಳನ್ನು ನಿರ್ಮಿಸಿ, ಅವುಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸಂಬಳ ನೀಡುವ ಯೋಜನೆ ರೂಪಿಸುತ್ತಿರುವುದು ಯಾವ ಉದ್ದೇಶಕ್ಕಾಗಿ? ಇದು ಗಂಜಿ ಕೇಂದ್ರನಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ರೈತರ ಸಮಸ್ಯೆಗಳು, ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ಬರ ಪರಿಹಾರದ ವಿಚಾರವಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ತೆರಿಗೆದಾರರ ಹಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪೋಷಣೆ: ಆಕ್ರೋಶ

ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ತೆರಿಗೆದಾರರ ಹಣವನ್ನು ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಿಗಾಗಿ ಬಳಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಣೆಗಳಿಗೆ ಮಾತ್ರ ಸೀಮಿತವಾಗಿದ್ದು, ಅವರ ನಡೆಗೂ ನುಡಿಗೂ ಅಜಗಜಾಂತರ ವ್ಯತ್ಯಾಸವಿದೆ. ಹಿರಿಯೂರಿನಲ್ಲಿ ₹2,500 ಕೋಟಿ ಅಭಿವೃದ್ಧಿ ಕಾಮಗಾರಿಗಳ ಘೋಷಣೆ ಮಾಡಿದ್ದಾರೆ. ಆದರೆ ಈ ಹಣ ಎಲ್ಲಿಂದ ಬರುತ್ತದೆ ಎಂಬ ಪ್ರಶ್ನೆಯನ್ನು ಸ್ವತಃ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೇ ಕೇಳುವಂತಾಗಿದೆ ಎಂದು ಟೀಕಿಸಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವಾಗ ಇಂತಹ ಯೋಜನೆಗಳಿಗೆ ಹಣ ವ್ಯಯಿಸುವ ಬದಲು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಿತ್ತು ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ

ಕಳೆದ ಏಳು ದಿನಗಳಿಂದ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕುಟುಂಬ ಮತ್ತು ಮನೆಗಳನ್ನು ಬಿಟ್ಟು ಚಳಿಯನ್ನೂ ಲೆಕ್ಕಿಸದೆ ಹೋರಾಟ ನಡೆಸುತ್ತಿದ್ದರೂ ಮುಖ್ಯಮಂತ್ರಿ ಸ್ಪಂದಿಸುತ್ತಿಲ್ಲ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಭರವಸೆ ನೀಡಿತ್ತು. ಆದರೆ ಈಗ ಅವರ ಬೇಡಿಕೆಗಳಿಗೆ ಸ್ಪಂದಿಸುವ ಬದಲು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಯೋಚಿಸುವಂತೆ ಮುಖ್ಯಮಂತ್ರಿಗಳು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ. ಅಣ್ಣ, ಸಹೋದರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು ಆಶಾ ಕಾರ್ಯಕರ್ತೆಯರ ವಿಚಾರದಲ್ಲಿ ಸಹಾನುಭೂತಿಯಿಂದ ನಡೆದುಕೊಳ್ಳಬೇಕಿತ್ತು ಎಂದು ಹೇಳಿದರು.

ಬರ ಪರಿಹಾರದಲ್ಲೂ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇದ್ದರೂ ರೈತರ ಸಂಕಷ್ಟಕ್ಕೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ರೈತರಿಗೆ ಪರಿಹಾರ ನೀಡುವುದಾಗಿ ₹5,000 ಘೋಷಣೆ ಮಾಡಲಾಗಿದೆ. ಆದರೆ ಅದು ಪ್ರತಿ ಎಕರೆಗೆ ಅಥವಾ ಪ್ರತಿ ಹೆಕ್ಟೇರ್‌ಗೆ ಎಂಬುದರ ಬಗ್ಗೆಯೇ ಸರ್ಕಾರದಲ್ಲಿ ಗೊಂದಲವಿದೆ.

ಪರಮೇಶ್ವರ್ ಅವರು ಹೆಕ್ಟೇರ್‌ಗೆ ₹5,000 ಎಂದು ಹೇಳಿದರೆ, ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಗಳು ಎಕರೆಗೆ ₹5,000 ಎಂದು ಹೇಳುತ್ತಿದ್ದಾರೆ. ಸರ್ಕಾರದ ಗೊಂದಲದಿಂದ ಅಧಿಕಾರಿಗಳೂ ಯಾವುದೇ ನಿರ್ಧಾರ ಕೈಗೊಳ್ಳಲಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ಬರಗಾಲದ ಸಂದರ್ಭದಲ್ಲಿ ರೈತರಿಗೆ ಪರಿಹಾರ ನೀಡಬೇಕಾದ ಸರ್ಕಾರ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡುವುದಕ್ಕೆ ಆದ್ಯತೆ ನೀಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಎಸ್‌ಸಿಪಿ-ಟಿಎಸ್‌ಪಿ ಅನುದಾನ ದುರುಪಯೋಗದ ಬಗ್ಗೆಯೂ ಸರ್ಕಾರ ಉತ್ತರಿಸಬೇಕಿದೆ ಎಂದರು.

ಈ ಎಲ್ಲ ವಿಚಾರಗಳನ್ನು ಡಿ.2ರಿಂದ ಆರಂಭವಾಗಲಿರುವ ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಸಮರ್ಥವಾಗಿ ಪ್ರಸ್ತಾಪಿಸಲಿದೆ. ಸದನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಎಚ್ಚರಿಸಿದರು.

ಡಿ.1ರಿಂದ 25ರವರೆಗೆ ಬಿಜೆಪಿ ಸೇವಾ ದೂತ್ ಅಭಿಯಾನ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 2001ರಿಂದ ಸಾರ್ವಜನಿಕ ಜೀವನದಲ್ಲಿ ಸಲ್ಲಿಸಿರುವ 25 ವರ್ಷಗಳ ಸೇವೆಯನ್ನು ಗಮನದಲ್ಲಿಟ್ಟುಕೊಂಡು ದೇಶಾದ್ಯಂತ ಮತ್ತು ಕರ್ನಾಟಕದಲ್ಲೂ ಬಿಜೆಪಿ ವತಿಯಿಂದ ಸೇವಾ ದೂತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಅಭಿಯಾನ ನಡೆಯಲಿದೆ. ಪ್ರತಿ ಕ್ಷೇತ್ರಕ್ಕೆ ಪಕ್ಷದ ಹಿರಿಯ ಕಾರ್ಯಕರ್ತರನ್ನು ಅಲ್ಪಾವಧಿ ವಿಸ್ತಾರಕರನ್ನಾಗಿ ನೇಮಿಸಲಾಗುವುದು. ಅವರು ಆಯಾ ಕ್ಷೇತ್ರದಲ್ಲೇ 25 ದಿನಗಳ ಕಾಲ ವಾಸ್ತವ್ಯ ಹೂಡಿ ವಿವಿಧ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಯುವಕರೊಂದಿಗೆ ಸಂವಾದ, ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಗಳನ್ನು ಜನರಿಗೆ ತಿಳಿಸುವುದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ನೆನಪಿಸುವುದು ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ.

ಡಿಸೆಂಬರ್ 1ರಿಂದ 25ರವರೆಗೆ ಅಭಿಯಾನ ನಡೆಯಲಿದ್ದು, ಈಗಾಗಲೇ ಜಿಲ್ಲಾವಾರು ಮತ್ತು ವಿಧಾನಸಭಾ ಕ್ಷೇತ್ರವಾರು ಕಾರ್ಯಕರ್ತರ ಪಟ್ಟಿಯನ್ನು ಸಿದ್ಧಪಡಿಸಿ ಸಂಬಂಧಪಟ್ಟ ಮಂಡಳಿಗಳಿಗೆ ಕಳುಹಿಸುವ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿ ವರಿಷ್ಠರ ನಿರ್ಧಾರಕ್ಕೆ ಬದ್ಧ

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ವಿಜಯೇಂದ್ರ, ಸ್ಥಳೀಯ ಕಾರ್ಯಕರ್ತರು ಹಾಗೂ ರಾಜ್ಯ ನಾಯಕರ ಅಭಿಪ್ರಾಯಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ವರಿಷ್ಠರ ಗಮನಕ್ಕೆ ತರಲಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೂ ಜೆಡಿಎಸ್‌ಗೆ ಸ್ಥಾನಗಳನ್ನು ನೀಡುವಂತೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಎರಡೂ ತಮ್ಮ ಅಭಿಪ್ರಾಯಗಳನ್ನು ವರಿಷ್ಠರ ಮುಂದಿಟ್ಟಿವೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎರಡೂ ಪಕ್ಷಗಳು ಬದ್ಧವಾಗಿರಲಿವೆ ಎಂದು ತಿಳಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣೆಯನ್ನು ಎದುರಿಸಲಿವೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ ಉಂಟುಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ಮುಂಬರುವ ಹಿರಿಯರ ಉಪಚುನಾವಣೆಯಲ್ಲೂ ಮೈತ್ರಿಕೂಟ ಯಶಸ್ಸು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂಬ ಕಾಂಗ್ರೆಸ್ ಶಾಸಕರ ಆರೋಪದ ಬಗ್ಗೆಯೂ ವಿಜಯೇಂದ್ರ ಪ್ರತಿಕ್ರಿಯಿಸಿದರು.

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅರಣ್ಯ ಅಧಿಕಾರಿಗಳು ಕಾಡಾನೆಗಳನ್ನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸ್ಥಳಾಂತರಿಸುವ ಮೂಲಕ ಸಮಸ್ಯೆಯನ್ನು ಮತ್ತೊಂದು ಕ್ಷೇತ್ರಕ್ಕೆ ವರ್ಗಾಯಿಸುತ್ತಿದ್ದಾರೆ. ಇದರಿಂದ ಅರಣ್ಯದಂಚಿನ ಗ್ರಾಮಗಳ ಜನರು ಮತ್ತು ರೈತರು ತೊಂದರೆ ಅನುಭವಿಸುವಂತಾಗಿದೆ ಎಂದರು.

ಕಾಡಾನೆಗಳಿಂದ ಹೊಲಗದ್ದೆಗಳು ನಾಶವಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅರಣ್ಯ ಸಚಿವರು ಹಾಗೂ ರಾಜ್ಯ ಸರ್ಕಾರ ಮುಂದಾಗಬೇಕು. ಸೂಕ್ತ ಜಮೀನು ಗುರುತಿಸಿ ಆನೆ ಶಿಬಿರಗಳನ್ನು ಸ್ಥಾಪಿಸಿ, ಅಲ್ಲಿ ಆನೆಗಳಿಗೆ ಅಗತ್ಯವಾದ ಆಹಾರ ಸಸ್ಯಗಳನ್ನು ಬೆಳೆಸುವ ಮೂಲಕ ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕಾಡಾನೆಗಳನ್ನು ಒಂದು ಕಾಡಿನಿಂದ ಮತ್ತೊಂದು ಕಾಡಿಗೆ ಓಡಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಅರಣ್ಯ ಅಂಚಿನ ಜನರು ಮತ್ತು ರೈತರ ಜೀವ, ಆಸ್ತಿ ಹಾಗೂ ಬೆಳೆಗಳನ್ನು ರಕ್ಷಿಸಲು ವೈಜ್ಞಾನಿಕ ಯೋಜನೆ ರೂಪಿಸಿ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ ಹಾಗೂ ಮಾಧ್ಯಮ ಸಹ ಸಂಚಾಲಕ ಮಂಜುನಾಥ್ ಉಪಸ್ಥಿತರಿದ್ದರು.

Vijendra attacks the state government, saying, "Is this a porridge center?"  

ಸುದ್ದಿಲೈವ್ ಜಾಹೀರಾತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು